ದೇವನಗರಿಯಿಂದ ನಿರ್ಗಮಿಸಿದ ಪಾದಯಾತ್ರೆ

ದಾವಣಗೆರೆ:

      ಪರಿಶಿಷ್ಟ ಪಂಗಡಕ್ಕೆ ಪ್ರಸ್ತುತ ನೀಡುತ್ತಿರುವ ಶೇ.3ರಿಂದ 7.5ಕ್ಕೆ ಹೆಚ್ಚಿಸಬೇಕೆಂದು ಒತ್ತಾಯಿಸಿ, ನಾಯಕ ಸಮಾಜ ಬಾಂಧವರು ಹರಿಹರ ರಾಜನಹಳ್ಳಿ ಗುರುಪೀಠದಿಂದ ರಾಜಧಾನಿ ಬೆಂಗಳೂರುವರೆಗೆ ಕೈಗೊಂಡಿರುವ ಪಾದಯಾತ್ರೆ ಸೋಮವಾರ ದೇವನಗರಿಯಿಂದ ನಿರ್ಗಮಿಸಿತು.

        ನಗರದ ನಾಯಕರ ಹಾಸ್ಟೆಲ್‍ನಲ್ಲಿ ಭಾನುವಾರ ರಾತ್ರಿ ವಾಸ್ತವ್ಯ ಮಾಡಿದ್ದ ಪಾದಯಾತ್ರೆ ತಂಡವು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀಪ್ರಸನ್ನಾನಂದಪುರಿ ಸ್ವಾಮೀಜಿ ಸಾರಥ್ಯದಲ್ಲಿ ಬೆಂಗಳೂರಿಗೆ ತೆರಳಲು ಆನಗೋಡು ಕಡೆಗೆ ಪ್ರಯಾಣ ಬೆಳೆಸಿತು.
ಕೂಡಲ ಸಂಗಮದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ, ದಾವಣಗೆರೆ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ, ಶಾಸಕ ಎಸ್.ಎ.ರವೀಂದ್ರನಾಥ, ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಡಾ.ಎ.ಹೆಚ್.ಶಿವಯೋಗಿಸ್ವಾಮಿ, ಜಿಲ್ಲಾ ಪಂಚಾಯತ್ ಸದಸ್ಯ ಕೆ.ಎಸ್.ಬಸವಂತಪ್ಪ, ಜಿಪಂ ಮಾಜಿ ಅಧ್ಯಕ್ಷ ಡಾ.ವೈ.ರಾಮಪ್ಪ ಮತ್ತಿತರರು ಪಾದಯಾತ್ರೆಯಲ್ಲಿ ಭಾಗವಹಿಸುವ ಮೂಲಕ ಹೋರಾಟಕ್ಕೆ ಬೆಂಬಲ ಸೂಚಿಸಿದರು.

        ಈ ಸಂದರ್ಭದಲ್ಲಿ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀಪ್ರಸನ್ನಾನಂದಪುರಿ ಸ್ವಾಮೀಜಿ ಮಾತನಾಡಿ, ಕೇಂದ್ರ ಸರ್ಕಾರ ಈಗಾಗಲೇ ಪರಿಶಿಷ್ಟ ಪಂಗಡಕ್ಕೆ ಉದ್ಯೋಗ, ಶಿಕ್ಷಣ, ಆರ್ಥಿಕ ಮತ್ತು ರಾಜಕೀಯವಾಗಿ ಶೇ.7.5 ಮೀಸಲಾತಿ ನೀಡುತ್ತಿದೆ. ಆದರೆ ರಾಜ್ಯ ಸರ್ಕಾರ ಆರ್ಥಿಕ ಹಾಗೂ ರಾಜಕೀಯವಾಗಿ ಮಾತ್ರ ಶೇ.7.5 ಮೀಸಲಾತಿ ನೀಡುತ್ತಿದ್ದು, ಉದ್ಯೋಗ ಮತ್ತು ಶಿಕ್ಷಣದಲ್ಲಿ ಕೇವಲ ಶೇ.3ರಷ್ಟು ಮಾತ್ರ ಮೀಸಲಾತಿ ನೀಡುತ್ತಿದೆ.

        ಆದ್ದರಿಂದ ಉದ್ಯೋಗ ಹಾಗೂ ಶಿಕ್ಷಣದಲ್ಲೂ ಪರಿಶಿಷ್ಟ ಪಂಗಡದ ವ್ಯಾಪ್ತಿಯಲ್ಲಿ ಬರುವ 50 ಉಪ ಜಾತಿಗಳ ವಿದ್ಯಾರ್ಥಿಗಳು ಹಾಗೂ ಯುವಕರು ಉನ್ನತ ಶಿಕ್ಷಣ ಮತ್ತು ಉದ್ಯೋಗಾವಕಾಶಗಳಿಂದ ವಂಚಿತರಾಗಿದ್ದಾರೆಂದು ಆರೋಪಿಸಿದರು.

        ಮೀಸಲಾತಿ ಹೆಚ್ಚಿಸುವಂತೆ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದ್ದರೂ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿಲ್ಲ. ನಮ್ಮ ಬೇಡಿಕೆಗೆ ಸಂಬಂಧಿಸಿದಂತೆ ಈಗಿನ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಸೇರಿದಂತೆ ಹಿಂದಿನ ಸರ್ಕಾರಗಳು ಮೂಗಿಗೆ ತುಪ್ಪ ಹಚ್ಚುವ ಕೆಲಸ ಮಾಡುತ್ತಿವೆ. ಬೇಡಿಕೆ ಈಡೇರುವವರೆಗೂ ಹೋರಾಟ ಕೈಬಿಡುವ ಪ್ರಶ್ನೆಯೇ ಇಲ್ಲ. ಸರ್ಕಾರ ಲಿಖಿತರೂಪದಲ್ಲಿ ಬೇಡಿಕೆ ಈಡೇರಿಸುವ ಭರವಸೆ ಕೊಟ್ಟಲ್ಲಿ ಪಾದಯಾತ್ರೆ ಮೊಟಕುಗೊಳಿಸಲಾಗುವುದು. ಇಲ್ಲವಾದರೆ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮುಂದುವರೆಯಲಿದೆ ಎಂದು ಎಚ್ಚರಿಸಿದರು.

       ಈಗಾಗಲೇ ಅನೇಕ ಜಾತಿಗಳನ್ನು ಸರ್ಕಾರ ಪರಿಶಿಷ್ಟ ಪಂಗಡಕ್ಕೆ ಸೇರಿಸಿದ್ದು, ಇನ್ನೂ ಕೆಲವು ಜಾತಿಗಳನ್ನು ಎಸ್ಟಿ ಪಟ್ಟಿಗೆ ಸೇರಿಸುವ ಪ್ರಯತ್ನ ನಡೆಯುತ್ತಿವೆ. ಆದರೆ ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಿಸಲು ಮಾತ್ರ ಸರ್ಕಾರ ಆಸಕ್ತಿ ವಹಿಸುತ್ತಿಲ್ಲ. ಆದ್ದರಿಂದ ಇರುವ ಮೀಸಲಾತಿಯಲ್ಲೇ 50ಕ್ಕೂ ಅಧಿಕ ಜಾತಿ ಜನರು ಸೌಲಭ್ಯಗಳಿಗೆ ಪರದಾಡುವಂತಾಗಿದೆ. ಸರ್ಕಾರ ಇತರೆ ಜಾತಿಗಳನ್ನು ಎಸ್ಟಿ ಪಟ್ಟಿಗೆ ಸೇರಿಸುವ ಮೊದಲು ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಪಂಗಡ ಮೀಸಲಾತಿಯನ್ನು ಶೇ.3ರಿಂದ 7.5ಕ್ಕೆ ಹೆಚ್ಚಿಸಬೇಕೆಂದು ಒತ್ತಾಯಿಸಿದರು.

        ಪಾದಯಾತ್ರೆಯಲ್ಲಿ ಸಮಾಜದ ಮುಖಂಡರಾದ ಹೆಚ್.ಕೆ.ರಾಮಚಂದ್ರಪ್ಪ, ಜಿಪಂ ಸದಸ್ಯ ಕೆ.ಹೆಚ್.ಓಬಳಪ್ಪ, ತಾಲ್ಲೂಕು ನಾಯಕ ಸಂಘದ ಅಧ್ಯಕ್ಷ ಹದಡಿ ಎಂ.ಬಿ.ಹಾಲಪ್ಪ, ನಾಯಕರ ಹಾಸ್ಟೆಲ್ ಅಧ್ಯಕ್ಷ ಬಿ.ವೀರಣ್ಣ, ಟಿ.ದಾಸಕರಿಯಪ್ಪ, ಗುಮ್ಮನೂರು ಮಲ್ಲಿಕಾರ್ಜುನ, ವಿನಾಯಕ ಪೈಲ್ವಾನ್, ತರಕಾರಿ ಶಿವು ಮತ್ತಿತರರು ಭಾಗವಹಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link