ಕಾಂಗ್ರೆಸ್ ಮುಕ್ತ ಜಿಲ್ಲೆಯನ್ನಾಗಿಸಲು ಸನ್ನಧರಾಗಿ

ದಾವಣಗೆರೆ:

       ಭಾಜಪ ಕಾರ್ಯಕರ್ತರು ದಾವಣಗೆರೆಯನ್ನು ಕಾಂಗ್ರೆಸ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸನ್ನಧರಾಗಬೇಕೆಂದು ಸಂಸದ ಜಿ.ಎಂ.ಸಿದ್ದೇಶ್ವರ್ ಕರೆ ನೀಡಿದರು.

        ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಾನುವಾರ ನಡೆದ ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕದ ವಿಶೇಷ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಳೇ ಜನರು ಇನ್ನೂ ಇಂದಿರಾ ಗಾಂಧಿ ಅವರನ್ನು ನಮ್ಮವ್ವ ಎಂದೇ ಭಾವಿಸಿದ್ದಾರೆ. ಆದರೆ, ರಾಹುಲ್ ಗಾಂಧಿ ಅವರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ದೇಶದಲ್ಲಿ ಕಾಂಗ್ರೆಸ್ ಪಕ್ಷ ಕುಟುಂಬ ರಾಜಕಾರಣಕ್ಕೆ ಸೀಮಿತವಾಗಿರುವಂತೆ, ದಾವಣಗೆರೆಯಲ್ಲೂ ಒಂದೇ ಕುಟುಂಬ ಕಾಂಗ್ರೆಸ್‍ನಲ್ಲಿ ರಾಜಕಾರಣ ಮಾಡುತ್ತಿದೆ. ಆದ್ದರಿಂದ ಪಕ್ಷದ ಕಾರ್ಯಕರ್ತರು ಮೋದಿ ಸರ್ಕಾರದ ಜನಪರ ಯೋಜನೆಗಳನ್ನು ಹಾಗೂ ಸಾಧನೆಗಳನ್ನು ಜನರಿಗೆ ತಲುಪಿಸುವ ಮೂಲಕ ದಾವಣಗೆರೆ ಜಿಲ್ಲೆಯನ್ನು ಕಾಂಗ್ರೆಸ್ ಮುಕ್ತ ಜಿಲ್ಲೆಯನ್ನಾಗಿಸಬೇಕೆಂದು ಕಿವಿಮಾತು ಹೇಳಿದರು.

        ಇನ್ನೂ ಐದಾರು ತಿಂಗಳಲ್ಲಿ ಲೋಕಸಭಾ ಚುನಾವಣೆ ಎದುರಾಗುತ್ತಿದ್ದು, ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಶ್ರಮಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಮಂತ್ರಿಯನ್ನಾಗಿಸಲು ಪಣ ತೊಡಬೇಕು. ಅಧಿಕಾರ ಹಿಡಿಯಲು ಒಂದು ಸ್ಥಾನವೂ ಸಹ ಮುಖ್ಯವಾಗಲಿದೆ. ಹಿಂದೆ ವಾಜಪೇಯಿ ಅವರು ಒಂದು ಸ್ಥಾನದಿಂದ ಅಧಿಕಾರ ಕಳೆದುಕೊಳ್ಳಬೇಕಾಯಿತು. ಅಲ್ಲದೆ, ಇತ್ತೀಚೆಗೆ ನಡೆಸ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ 104 ಸ್ಥಾನಗಳನ್ನು ಪಡೆದರೂ ಸಹ ಏಳೆಂಟು ಸ್ಥಾನಗಳ ಕೊರತೆಯಿಂದ ಅಧಿಕಾರ ಹಿಡಿಯಲು ಸಾಧ್ಯವಾಗಲಿಲ್ಲ. ಇದನ್ನು ಅರಿತು ಕಾರ್ಯಕರ್ತರು ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ಸಲಹೆ ನೀಡಿದರು.

       ಇಂದಿನಿಂದಲೇ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ಆರಂಭಿಸಬೇಕಾಗಿದೆ. ಮತದಾರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಅವಕಾಶವಿದ್ದು, ಯುವಜನರನ್ನು ಇನ್ನೂ ಹೆಸರು ಸೇರಿಸದ ಯುವಕರನ್ನು ಮತದಾರರ ಪಟ್ಟಿಗೆ ಸೇರಿಸುವ ಕೆಲಸ ಮಾಡಬೇಕು ಎಂದರು.

