ತುಮಕೂರು
ಎಐಸಿಸಿ ಅಧ್ಯಕ್ಷರಾದ ರಾಹುಲ್‍ಗಾಂಧಿಯವರ ಆದೇಶದಂತೆ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳನ್ನು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಲು ಸೂಚನೆ ನೀಡಿರುವ ಹಿನ್ನಲೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಮೈತ್ರಿ ಪಕ್ಷದ ಎಲ್ಲಾ ನಾಯಕರು ರಾಜ್ಯಾದ್ಯಂತ ಪ್ರವಾಸ ಮಾಡಿ ಶ್ರಮಿಸುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರರಾದ ಮುರಳೀಧರ ಹಾಲಪ್ಪ ತಿಳಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಷ್ಟ್ರದಲ್ಲಿ ಕೋಮುವಾದಿ ಬಿಜೆಪಿ ಪಕ್ಷವನ್ನು ಈ ಚುನಾವಣೆಯಲ್ಲಿ ಮಣಿಸಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ರಚಿಸಿಕೊಂಡಿದ್ದು, ಅದರಂತೆ ರಾಜ್ಯದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳು ಕಾಂಗ್ರೆಸ್ ಮತ್ತು 8 ಕ್ಷೇತ್ರಗಳು ಜೆಡಿಎಸ್‍ಗೆ ಬಿಟ್ಟುಕೊಟ್ಟಿದ್ದು, ವಿಶೇಷವಾಗಿ ತುಮಕೂರು ಲೋಕಸಭಾ ಕ್ಷೇತ್ರ ಚುನಾವಣೆ ಇಡೀ ರಾಷ್ಟ್ರದ ಗಮನ ಸೆಳೆಯುವಂತಹ ಕ್ಷೇತ್ರವಾಗಿ ಮಾರ್ಪಟ್ಟಿದೆ. ಈ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿರುವ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರನ್ನು ಗೆಲ್ಲಿಸಲು ನಾವೆಲ್ಲರೂ ಶ್ರಮಿಸಬೇಕಿದೆ ಎಂದು ಹೇಳಿದರು.
ಈ ಕ್ಷೇತ್ರದ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಗೆಲುವಿಗೆ ಉಪಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ್‍ರವರು ಮತ್ತು ಸಣ್ಣ ಕೈಗಾರಿಕಾ ಸಚಿವರಾದ ಎಸ್.ಆರ್. ಶ್ರೀನಿವಾಸ್ ರವರ ಜಂಟಿ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತಿದ್ದು, ಎಲ್ಲಾ ಸಮುದಾಯದವರ ಮುಖಂಡತ್ವದೊಂದಿಗೆ ನಡೆಯುವ ಈ ಚುನಾವಣೆಯಲ್ಲಿ ವಿಶೇಷವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮತಗಳು ಕೋಮುವಾದಿ ಬಿಜೆಪಿ ಪಕ್ಷಕ್ಕೆ ಹೋಗದಂತೆ ತಡೆದು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣರವರು ಮಾತನಾಡಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸುಭದ್ರವಾಗಿದ್ದು, ರಾಜ್ಯ ಹಾಗೂ ರಾಷ್ಟ್ರದ ನಾಯಕರ ಆದೇಶದ ಮೇರೆಗೆ ಮೈತ್ರಿ ಧರ್ಮವನ್ನು ಪಾಲಿಸಿಕೊಂಡು ಹೋಗಬೇಕಾದದ್ದು ನಮ್ಮೆಲ್ಲರ ಕರ್ತವ್ಯ.
