ಚಿತ್ರದುರ್ಗ :
ಜಿಲ್ಲೆಯ ಪ್ರತಿಯೊಬ್ಬರೂ ಆಯುಷ್ಮಾನ್ ಭಾರತ್ ಯೋಜನೆಯ ಕಾರ್ಡ್ ಮಾಡಿಸಿಕೊಂಡು ಅದರ ಸೌಲಭ್ಯವನ್ನು ಪಡೆದುಕೊಳ್ಳಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಪಾಲಾಕ್ಷ ಸಾರ್ವಜನಿಕರಿಗೆ ಕೆರೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಬಗ್ಗೆ ಜಾಗೃತಿ ಜಾಥ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಎಲ್ಲರಿಗೂ ಆರೋಗ್ಯ ಎಲ್ಲೆಡೆ ಆರೋಗ್ಯ’ ಎಂಬ ಧ್ಯೇಯ ವಾಕ್ಯದೊಂದಿಗೆ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸಿದೆ. ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲ್ಲೂಕು ಜಿಲ್ಲಾ ಹಾಗೂ ಸಮುದಾಯ ಆಸ್ಪತ್ರೆಗಳಲ್ಲಿ ಈ ಯೋಜನೆ ಮೂಲಕ ರಿಯಾಯಿತಿ ದರದಲ್ಲಿ ಸಾರ್ವಜನಿಕರಿಗೆ ಚಿಕಿತ್ಸೆ ನೀಡಲಾಗುತ್ತದೆ. ಜಿಲ್ಲೆಯಲ್ಲಿ 2.46 ಲಕ್ಷ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಈಗಾಗಲೆ ವಿತರಿಸಲಾಗಿದೆ. ಈ ಆರೋಗ್ಯ ಕಾರ್ಡ್ಗಳನ್ನು ಇದುವರೆಗೂ ಮಾಡಿಸದೇ ಇರುವ ಸಾರ್ವಜನಿಕರು ಸಮುದಾಯ ಆಸ್ಪತ್ರೆಗಳಲ್ಲಿ, ಆರೋಗ್ಯ ಮಿತ್ರರಲ್ಲಿ ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ನೀಡಿದರೆ ಕಾರ್ಡ್ ನೀಡುವರು. ಜಿಲ್ಲೆಯ ಪ್ರತಿಯೊಬ್ಬರಿಗೂ ಈ ಯೋಜನೆಯ ಕಾರ್ಡ್ಗಳನ್ನು ವಿತರಿಸಲಾಗುವುದು ಎಂದು ಡಾ. ಪಾಲಾಕ್ಷ ಹೇಳಿದರು.
ಉಪವಿಭಾಗಾಧಿಕಾರಿ ಪ್ರಸನ್ನಕುಮಾರ ಮಾತನಾಡಿ ಕಡುಬಡವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ದುಬಾರಿ ವೆಚ್ಚ ಭರಿಸುವಷ್ಟು ಶಕ್ತರಾಗಿರುವುದಿಲ್ಲ. ಇದನ್ನು ಮನಗಂಡ ಸರ್ಕಾರ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಜಾಥಾದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧಾ, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಚಂದ್ರಶೇಖರ್ ಕಂಬಾಳಿ, ನಗರಸಭೆ ಪೌರಯುಕ್ತ ಹನುಮಂತರಾಜ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಮಂಜುನಾಥ್ ಹಾಗೂ ಶಾಲಾ ಕಾಲೇಜ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಜಾಥ ಕಾರ್ಯಕ್ರಮ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ, ಒನಕೆ ಓಬ್ಬವ ವೃತ್ತದ ಮಾರ್ಗವಾಗಿ ಮದಕರಿ ನಾಯಕ ವೃತ್ತದಿಂದ ಜಿಲ್ಲಾ ಆಸ್ಪತ್ರೆ ವರೆಗೆ ಸಾಗಿಬಂದಿತು. ಬಳಿಕ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳಿಗೆ ಹಾಗೂ ದತ್ತಾಂಶ ಶೇಖರಿಸುವ ನಿರ್ವಾಹಕರಿಗೆ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








