ಬೆಂಗಳೂರು
ಉಪಚುನಾವಣೆ ನಡೆಯುವ ಹದಿನೈದು ಕ್ಷೇತ್ರಗಳ ಚುನಾವಣೆ ಹಿನ್ನೆಲೆಯಲ್ಲಿ ಈ ಜಿಲ್ಲೆಗಳ ವ್ಯಾಪ್ತಿಗೆ ನಿಯೋಜಿತರಾದ ವೀಕ್ಷಕರೊಂದಿಗೆ ಕೆಪಿಸಿಸಿ ನಾಯಕರು ಮಹತ್ವದ ಸಭೆ ನಡೆಸಿದರು.ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿರುವ ಕಾಂಗ್ರೆಸ್ 15 ಕ್ಷೇತ್ರಗಳ ಪೈಕಿ ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲುವ ಗುರಿ ಹೊಂದಿದೆ. ಉಪಚುನಾವಣೆಯನ್ನು ಅತ್ಯಂತ ಪ್ರತಿಷ್ಠೆಯಾಗಿ ಪರಿಗಣಿಸಿರುವ ಕಾಂಗ್ರೆಸ್ ಈ ಸಾರಿ ಎಲ್ಲಾ ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುತ್ತಿದೆ.
ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳ ಪೈಪೋಟಿಯನ್ನು ಹೇಗೆ ಎದುರಿಸಬೇಕು ಎನ್ನುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಿದೆ. ಚುನಾವಣೆ ನಡೆಯುತ್ತಿರುವ 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳನ್ನು ಕಾಂಗ್ರೆಸ್ ಕಳೆದುಕೊಂಡಿದ್ದು, ಶಾಸಕರ ರಾಜೀನಾಮೆ ಹಾಗೂ ನಂತರ ಅನರ್ಹತೆಯಿಂದ ತೆರವಾಗಿರುವ ಈ ಕ್ಷೇತ್ರಗಳನ್ನು ಮರಳಿ ಪಡೆಯುವ ಗುರಿ ಹಾಕಿಕೊಂಡಿದೆ.
ಈ ನಿಟ್ಟಿನಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದೆ. ಭಾನುವಾರ ಸಹ ಮಹತ್ವದ ಸಭೆ ನಡೆಸಿ ಗೆಲುವಿನ ರೂಪುರೇಷೆ ಹೆಣೆದಿದೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಶಾಸಕಾಂಗ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರು ಕೇಂದ್ರ, ಉತ್ತರ, ಬೆಳಗಾವಿ, ಬಳ್ಳಾರಿ ಹಾಗೂ ಮಂಡ್ಯ ಜಿಲ್ಲೆಗಳಿಗೆ ಉಪಚುನಾವಣೆ ಸಂಬಂಧ ನೇಮಕಗೊಂಡಿರುವ ವೀಕ್ಷಕರ ಸಭೆ ನಡೆಸಿದರು.
ಸಭೆಯಲ್ಲಿ ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಎಸ್ಆರ್ ಪಾಟೀಲ್, ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ಡಿ.ಕೆ. ಶಿವಕುಮಾರ್, ರಾಜ್ಯಸಭೆ ಸದಸ್ಯರಾದ ಬಿ.ಕೆ. ಹರಿಪ್ರಸಾದ್ , ಡಾ.ಎಲ್. ಹನುಮಂತಯ್ಯ ಮತ್ತಿತರರು ಭಾಗವಹಿಸಿದ್ದರು.
ವೀಕ್ಷಕರ ಸಭೆ ಬಳಿಕ ಸಿದ್ದರಾಮಯ್ಯ ಮಾತನಾಡಿ, ಎಂಟು ಕ್ಷೇತ್ರಗಳಿಗೆ ಈಗಾಗಲೇ ಅಭ್ಯರ್ಥಿ ಘೋಷಣೆ ಮಾಡಲಾಗಿದ್ದು, ಈ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲದ ಕಾರಣ ಬದಲಾವಣೆ ಇಲ್ಲ. ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಇವತ್ತು ಚರ್ಚೆಯಾಗಿದೆ.ಇನ್ನೆರಡು ದಿನಗಳಲ್ಲಿ ಅಭ್ಯರ್ಥಿಗಳನ್ನು ಅಖೈರುಗೊಳಿಸಲಾಗುವುದು ಎಂದರು.ರಾಜು ಕಾಗೆ ಅವರು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು ಏಕೆ ಎನ್ನುವುದು ತಮಗೆ ಗೊತ್ತಿಲ್ಲ.
ಕಾಂಗ್ರೆಸದ ಪಕ್ಷದ ತತ್ವ ಸಿದ್ಧಾಂತವನ್ನು ಒಪ್ಪಿಕೊಂಡು ಯಾರೇ ಬಂದರೂ ಅವರನ್ನು ಸ್ವಾಗತ ಮಾಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆಯನ್ನು ಕೈಬಿಟ್ಟ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯ ಸರ್ಕಾರ ಆಚರಣೆ ಮಾಡುವುದಿಲ್ಲ ಎಂದು ಹೇಳಿದೆ.ಈ ಬಗ್ಗೆ ಹೈಕೊರ್ಟ್ ಖಾಸಗಿಯಾಗಿ ಆಚರಿಸಬಹುದು ಎಂದು ಹೇಳಿದೆ. ಸರ್ಕಾರದಿಂದ ಟಿಪ್ಪು ಜಯಂತಿ ಆಚರಿಸುವ ಬಗ್ಗೆ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗುವುದು.ಕೆಪಿಸಿಸಿ ಕಚೇರಿಯಲ್ಲಿ ಟಿಪ್ಪು ಆಚರಣೆ ಬಗ್ಗೆ ಪಕ್ಷದ ಅಧ್ಯಕ್ಷರನ್ನೇ ಕೇಳಿ ಎಂದರು.ದಿನೇಶ್ ಗುಂಡುರಾವ್ ಮಾತನಾಡಿ, ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ವೀಕ್ಷಕರ ಸಭೆ ನಡೆದಿದ್ದು, ಸೋಮವಾರ ಹಿರಿಯ ನಾಯಕರ ಸಭೆ ನಡೆಸಲಾಗುವುದು ಎಂದರು.
ನ.13 ರಂದು ಸುಪ್ರೀಂಕೋರ್ಟ್ ನಲ್ಲಿ ಅನರ್ಹ ಶಾಸಕರ ಅರ್ಜಿ ತೀರ್ಪು ಪ್ರಕಟವಾಗಲಿದ್ದು, ತೀರ್ಪನ್ನಾಧರಿಸಿ ಅಭ್ಯರ್ಥಿಗಳ ಘೋಷಣೆ ಮಾಡಲಾಗುವುದು ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