ತುಮಕೂರಿನಲ್ಲಿ ಮೈತ್ರಿ ಧರ್ಮದ ರಾಜಕಾರಣಕ್ಕೆ ಯಾವುದೇ ವಿರೋಧವಿಲ್ಲ, ಎಲ್ಲರೂ ಒಗ್ಗಟ್ಟಾಗಿ ಮೈತ್ರಿ ಪಕ್ಷದ ಅಭ್ಯರ್ಥಿ ಹೆಚ್.ಡಿ.ದೇವೇಗೌಡರನ್ನು ಗೆಲ್ಲಿಸಲು ಎಲ್ಲಾ ಸಮುದಾಯದ ಮುಖಂಡರು, ಕಾರ್ಯಕರ್ತರು, ಬೂತ್ ಮಟ್ಟದ ಪದಾಧಿಕಾರಿಗಳೊಂದಿಗೆ ಪ್ರಚಾರ ನಡೆಸಿ ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಲು ಶ್ರಮಿಸುವುದಾಗಿ ತಿಳಿಸಿದರು.
ತುಮಕೂರು ಲೋಕಸಭಾ ಅಭ್ಯರ್ಥಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಲೋಕಸಭೆಯಲ್ಲಿ ತುಮಕೂರು ಜಿಲ್ಲೆಯನ್ನು ಮುಂದಿಟ್ಟುಕೊಂಡು ರಾಹುಲ್ ಗಾಂಧಿಯವರೊಂದಿಗೆ ಕೈಜೋಡಿಸಲು ಮತ್ತು ರಾಷ್ಟ್ರ ರಾಜಕಾರಣಕ್ಕೆ ಸ್ಪೂರ್ತಿಗಾಗಿ ನಾವೆಲ್ಲರೂ ಬೇಧ ಭಾವ ಬದಿಗೊತ್ತಿ ಮೈತ್ರಿಧರ್ಮವನ್ನು ಪಾಲಿಸಬೇಕಾದ್ದು ನಮ್ಮ ಪ್ರಥಮ ಕರ್ತವ್ಯವಾಗಿದೆ ಎಂಬುದನ್ನು ಪ್ರತಿಯೊಬ್ಬ ಕಾರ್ಯಕರ್ತರ ಮನಸ್ಸಿನಲ್ಲಿ ಬರಬೇಕೆಂದು ಹೇಳಿದರು.
ಹಾಲಿ ಸಂಸದರಾದ ಎಸ್.ಪಿ.ಮುದ್ದಹನುಮೇಗೌಡರು ಹಾಗೂ ಮಾಜಿ ಶಾಸಕರಾದ ಕೆ.ಎನ್.ರಾಜಣ್ಣನವರು ಪಕ್ಷದ ಹಿತದೃಷ್ಠಿಯಿಂದ ತಮಗೆ ಆಗಿದ್ದ ಮನಸ್ಸಿನ ನೋವನ್ನು ಬದಿಗಿಟ್ಟು, ರಾಷ್ಟ್ರದ ಹಿತದೃಷ್ಠಿಯಿಂದ ರಾಹುಲ್ ಗಾಂಧಿ ಪ್ರಧಾನಿಯನ್ನಾಗಿ ಮಾಡುವ ಉದ್ಧೇಶದಿಂದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು, ಕೆಪಿಸಿಸಿ ಅಧ್ಯಕ್ಷರಾದ ದಿನೇಶ್‍ಗುಂಡೂರಾವ್‍ರವರು ಹಾಗೂ ಡಿಸಿಎಂ ಡಾ.ಜಿ.ಪರಮೇಶ್ವರ್‍ರವರ ಮಾತಿಗೆ ಬದ್ಧರಾಗಿ ಜಿಲ್ಲೆಯನ್ನು ಗಂಭೀರವಾಗಿ ಪರಿಗಣಿಸಿ ಮೈತ್ರಿ ಅಭ್ಯರ್ಥಿ ದೇವೇಗೌಡರನ್ನು ಗೆಲ್ಲಿಸಬೇಕೆಂಬ ನಿಲುವು ಹೊಂದಿದ್ದಾರೆ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಅಧ್ಯಕ್ಷರಾದ ಟಿ.ಬಿ.ಮಲ್ಲೇಶ್‍ರವರು ಮಾತನಾಡಿ, ಸುಮಾರು 134 ವರ್ಷಗಳ ಇತಿಹಾಸವುಳ್ಳ ಕಾಂಗ್ರೆಸ್ ಪಕ್ಷ ಇಡೀ ದೇಶದ ಸರ್ವಶಕ್ತಿ. ಕಾಂಗ್ರೆಸ್ ಪಕ್ಷದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರನ್ನು ಗುರುತಿಸುವ ಏಕೈಕ ಪಕ್ಷ ಕಾಂಗ್ರೆಸ್ ಆಗಿದೆ. ಅದರಲ್ಲೂ ಎಸ್ಸಿ/ಎಸ್ಟಿ ಎಂಬುದು ಕಾಂಗ್ರೆಸ್ ಪಕ್ಷದ ಬೆನ್ನೆಲುಬು. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲು ಶತಾಯಗತಾಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರು ಮತ್ತು ನಾಯಕರು ಒಗ್ಗೂಡಿ ಕೆಲಸ ಮಾಡುವುದಾಗಿ ತಿಳಿಸಿದರು.
