ಬೆಂಗಳೂರು:
ಶಾಸಕರನ್ನು ಖರೀದಿಸಿ, ಸರ್ಕಾರಗಳನ್ನು ಉರುಳಿಸುತ್ತಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ “ಪ್ರಜಾಪ್ರಭುತ್ವ ಉಳಿಸಿ” ಎಂದು ಹೋರಾಟ ನಡೆಸುತ್ತಿದೆ. ಇದೇ ಕಾಂಗ್ರೆಸ್ ರಾಜಸ್ಥಾನದಲ್ಲಿ ಏನು ಮಾಡಿದೆ? ಸರ್ಕಾರ ರಚಿಸಲು ಬೆಂಬಲ ನೀಡಿದ ಬಿಎಸ್‌ಪಿಯ ಎಲ್ಲ ಶಾಸಕರನ್ನೂ ಕಾಂಗ್ರೆಸ್ ಸೆಳೆದಿಲ್ಲವೇ? ಇದು ಖರೀದಿಯಲ್ಲವೇ? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.
ಸರ್ಕಾರ ರಚಿಸಲು ಬೆಂಬಲ ಕೊಟ್ಟವರನ್ನೇ ಕುತಂತ್ರದಿಂದ ಸೆಳೆದುಕೊಳ್ಳುವುದು, ಇಡೀ ಪಕ್ಷವನ್ನೇ ವಿಲೀನ ಮಾಡಿಸಿಕೊಳ್ಳುವುದು ಪ್ರಜಾಪ್ರಭುತ್ವ ನಡೆಯೇ? ಸಮಾನ ಮನಸ್ಕ ಪಕ್ಷಗಳನ್ನು ಒಡೆದು ಶಾಸಕರನ್ನು ಸೆಳೆಯುತ್ತಿದ್ದರೆ ನಿಮಗೆ ಯಾರು ಬೆಂಬಲ ಕೊಟ್ಟಾರು. ಈ ತಪ್ಪುಗಳು ನಿಮಗೆ ಕಾಣುತ್ತಿಲ್ಲವೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಶಾಸಕರ ಖರೀದಿ ವಿಚಾರವಾಗಿ ದೊಡ್ಡ ಗಂಟಲು ಮಾಡುತ್ತಿರುವ ಕಾಂಗ್ರೆಸ್ ಹಿಂದೆ ಜೆಡಿಎಸ್ ಅನ್ನು ಒಡೆದಿಲ್ಲವೇ? ಒಡೆಯಲು ಪ್ರಯತ್ನಗಳನ್ನು ಮಾಡಲಿಲ್ಲವೇ? ಕಳೆದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಂಟು ಮಂದಿಯನ್ನು ಕೇವಲ ರಾಜ್ಯಸಭೆ ಚುನಾವಣೆಗಾಗಿ ಖರೀದಿಸಲಿಲ್ಲವೇ? ಇದು ಪ್ರಜಾಸತ್ತಾತ್ಮಕವೇ? ಖರೀದಿ ವಿಚಾರದಲ್ಲಿ ಎರಡೂ ಪಕ್ಷಗಳೂ ‘ಅಪರಾಧಿ’ಗಳೇ ಎಂದು ಎರಡು ಪಕ್ಷಗಳ ವಿರುದ್ಧ ಎಚ್‌ಡಿಕೆ ಟೀಕಾಪ್ರಹಾರ ನಡೆಸಿದ್ದಾರೆ.
ಎಸ್.ಎಂ ಕೃಷ್ಣ ಅವರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ನಮ್ಮ ಶಾಸಕರನ್ನು ಖರೀದಿ ಮಾಡಿರಲಿಲ್ಲವೇ? 2018ರ ವಿಧಾನಸಭೆ ಚುನಾವಣೆ ನಂತರ ನಮ್ಮ ಶಾಸಕರನ್ನು ಖರೀದಿಸಿ ಸ್ವತಂತ್ರವಾಗಿ ಸರ್ಕಾರ ರಚಿಸಲು ಹೊಂಚು ಹಾಕಿರಲಿಲ್ಲವೇ? ಕಾಂಗ್ರೆಸ್ ಬಳಿ ಈ ಪ್ರಶ್ನೆಗಳಿಗೆ ಉತ್ತರಿಸಲು ನೈತಿಕತೆ ಇದೆಯೇ? ಎಂದು ಪ್ರಶ್ನಿಸಿದ್ದಾರೆ.
2004ರ ಕಾಂಗ್ರೆಸ್-ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಇದೇ ಕಾಂಗ್ರೆಸ್ ನಮ್ಮ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡಿತ್ತು. ಇದನ್ನು ಮನಗಂಡೇ ನಾನು ಕ್ಷಿಪ್ರ ರಾಜಕೀಯ ಕ್ರಾಂತಿ ಮಾಡಬೇಕಾಯಿತು. ಪಕ್ಷಗಳನ್ನು ಒಡೆಯುವ, ಶಾಸಕರನ್ನು ಖರೀದಿಸುವ ವ್ಯವಾಹರದಲ್ಲಿ ಕಾಂಗ್ರೆಸ್ ನಿಪುಣ. ‘ಕುದುರೆ ವ್ಯಾಪಾರ’ ಎಂಬ ಭಾಷೆ ಹುಟ್ಟಿದ್ದೇ ಕಾಂಗ್ರೆಸ್ ನಿಂದ ಎಂದು ಆರೋಪಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