ಹಾಸನ
ಸರಿಯಾಗಿ ಬರ ನಿರ್ವಹಿಸದೆ ಗೋಲಿಬಾರ್ ಆದರೆ ಜಿಲ್ಲಾಧಿಕಾರಿಯೇ ನೇರ ಹೊಣೆಯಾಗುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಜಿಲ್ಲಾಧಿಕಾರಿಗೆ ಎಚ್ಚರಿಕೆ ನೀಡಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕರಾದ ಯಡಿಯೂರಪ್ಪ , ಜಗದೀಶ್ ಶೆಟ್ಟರ್ ಬರಗಾಲ ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸುತ್ತಾರೆ. ಆದರೆ ಮತ್ತೊಂದೆಡೆ ಚುನಾವಣಾ ಆಯೋಗಕ್ಕೆ ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತಿದ್ದಾರೆಂದು ಅವರೇ ಅರ್ಜಿ ಸಲ್ಲಿಸಿದ್ದಾರೆ. ಹೀಗಾದರೆ ಬರ ನಿಭಾಯಿಸುವುದು ಹೇಗೆ ಎಂದು ಮುಖ್ಯ ಚುನಾವಣಾ ಆಯುಕ್ತರೇ ಹೇಳಬೇಕು. ಬರ ನಿರ್ವಹಣೆ ಗೊಂದಲದ ಬಗ್ಗೆ ಚುನಾವಣಾ ಆಯುಕ್ತರು ಮತ್ತು ಮುಖ್ಯ ಕಾರ್ಯದರ್ಶಿ ಗಮನಹರಿಸಬೇಕು ಎಂದು ಅವರು ಮನವಿ ಮಾಡಿದರು`.
ಜಿಲ್ಲಾಧಿಕಾರಿ ಪಿಡಿ ಖಾತೆಯಲ್ಲಿ 8 ಕೋಟಿ ರೂ ಹಣವಿದೆ. ಅರಸೀಕರೆ ಮತ್ತು ಅರಕಲಗೂಡು ತಾಲೂಕುಗಳಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಇದೆ. ಪರಿಹಾರ ಕಾರ್ಯಕ್ಕೂ ಹಣ ನೀಡದಿದ್ದರೆ ಹೇಗೆ ಎಂದು ಪ್ರಶ್ನಿಸಿದರು. ಬರ ನಿಭಾಯಿಸಲು ಇದುವರೆಗೂ ಒಂದೇ ಒಂದು ಪೈಸೆ ಹಣವನ್ನು ಬಿಡುಗಡೆ ಮಾಡಿಲ್ಲ. ಸರ್ಕಾರದಿಂದ ಯಾವುದೇ ಹಣ ಬಂದಿಲ್ಲ ಎಂದು ಜಿಲ್ಲಾಧಿಕಾರಿ ಹೇಳುತ್ತಿದ್ದಾರೆ. ಅವರು ಸರಿಯಾಗಿ ಬರ ನಿರ್ವಹಿಸದೆ ಗೋಲಿಬಾರ್ ಆದರೆ, ಜಿಲ್ಲೆಯಲ್ಲಿ ಹೆಚ್ಚು-ಕಡಿಮೆಯಾದರೆ ಜಿಲ್ಲಾಧಿಕಾರಿ ನೇರ ಹೊಣೆಯಾಗುತ್ತಾರೆ ಎಂದು ರೇವಣ್ಣ ಎಚ್ಚರಿಕೆ ನೀಡಿದ್ದಾರೆ.
ಬರ ನಿರ್ವಹಣೆ ಬಿಟ್ಟು ಮುಖ್ಯಮಂತ್ರಿ ಮತ್ತವರ ಕುಟುಂಬ ದೇವಾಲಯಗಳಿಗೆ ಎಡತಾಕುತ್ತಿದ್ದಾರೆ ಎಂದು ಜಗದೀಶ್ ಶೆಟ್ಟರ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ರೇವಣ್ಣ, ನಾವು ಏಕೆ ದೇವಸ್ಥಾನಕ್ಕೆ ಹೋಗಬಾರದು. ಮಗನ ಪೂಜೆಗೆ ಹೋಗಿದ್ದಾರೆ ಎಂದು ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ. ಈಗ ಪ್ರಧಾನಮಂತ್ರಿಯೇ ದೀಪ ಬೆಳಗಿ ಪೂಜೆ ಮಾಡುತ್ತಾರೆ, ಕುಮಾರಸ್ವಾಮಿ ಪೂಜೆ ಮಾಡಬಾರದಾ? ಮಗನಿಗಾಗಿ ತಂದೆ ಪೂಜೆ ಮಾಡಿದರೆ ತಪ್ಪೇನಿದೆ? ಟಂಪಲ್ ರನ್ ಅಂತಾರೆ ಯಾಕೆ ನಾವು ಟೆಂಪಲ್ ಗೆ ಹೋಗಬಾರದೇ ಎಂದು ವಿರೋಧ ಪಕ್ಷದ ನಾಯಕರಿಗೆ ರೇವಣ್ಣ ಪ್ರಶ್ನೆ ಹಾಕಿದ್ದಾರೆ.
ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಬೇಕು ಎಂಬ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರು ಈ ಬಗ್ಗೆ ತೀರ್ಮಾನಿಸುತ್ತಾರೆ. ಕಸಭಾ ಚುನಾವಣೆ ಫಲಿತಾಂಶ ಬಳಿಕ ಸರ್ಕಾರಕ್ಕೆ ಏನೂ ಆಗಲ್ಲ, ಯಾರೂ ತಲೆಕೆಡಿಸಿಕೊಳ್ಳಬೇಡಿ. ಬಿಜೆಪಿ ನಾಯಕರಿಗೆ ರಾಜ್ಯದ ಅಭಿವೃದ್ಧಿ ಬೇಕಿಲ್ಲ. ಅವರಿಗೆ ಅಧಿಕಾರದ ದಾಹ ಹೆಚ್ಚಾಗಿದೆ. ಹಾಸನ, ಮಂಡ್ಯ, ತುಮಕೂರು ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ, ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