ಈ ಭಾರಿಯ ಲೋಕಸಭಾ ಚುನಾವಣೆಯಲ್ಲಿ ಮೈತ್ರಿಧರ್ಮವನ್ನು ಪಾಲಿಸಲು ಜಿಲ್ಲೆಗೆ ಸಂಬಂಧಿಸಿದಂತೆ ತುಮಕೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ 8 ವಿಧಾನಸಭಾ ಕ್ಷೇತ್ರಗಳಲ್ಲೂ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಕುಣಿಗಲ್, ಮತ್ತು ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಪಾವಗಡ ಮತ್ತು ಶಿರಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಸುಮಾರು 1 ಲಕ್ಷ 80ಸಾವಿರ ಮತದಾರರ ಎಲ್ಲಾ ಪರಿಶಿಷ್ಟ ಪಂಗಡದ ಕಾರ್ಯಕರ್ತರನ್ನು ಒಗ್ಗೂಡಿಸಿ ಆಯಾ ಕ್ಷೇತ್ರಗಳಲ್ಲಿ ಪರಿಶಿಷ್ಟ ಪಂಗಡದ ಪದಾಧಿಕಾರಿಗಳೊಂದಿಗೆ ಬೂತ್ ಮಟ್ಟದಿಂದ ಪ್ರಚಾರ ನಡೆಸುವುದಾಗಿ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಉಪಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ್‍ರವರಿಗೆ ಜಿಲ್ಲೆಯಲ್ಲಿ ಜನಪ್ರಿಯ ಹಾಗೂ ಸಹಕಾರಿ ಧುರೀಣರಾದ ಕೆ.ಎನ್.ರಾಜಣ್ಣನವರು ಮತ್ತು ಜನಪ್ರಿಯ ಸಂಸದರಾದ ಹಾಗೂ ಕ್ರಿಯಾಶೀಲರಾದ ಎಸ್.ಪಿ.ಮುದ್ದಹನುಮೇಗೌಡರು ಎರಡು ಕಣ್ಣುಗಳಿದ್ದಂತೆ ಇವರ ಮಾರ್ಗದರ್ಶನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದದವರಿಗೆ ಸಾಕಷ್ಟು ರೀತಿಯ ಸೌಲಭ್ಯಗಳನ್ನು ಕಲ್ಪಿಸಿದ್ದಾರೆ. ಆದ್ದರಿಂದ ಈ ಲೋಕಸಭಾ ಚುನಾವಣೆಯಲ್ಲಿ ಎಸ್ಸಿ/ಎಸ್ಟಿ ಮತಗಳೇ ಮೈತ್ರಿ ಧರ್ಮದ ಅಭ್ಯರ್ಥಿಗೆ ನಿರ್ಣಾಯಕವಾಗಿವೆ ಎಂದು ನುಡಿದರು.
