ಚಿತ್ರದುರ್ಗ:
ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೆ ತರುವಂತೆ ಒತ್ತಾಯಿಸಿ ದಲಿತ ಶೋಷಿತ ಸಮಾಜ ಸಂಘರ್ಷ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯ ಮುಂದಾಳತ್ವ ವಹಿಸಿದ್ದ ಸಮಿತಿಯ ರಾಜ್ಯ ಉಪಾಧ್ಯಕ್ಷ ಮಾಡನಾಯಕನಹಳ್ಳಿ ರಂಗಪ್ಪ ಮಾತನಾಡಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗಾಗಿ ಕಳೆದ 25 ವರ್ಷಗಳಿಂದಲೂ ಹೋರಾಟ ಮಾಡಲಾಗುತ್ತಿದೆ. ಆದರೂ ಯಾವ ಸರ್ಕಾರಗಳು ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಲು ಮನಸ್ಸು ಮಾಡುತ್ತಿಲ್ಲ. ಇದರಿಂದ ದಲಿತರು ದಿನೆ ದಿನೆ ಒಂದಲ್ಲ ಒಂದು ರೀತಿಯ ಸಮಸ್ಯೆಗಳನ್ನು ಎದುರಿಸುವಂತಾಗಿದೆ.
ರಾಜ್ಯದಲ್ಲಿ ಸುಮಾರು 80 ಲಕ್ಷದಷ್ಟು ಮಾದಿಗ ಸಮುದಾಯ ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕವಾಗಿ ಹಿಂದುಳಿದಿದೆ. ಪರಿಶಿಷ್ಟ ಜಾತಿಗಳಲ್ಲಿ ಮಾದಿಗರು ಬಹುಸಂಖ್ಯೆಯಲ್ಲಿದ್ದರೂ ಆಳುವ ಸರ್ಕಾರಗಳು ಮಾದಿಗರ ಕೂಗಿಗೆ ಕಿಮ್ಮತ್ತು ಕೊಡುತ್ತಿಲ್ಲ ಎಂದು ಗುಡುಗಿದರು.
ಲಿಂಗಾಯಿತ ಮತ್ತು ವೀರಶೈವ ಪ್ರತ್ಯೇಕ ಧರ್ಮವೆಂದು ಹಿಂದಿನ ರಾಜ್ಯ ಸರ್ಕಾರ ತರಾತುರಿಯಲ್ಲಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿದೆ. ಆದರೆ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಲು ರಾಜ್ಯ ಸರ್ಕಾರಕ್ಕೆ ಏಕೆ ಹಿಂಜರಿಕೆ ಎಂದು ಪ್ರಶ್ನಿಸಿದ ಮಾಡನಾಯಕನಹಳ್ಳಿ ರಂಗಪ್ಪ ಮಾದಿಗರ ಸಿಟ್ಟು ಸ್ಪೋಟಗೊಳ್ಳುವ ಮುನ್ನವೇ ರಾಜ್ಯ ಸಮ್ಮಿಶ್ರ ಸರ್ಕಾರ ಎಚ್ಚೆತ್ತುಕೊಂಡು ಎ.ಜೆ.ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು. ಇಲ್ಲವಾದಲ್ಲಿ ಮುಂದೆ ಆಗುವ ಅನಾಹುತಗಳಿಗೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.
ಜಿಲ್ಲಾಧ್ಯಕ್ಷ ಪ್ರಭಾಕರ, ಉಪಾಧ್ಯಕ್ಷ ಪಿ.ಬಿ.ತಿಪ್ಪೇಸ್ವಾಮಿ, ಪರಮೇಶ್ವರ್, ಹರೀಶ್, ಮಲ್ಲಿಕಾರ್ಜುನ್, ರಾಘವೇಂದ್ರ, ಕಿರಣ್‍ಕೋಟಿ, ಶಿವಕುಮಾರ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
