ಚಿತ್ರದುರ್ಗ:
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ವೀರನಾಪುರ ಗ್ರಾಮದಲ್ಲಿ ದಲಿತ ಕೋಮಿಗೆ ಸೇರಿದ ಪ್ರತಾಪ್ ಮೇಲೆ ಹಲ್ಲೆ ನಡೆಸಿ ಬೆತ್ತಲೆ ಮೆರವಣಿಗೆ ಮಾಡಿದ ಸರ್ವಣೀಯರನ್ನು ರಾಜ್ಯದಿಂದ ಗಡಿಪಾರು ಮಾಡುವಂತೆ ಆಗ್ರಹಿಸಿ ಅಂಬೇಡ್ಕರ್ ಸೇನೆ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ದಲಿತ ಪ್ರತಾಪ್ ದೇವಸ್ಥಾನದಲ್ಲಿದ್ದ ಎನ್ನುವ ಕಾರಣಕ್ಕಾಗಿ ಸರ್ವಣೀಯರು ಮನಸೋಇಚ್ಚೆ ಥಳಿಸಿ ನಂತರ ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿ ಇಡೀ ಮನುಕುಲವನ್ನು ಅವಮಾನಿಸಿದ್ದಾರೆ. ದೇಶದಲ್ಲಿ ಇತ್ತೀಚೆಗೆ ದಲಿತರ ಮೇಲೆ ಹಲ್ಲೆ, ದೌರ್ಜನ್ಯಗಳು ಹೆಚ್ಚಾಗಿದೆ.
ಆರೋಪಿಗಳನ್ನು ಈಗಾಗಲೆ ಪೋಲಿಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ರಾಜ್ಯದಲ್ಲಿ ಇನ್ನು ಮುಂದೆ ದಲಿತರ ಮೇಲೆ ಇಂತಹ ಅಮಾನವೀಯ ಘಟನೆಗಳು ನಡೆಯಬಾರದೆಂದರೆ ಪ್ರತಾಪ್‍ನನ್ನು ಬೆತ್ತಲೆ ಮೆರವಣಿಗೆ ಮಾಡಿರುವ ಆರೋಪಿಗಳ ಮೇಲೆ ಗೂಂಡಾ ಕಾಯಿದೆ ದಾಖಲಿಸಿ ರಾಜ್ಯದಿಂದ ಗಡಿಪಾರು ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದರು.
ಅಂಬೇಡ್ಕರ್ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್ ಎ.ತಾಳಿಕೆರೆ, ಕಣಿವೆಮಾರಮ್ಮ ಯುವಕ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ ಸೇರಿದಂತೆ ಅಂಬೇಡ್ಕರ್ ಸೇನೆಯ ನೂರಾರು ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.