ಬೆಂಗಳೂರು
ಉತ್ತರ ಕರ್ನಾಟಕ ಭಾಗದಲ್ಲಿ ಇತ್ತೀಚಿಗೆ ಸುರಿದ ಭಾರಿ ಮಳೆಯಿಂದ ಉಂಟಾಗಿರುವ ಆಸ್ತಿಪಾಸ್ತಿ ಹಾನಿ ಅಂದಾಜು ಮಾಡುವ ಮತ್ತು ಪರಿಹಾರ ಒದಗಿಸುವ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಡಿದ್ದು ಮಂಗಳವಾರ ವೈಮಾನಿಕ ಸಮೀಕ್ಷೆ ಕೈಗೊಳ್ಳಲಿದ್ದಾರೆ.
ಮುಖ್ಯಮಂತ್ರಿ ಸಚಿವಾಲಯ ಈ ಕುರಿತು ಹೇಳಿಕೆ ಬಿಡುಗಡೆ ಮಾಡಿದ್ದು, ಯಡಿಯೂರಪ್ಪ ಅವರು ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ ಹಾಗೂ ಗದಗ ಜಿಲ್ಲೆಗಳಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ ಎಂದು ತಿಳಿಸಿದೆ. ಮಂಗಳವಾರ ಬೆಳಿಗ್ಗೆ 9 ಗಂಟೆಗೆ ಹೆಚ್.ಎ.ಎಲ್. ವಿಮಾನ ನಿಲ್ದಾಣದ ಮೂಲಕ ಹೊರಡಲಿರುವ ಮುಖ್ಯಮಂತ್ರಿ ಅವರು, ಬೆಳಗಾವಿ ಜಿಲ್ಲೆಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬೆಳಿಗ್ಗೆ 10.15ಕ್ಕೆ ತಲುಪಲಿದ್ದಾರೆ. ಅಲ್ಲಿಯೇ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಸಚಿವರು, ಶಾಸಕರು, ಸಂಸತ್ ಸದಸ್ಯರು, ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಳೆ ಹಾನಿ ಕುರಿತು ಚರ್ಚಿಸಲಿದ್ದಾರೆ. ಬಳಿಕ ಸಾಂಬ್ರಾ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ಮಧ್ಯಾಹ್ನ 12.30ಕ್ಕೆ ವಿಜಯಪುರ ಜಿಲ್ಲೆಯ ಆಲಮಟ್ಟಿ ಅಣಿಕಟ್ಟು ಆವರಣದ ಹೆಲಿಪ್ಯಾಡ್‍ಗೆ ಆಗಮಿಸುವ ಅವರು, ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಭೇಟಿ ನೀಡಿ ವಿಜಯಪುರ, ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳ ಸಚಿವರು, ಶಾಸಕರು, ಸಂಸತ್ ಸದಸ್ಯರು, ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.
ಮಧ್ಯಾಹ್ನ 2.30ಕ್ಕೆ ವೈಮಾನಿಕ ಸಮೀಕ್ಷೆ ನಡೆಸಿ, ಅಂದೇ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಕೋವಿಡ್-19 ಸೋಂಕು ನಿಯಂತ್ರಣ ಭಾಗವಾಗಿ, ಪ್ರವಾಸ ಸಂದರ್ಭದಲ್ಲಿ ಅತಿ ಕಡಿಮೆ ಸಂಖ್ಯೆಯಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಭಾಗವಹಿಸಬೇಕು. ಕಡ್ಡಾಯವಾಗಿ ಮಾಸ್ಕ್‍ಗಳನ್ನು ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
