ಬೆಂಗಳೂರು:
ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಆರಂಭಿಸಲಾಗಿದ್ದ 10 ಸಾವಿರಕ್ಕೂ ಹೆಚ್ಚು ಬೆಡ್ ಗಳ ಸಾಮರ್ಥ್ಯದ ರಾಜ್ಯದ ಅತೀ ದೊಡ್ಡ ಕೋವಿಡ್ ಆರೈಕೆ ಕೇಂದ್ರವನ್ನು ಮುಚ್ಚಲಾಗುತ್ತಿದೆ.
ಈ ಬಗ್ಗೆ ಸ್ವತಃ ಬಿಬಿಎಂಪಿ ಮಾಹಿತಿ ನೀಡಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಆರಂಭಿಸಲಾಗಿದ್ದ 10,100 ಬೆಡ್ ಗಳ ಸಾಮರ್ಥ್ಯದ ರಾಜ್ಯದ ಅತೀ ದೊಡ್ಡ ಕೋವಿಡ್-19 ಆರೈಕೆ ಕೇಂದ್ರವನ್ನು ಮುಚ್ಚಲಾಗುತ್ತದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಜೊತೆ ನಡೆದ ಸಭೆ ಬಳಿಕ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಸುದ್ದಿಸಂಸ್ಥೆಯ ವರದಿ ಪ್ರಕಾರ ಬಿಬಿಎಂಪಿ ಆಯುಕ್ತ ಎನ್ ಮಂಜುನಾಥ್ ಪ್ರಸಾದ್ ಈ ಕುರಿತು ಆದೇಶ ಹೊರಡಿಸಿದ್ದು, ಸೆಪ್ಟೆಂಬರ್ 15ರಿಂದ ಮಾದಾವರ ಬಳಿ ಇರುವ ಬಿಐಇಸಿ ಕೋವಿಡ್ ಆರೈಕೆ ಕೇಂದ್ರವನ್ನು ಮುಚ್ಚಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. 10 ಸಾವಿರ ಹಾಸಿಗೆಗಳನ್ನು ಹೊಂದಿರುವ ದೊಡ್ಡ ಆರೈಕೆ ಕೇಂದ್ರ ಇದಾಗಿದ್ದು, ಈ ಕೋವಿಡ್ ಆರೈಕೆ ಕೇಂದ್ರಕ್ಕೆ ಇತ್ತೀಚಿನ ದಿನಗಳಲ್ಲಿ ದಾಖಲಾಗುತ್ತಿರುವ ಸೋಂಕಿತರ ಸಂಖ್ಯೆ ತೀರಾ ಕಡಿಮೆ ಆಗಿದೆ. ರಾಜ್ಯದಲ್ಲಿ ಪ್ರತಿನಿತ್ಯ ಸುಮಾರು 8 ಸಾವಿರಕ್ಕೂ ಅಧಿಕ ಕೋವಿಡ್ ಸೋಂಕಿತರು ಪತ್ತೆಯಾಗುತ್ತಿದ್ದು, ಈ ಪೈಕಿ ಬೆಂಗಳೂರು ನಗರವೊಂದರಲ್ಲೇ 2 ಸಾವಿರಕ್ಕೂ ಅಧಿಕ ಸೋಂಕಿತರಿದ್ದಾರೆ. ಆದರೆ ಬಹುತೇಕ ಸೋಂಕಿತರು ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯಲು ನಿರ್ಧರಿಸುತ್ತಿದ್ದು, ಇದೇ ಕಾರಣಕ್ಕೆ ಆರೈಕೆ ಕೇಂದ್ರವನ್ನು ಮುಚ್ಚಿ ಸದ್ಯ ಅದರಲ್ಲಿ ಇರುವ ರೋಗಿಗಳನ್ನು ಬೇರೆ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗುತ್ತದೆ.