       ದೇಶದ 21 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹೊಂದಿದೆ. ಲೋಕಸಭೆಯಲ್ಲ ಮತ್ತೆ ಪಕ್ಷ ಅಧಿಕಾರಕ್ಕೆ ಬರದಂತೆ ತಡೆಯಲು ವಿರೋಧ ಪಕ್ಷಗಳು ಒಂದುಗೂಡಿ ‘ಘಟಬಂಧನ್’ ಮಾಡಿಕೊಂಡಿದ್ದಾರೆ. ವಿರೋಧಪಕ್ಷಗಳ ನಾಯಕರಲ್ಲಿ ಮತ್ತೆ ಮೋದಿ ಪ್ರಧಾನಿಯಾದರೆ, ಭ್ರಷ್ಟಾಚಾರದಲ್ಲಿ ನಮ್ಮನ್ನೆಲ್ಲ ಜೈಲಿಗೆ ಅಟ್ಟಲಿದ್ದಾರೆಂಬ ಒಂದೇ ಕಾರಣದಿಂದ ಘಟಬಂಧನ್ ಮಾಡಿಕೊಂಡಿದ್ದಾರೆ. ಆದರೆ, ಇವರ ಪ್ರಯತ್ನ ಸಫಲವಾಗುವುದಿಲ್ಲ ಎಂದು ಭವಿಷ್ಯ ನುಡಿದರು.

       ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಮಾತನಾಡಿ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ತನ್ನಷ್ಟಕ್ಕೆ ತಾನೇ ಪತನಗೊಳ್ಳಲಿದೆ. ಬಿಜೆಪಿ ಈ ಸರ್ಕಾರವನ್ನು ಬೀಳಿಸಲು ಪ್ರಯತ್ನಿಸುತ್ತಿಲ್ಲ. ಆದರೆ, ವಿನಾಕಾರಣ ನಮ್ಮ ಪಕ್ಷದ ಮೇಲೆ ಅಪರೇಷನ್ ಕಮಲದ ಆರೋಪ ಮಾಡುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಜಿ.ಎಂ. ಸಿದ್ದೇಶ್ವರ ಅವರ ವ್ಯಕ್ತಿತ್ವ, ಕೇಂದ್ರ ಸರ್ಕಾರದ ಸಾಧನೆಗಳನ್ನು ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನತೆಗೆ ಮನವರಿಕೆ ಮಾಡಿಕೊಡುವ ಚುನಾವಣೆಯಲ್ಲಿ ಜಿ.ಎಂ. ಸಿದ್ದೇಶ್ವರ ಅವರನ್ನು ಗೆಲ್ಲಿಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕೆಂದು ಸಲಹೆ ನೀಡಿದರು.

      ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಹೆಚ್.ಎನ್.ಶಿವಕುಮಾರ್ ಮಾತನಾಡಿ, ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮುಂದಿನ ಲೋಕಸಭಾ ಚುನಾವಣೆಗೆ ‘ಅಜಯ್ ಭಾರತ-ಅಟಲ್ ಬಿಜೆಪಿ’ ಎಂಬ ಘೋಷಣೆ ಕೊಡಲಾಗಿದೆ. ಈ ಹಿನ್ನಲೆಯಲ್ಲಿ ಲೋಕಸಭಾ ಚುನಾವಣೆಯ ಪಕ್ಷದ ಎಲ್ಲಾ ಕಾರ್ಯಕ್ರಮಗಳು ಈ ಹೆಸರಿನಿಂದಲೇ ರೂಪಿಸಬೇಕಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವೂ ಅನೇಕ ಕಾರ್ಯಕ್ರಮಗಳ ರೂಪು-ರೇಷೆ ನೀಡಿದೆ. ಹೀಗಾಗಿ, ಪಕ್ಷದ ಮುಖಂಡರು, ಕಾರ್ಯಕರ್ತರು ತಮಗೆ ಕೊಡುವ ಜಬಾಬ್ದಾರಿಗಳನ್ನು ಸರಿಯಾಗಿ ನಿಭಾಯಿಸಬೇಕೆಂದು ಕಿವಿಮಾತು ಹೇಳಿದರು.

      ಜಿಲ್ಲಾ ಬಿಜೆಪಿ ಅಧ್ಯಕ್ಷ ಯಶವಂತರಾವ್ ಜಾಧವ್ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಎಸ್.ಎ. ರವೀಂದ್ರನಾಥ, ಎಸ್.ವಿ. ರಾಮಚಂದ್ರ, ಪ್ರೊ.ಲಿಂಗಣ್ಣ, ಮಾಡಾಳ್ ವಿರೂಪಾಕ್ಷಪ್ಪ, ಮಾಜಿ ಶಾಸಕ ಬಿ.ಪಿ. ಹರೀಶ್, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಕೆ.ಆರ್. ಜಯಶೀಲಾ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಮಮತಾ ಮಲ್ಲೇಶಪ್ಪ, ಮುಖಂಡರಾದ ಬಿ.ರಮೇಶ್ ನಾಯ್ಕ, ಹೆಚ್.ಎಂ.ರುದ್ರಮುನಿಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap