ವಿಧಾನ ಪರಿಷತ್ ಚುನಾವಣೆ : ಡಿಸಿಎಂ ನಾಮಪತ್ರ ಸಲ್ಲಿಕೆ

ಬೆಂಗಳೂರು

   ವಿಧಾನಸಭೆಯಿಂದ ವಿಧಾನ ಪರಿಷತ್‍ನ ಒಂದು ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಇಂದು ಬಿಜೆಪಿ ಅಭ್ಯರ್ಥಿಯಾಗಿ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ನಾಮಪತ್ರ ಸಲ್ಲಿಸಿದ್ದಾರೆ.ವಿಧಾನಸೌಧದಲ್ಲಿ ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ಇಂದು ಪಕ್ಷದ ಮುಖಂಡರ ಸಮ್ಮುಖದಲ್ಲಿ ಬಿಜೆಪಿಯಿಂದ ಲಕ್ಷ್ಮಣ ಸವದಿ ಅವರು ನಾಮಪತ್ರ ಸಲ್ಲಿಸಿದರು.

   ಸಿಎಂ ಬಿ.ಎಸ್. ಯಡಿಯೂರಪ್ಪ, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ, ಡಿಸಿಎಂ ಗೋವಿಂದ ಕಾರಜೋಳ, ಗೃಗ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ್, ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಅರಣ್ಯ ಸಚಿವ ಸಿ.ಸಿ.ಪಾಟೀಲ್, ಶಾಸಕರಾದ ಬೆಳ್ಳಿ ಪ್ರಕಾಶ್ ಮತ್ತು ಜ್ಯೋತಿ ಗಣೇಶ್ ಸೂಚಕರಾಗಿ ಸಹಿ ಹಾಕಿದ್ದಾರೆ.

   ಈ ವೇಳೆ ಡಿಸಿಎಂ ಲಕ್ಷ್ಮಣ ಸವದಿ ಅವರು ಎರಡು ಸೆಟ್ ನಾಮಪತ್ರ ಸಲ್ಲಿಸಿದ್ದಾರೆ.ವಿಧಾನ ಸಭೆಯಿಂದ ವಿಧಾನ ಪರಿಷತ್ ಗೆ ತೆರವಾಗಿದ್ದ ಸ್ಥಾನಕ್ಕೆ ಲಕ್ಷಣ್ ಸವದಿ ನಾಮಪತ್ರ ಸಲ್ಲಿಸಿದ್ದು, ನಾಮಪತ್ರ ಸಲ್ಲಿಸಲು ನಾಳೆ ಕೊನೆ ದಿನವಾಗಿದೆ.ಈ ಸಂದರ್ಭದಲ್ಲಿ ಡಿಸಿಎಂ ಅಶ್ವಥ್ ನಾರಾಯಣ್, ಸಚಿವರಾದ ವಿ. ಸೋಮಣ್ಣ, ಬಸವರಾಜ ಬೊಂಬಾಯಿ, ಮಾಧುಸ್ವಾಮಿ, ಆರ್.ಅಶೋಕ್, ಸಿ.ಸಿ.ಪಾಟೀಲ್, ಕೋಟಾ ಶ್ರೀನಿವಾಸ ಪೂಜಾರಿ,ಡಿಸಿಎಂ ಡಾ. ಅಶ್ವಥನಾರಾಯಣ್, ಶಾಸಕ ಉಮೇಶ್ ಕತ್ತಿ, ಮಹೇಶ್ ಕುಮಟಳ್ಳಿ ಮತ್ತಿತರ ನಾಯಕರು ಹಾಜರಿದ್ದರು.ನಾಮಪತ್ರ ಸಲ್ಲಿಸಲು ನಾಳೆ ಕೊನೆ ದಿನವಾಗಿದ್ದು, ಶುಕ್ರವಾರ ನಾಮಪತ್ರ ಪರಿಶೀಲನೆ ನಡೆಯಲಿದೆ. ಸೋಮವಾರ ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದ್ದು, 17 ರಂದು ಅಗತ್ಯವಿದ್ದರೆ ಚುನಾವಣೆ ನಡೆಯಲಿದೆ.