ಕಾಂಗ್ರೆಸ್ ರಾಜ್ಯ ಯುವ ಘಟಕದ ಉಪಾಧ್ಯಕ್ಷರಾದ ಆರ್.ರಾಜೇಂದ್ರ ಅವರೂ ಸಹ ಯುವಕರನ್ನು ಒಗ್ಗೂಡಿಸಿ ಮೈತ್ರಿ ಅಭ್ಯರ್ಥಿಗಳ ಗೆಲುವಿಗಾಗಿ ಶಕ್ತಿ ಮೀರಿ ಶ್ರಮಿಸುತ್ತಿದ್ದಾರೆ. ಯುವಘಟಕದ ಪದಾಧಿಕಾರಿಗಳು ಈ ಚುನಾವಣೆಯಲ್ಲಿ ಹೆಚ್ಚು ಮತದಾನವಾಗುವಂತೆ ನೋಡಿಕೊಳ್ಳುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್ ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಬಿ.ಜಿ.ನಿಂಗರಾಜು ಮಾತನಾಡಿ, ಕೋಮುವಾದಿ ಬಿಜೆಪಿ ಪಕ್ಷವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿರೋಧಿಯಾಗಿದೆ. ಬಿಜೆಪಿಗೆ ಎಂದಿಗೂ ಎಸ್ಸಿ/ಎಸ್ಟಿ ಸಮುದಾಯದವರು ಬೇಕಾಗಿಲ್ಲ, ನಮ್ಮ ಸಮುದಾಯಗಳಿಗೆ ಯಾವುದೇ ಸೌಲಭ್ಯಗಳನ್ನು ಇಲ್ಲಿಯವರೆಗೂ ಕೇಂದ್ರದಲ್ಲಿ ಅಧಿಕಾರಿದಲ್ಲಿರುವ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಕಲ್ಪಿಸದೇ ಇರುವುದು ದುರಂತ ಎಂದರು. ಆದ್ದರಿಂದ ಈ ಭಾರಿಯ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಮೈತ್ರಿ ಧರ್ಮದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿ ಗೆಲುವಿಗೆ ಶ್ರಮಿಸುವಂತೆ ಕರೆ ನೀಡಿದರು.
ಸಭೆಯಲ್ಲಿ ಕೊರಟಗೆರೆ ಪಟ್ಟಣ ಪಂಚಾಯಿತಿ ಸದಸ್ಯ ಹಾಗೂ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಅಧ್ಯಕ್ಷ ಓಬಳರಾಜು ಪ್ರಾಸ್ತಾವಿಕ ಭಾಷಣದೊಂದಿಗೆ ಸಮುದಾಯದ ಮುಖಂಡರನ್ನು ಪರಿಚಯಿಸಿ, ಎಲ್ಲರನ್ನೂ ಸ್ವಾಗತಿಸಿ, ವಂದಿಸಿದರು. ಸಭೆಯಲ್ಲಿ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ರುದ್ರೇಶ್, ಹಿಂದುಳಿದ ವರ್ಗದ ರಾಜ್ಯ ಕಾರ್ಯದರ್ಶಿ ನಾಗಮಣಿ, ನೇತ್ರಾವತಿ(ಗುಬ್ಬಿ), ಕವಿತಾ (ಕೊರಟಗೆರೆ), ಚಂದ್ರಮ್ಮ (ಮಧುಗಿರಿ), ಎಸ್ಸಿ ಘಟಕದ ಮುಖಂಡರಾದ ನರಸೀಯಪ್ಪ, ರಾಘವೇಂದ್ರ, ಶಿವಾಜಿ, ರಾಜ್ಯ ಎಸ್ಸಿ ಘಟಕದ ಕಾರ್ಯದರ್ಶಿ ಪ್ರಸನ್ನಕುಮಾರ್ ಸೇರಿದಂತೆ ಇನ್ನೂ ಅನೇಕ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು ಭಾಗವಹಿಸಿದ್ದರು.