ಚಿತ್ರದುರ್ಗ: 
ಸತ್ಯ ಮತ್ತು ಅಹಿಂಸೆಯ ಮೂಲಕ ದೇಶಕ್ಕೆ ಸ್ವಾತಂತ್ರ ತಂದುಕೊಟ್ಟ ರಾಷ್ಟ್ರಪಿತ ಮಹಾತ್ಮಗಾಂಧಿಯನ್ನು ಅವಹೇಳನವಾಗಿ ಮಾತನಾಡಿರುವ ಬಿಜೆಪಿ.ಸಂಸದ ಅನಂತಕುಮಾರ ಹೆಗಡೆ ವಿರುದ್ದ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಬಿಜೆಪಿ. ವಿರುದ್ದ ಧಿಕ್ಕಾರಗಳನ್ನು ಕೂಗಲಾಯಿತು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿ ನಾಲಿಗೆ ಮೇಲೆ ಹಿಡಿತವಿಲ್ಲದ ಕಾರವಾರದ ಸಂಸದ ಅನಂತಕುಮಾರ ಹೆಗಡೆ ಮಹಾತ್ಮಗಾಂಧಿಯ ಬಗ್ಗೆ ಕೇವಲವಾಗಿ ಮಾತನಾಡಿ ಇಡೀ ಸ್ವಾತಂತ್ರ ಹೋರಾಟಗಾರರನ್ನು ಅವಮಾನಿಸಿದ್ದಾರೆ. ಕೂಡಲೆ ಅವರು ದೇಶದ ಜನರ ಕ್ಷಮೆ ಯಾಚಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದೆಂದು ಎಚ್ಚರಿಸಿದರು.
ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಟಿ.ಜಗದೀಶ್ ಮಾತನಾಡುತ್ತ ಮಹಾತ್ಮಗಾಂಧಿ ನಕಲಿ ಹೋರಾಟಗಾರ ಎಂದು ಹಗುರವಾಗಿ ಮಾತನಾಡಿರುವ ಸಂಸದ ಅನಂತಕುಮಾರ ಹೆಗಡೆಯನ್ನು ಬಂಧಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ದೇಶದ ಸ್ವಾತಂತ್ರಕ್ಕಾಗಿ ಬ್ರಿಟೀಷರ ವಿರುದ್ದ ಹೋರಾಡಿ ಭಾರತಾಂಬೆಯನ್ನು ದಾಸ್ಯದಿಂದ ಮುಕ್ತಿಗೊಳಿಸಿದ ಮಹಾತ್ಮಗಾಂಧಿ ಬಗ್ಗೆ ಹಗುರವಾಗಿ ಮಾತನಾಡಿರುವ ಕೋಮುವಾದಿ ಬಿಜೆಪಿ.ಸಂಸದ ಅನಂತಕುಮಾರ ಹೆಗಡೆ ಸಂವಿಧಾನಕ್ಕೆ ಅಪಚಾರವೆಸಗಿದ್ದಾರೆ. ಅವರನ್ನು ತಕ್ಷಣದಿಂದಲೇ ಪಕ್ಷದಿಂದ ಉಚ್ಚಾಟಿಸಬೇಕೆಂದು ಬಿಜೆಪಿ.ನಾಯಕರುಗಳನ್ನು ಒತ್ತಾಯಿಸಿದರು.
ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಿ.ಶಿವುಯಾದವ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್‍ಅಲ್ಲಾಭಕ್ಷಿ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಕಾಶ್, ಜಿಲ್ಲಾ ವಕ್ಫ್ ಮಂಡಳಿ ಮಾಜಿ ಚೇರ್ಮನ್ ಕೆ.ಅನ್ವರ್‍ಪಾಷ, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ರಾಜಪ್ಪ, ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಅಬ್ದುಲ್ಲಾ, ಸಾಧಿಕ್‍ವುಲ್ಲಾ, ಎನ್.ಡಿ.ಕುಮಾರ್, ಸೈಯದ್ ಸೈಫುಲ್ಲಾ, ಚಾಂದ್‍ಪೀರ್, ಡಿ.ಎನ್.ಮೈಲಾರಪ್ಪ, ಸೈಯದ್ ಖುದ್ದೂಸ್, ವಸೀಂ, ಚೋಟು, ಪೂಜಾರಿ ಮೋಹನ್, ಮಹಿಳಾ ಘಟಕದ ಅಧ್ಯಕ್ಷೆ ಪಿ.ಕೆ.ಮೀನಾಕ್ಷಿ, ಫೈಲ್ವಾನ್ ತಿಪ್ಪೇಸ್ವಾಮಿ, ಜಿ.ಪಂ.ಸದಸ್ಯ ಕೃಷ್ಣಮೂರ್ತಿ, ರೆಹಮಾನ್ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








