ಬೆಂಗಳೂರು
ಕೊರೊನಾ ಸೋಂಕು ಹರಡುವುದನ್ನು ತಡೆಯಲು ಲಾಕ್ಡೌನ್ ಜಾರಿಗೊಳಿಸಿರುವ ಹಿನ್ನಲೆಯಲ್ಲಿ ಅಗತ್ಯ ವಸ್ತುಗಳ ಸಾಗಾಣೆಗೆ ಅಂತರ್ ರಾಜ್ಯ ಹಾಗೂ ಅಂತರ ಜಿಲ್ಲೆಗಳಲ್ಲಿ ಓಡಾಡಲು ಇನ್ನು ಮುಂದೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಾತ್ರ ಪಾಸ್ ನೀಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಈ ಸಂಬಂಧ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರಿಗೆ ಪತ್ರ ಮುಖೇನ ಸೂಚನೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಅಗತ್ಯ ವಸ್ತುಗಳ ವಾಹನಗಳ ಓಡಾಟಕ್ಕೆ ತಹಶೀಲ್ದಾರ್ ಅಥವಾ ಸ್ಥಳೀಯ ಪೊಲೀಸ್ ಅಧಿಕಾರಿಗಳು ಪಾಸ್ ನೀಡುತ್ತಿರುವುದರ ವಿರುದ್ಧ ಗರಂ ಆಗಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಇನ್ನು ಮುಂದೆ ಡಿಸಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮಾತ್ರ ಪಾಸ್ ವಿತರಿಸಬೇಕು. ಈ ಸಂಬಂಧ ಅಗತ್ಯ ಕ್ರಮಕೈಗೊಳ್ಳಿ ಎಂದು ಪತ್ರದಲ್ಲಿ ಸೂಚಿಸಿದ್ದಾರೆ.
ಇನ್ನು ಮುಂದೆ ಕಡ್ಡಾಯವಾಗಿ ಅಂತರ್ ಜಿಲ್ಲಾ ಸಾರಿಗೆ ಪಾಸುಗಳನ್ನು ತಹಶೀಲ್ದಾರ್ ಆಗಲಿ ಅಥವಾ ಸ್ಥಳೀಯ ಪೊಲೀಸ್ ಅಧಿಕಾರಿಗಳಾಗಲಿ ನೀಡಬಾರದು. ಆಯಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೇ ನೀಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪತ್ರದಲ್ಲಿ ತಾಕೀತು ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