   ಈಗಿರುವ ವಿಧಾನಸಭೆಯ ಬಲಾಬಲದಲ್ಲಿ ಆಡಳಿತಾರೂಢ ಬಿಜೆಪಿಗೆ ಒಂದು ಸ್ಥಾನ ಒಲಿಯುವುದು ಖಚಿತ. ಯಾವುದೇ ಅಭ್ಯರ್ಥಿ ವಿಧಾನಸಭೆಯಿಂದ ವಿಧಾನ ಪರಿಷತ್‍ಗೆ ಆಯ್ಕೆಯಾಗಬೇಕಾದರೆ 112 ಮತಗಳನ್ನು ಪಡೆಯಬೇಕು. ಬಿಜೆಪಿ 117, ಜತೆಗೆ ಓರ್ವ ಪಕ್ಷೇತರ ಶಾಸಕರ ಬೆಂಬಲವನ್ನೂ ಹೊಂದಿದೆ. ಕಾಂಗ್ರೆಸ್ 65 ಹಾಗೂ ಜೆಡಿಎಸ್ 35 ಶಾಸಕರನ್ನು ಹೊಂದಿದೆ.

   ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡರೂ ಅಭ್ಯರ್ಥಿ ಗೆಲ್ಲಲು ಸಾಧ್ಯವಾಗುವುದಿಲ್ಲ. ಈಗಾಗಲೇ ಕಾಂಗ್ರೆಸ್ ಪರಿಷತ್ ಚುನಾವಣೆಗೆ ಅಭ್ಯರ್ಥಿಯನ್ನು ಹಾಕುವುದಿಲ್ಲ ಎಂದು ಘೋಷಣೆ ಮಾಡಿದೆ. ಇನ್ನು ಜೆಡಿಎಸ್ ಕೂಡ ಕಾಂಗ್ರೆಸ್ ಹಾದಿಯನ್ನೇ ಅನುಸರಿಸುವ ಸಾಧ್ಯತೆ ಇದೆ. ಒಂದು ವೇಳೆ ಎರಡೂ ಪಕ್ಷಗಳು ಕಣದಿಂದ ಹಿಂದೆ ಸರಿದರೆ ಲಕ್ಷ್ಮಣ ಸವದಿ ಅವಿರೋಧವಾಗಿ ವಿಧಾನ ಪರಿಷತ್‍ಗೆ ಆಯ್ಕೆಯಾಗಲು ಹಾದಿ ಸುಗಮವಾಗಲಿದೆ.

    ಪದ್ಮನಾಭ ಎಂಬುವವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಆದರೆ, ಅವರಿಗೆ ಯಾರೊಬ್ಬರೂ ಸೂಚಕರಾಗಿ ಸಹಿ ಹಾಕದ ಕಾರಣ ನಾಮಪತ್ರ ತಿರಸ್ಕೃತವಾಗುವ ಸಾಧ್ಯತೆಗಳೇ ಹೆಚ್ಚು. ಕಳೆದ ಡಿಸೆಂಬರ್‍ನಲ್ಲಿ ನಡೆದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಶಿವಾಜಿನಗರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಿಜ್ವಾನ್ ಅರ್ಷದ್ ವಿಧಾನಸಭೆಗೆ ಆಯ್ಕೆಯಾಗಿದ್ದರು.

    ಹೀಗಾಗಿ ಅವರು ಪರಿಷತ್‍ಗೆ ರಾಜೀನಾಮೆ ನೀಡಿದ್ದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಅಥಣಿಯಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ ಲಕ್ಷ್ಮಣ ಸವದಿ ಅಚ್ಚರಿ ಎಂಬಂತೆ ಸಂಪುಟಕ್ಕೆ ಸೇರ್ಪಡೆಯಾಗಿ ಉಪಮುಖ್ಯಮಂತ್ರಿಯಾದರು. ಸಚಿವರಾದವರು ಆರು ತಿಂಗಳೊಳಗೆ ಯಾವುದೇ ಸದನದ ಸದಸ್ಯರಾಗಬೇಕೆಂಬ ನಿಯಮವಿದೆ. ಇದೀಗ ರಿಜ್ವಾನ್ ಅರ್ಷದ್ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಲಕ್ಷ್ಮಣ ಸವದಿ ಆಯ್ಕೆಯಾಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link