ತುಮಕೂರು
ಮುಂಬರುವ ಫೆಬ್ರವರಿಯ ಬಜೆಟ್‍ನಲ್ಲಿ ರಾಜ್ಯದ ಅಭಿವೃದ್ದಿಗೆ ಪೂರಕವಾದ ಬಜೆಟ್ ಮಂಡನೆಯಾಗಲಿದೆ ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ತಿಳಿಸಿದರು. ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಏರ್ಪಡಿಸಿದ್ದ ರಾಜ್ಯ ಸರ್ಕಾರದ ಸಾಧನೆಯನ್ನು ಬಿಂಬಿಸುವ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಭಿವೃದ್ಧಿಗೆ ಪೂರಕವಾದ ಬಜೆಟ್‍ನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡಿಸಲಿದ್ದು, ಉದ್ಯೋಗ ಸೃಷ್ಟಿಗೆ ಹೆಚ್ಚಿನ ಒತ್ತು ನೀಡಲಿದ್ದಾರೆ ಎಂದು ಅವರು ಹೇಳಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಕ್ಕೆ ಬಂದ ನಂತರ ದೊಡ್ಡ ಸವಾಲನ್ನೇ ಸ್ವೀಕರಿಸಿದ್ದಾರೆ. ರಾಜ್ಯದಲ್ಲಿ ನೆರೆ ಉಂಟಾದಾಗ ಅದನ್ನು ಸಮಗ್ರವಾಗಿ ನಿಭಾಯಿಸಿ, ಸಂತ್ರಸ್ತರಿಗೆ ಸ್ಪಂದಿಸಿದರು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸುಮಾರು 400 ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ಮಾತೃಶ್ರೀ, ಮಾತೃವಂದನಾ ಹಾಗೂ ಜನನಿ ಸುರಕ್ಷಾ ಯೋಜನೆ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದ್ದು, ಇದು ಒಂದು ಹೆಮ್ಮೆಯ ವಿಚಾರ ಎಂದು ಅವರು ತಿಳಿಸಿದರು.
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಸೇವಾ ಯೋಜನೆಯನ್ನು ಜನವರಿಯಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿತರಣೆ ಮಾಡಲು ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರಲ್ಲದೆ ಜಿಲ್ಲೆಯಲ್ಲಿರುವ ಅಪೌಷ್ಟಿಕತೆ ಎದುರಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ಈ ಎಲ್ಲಾ ಯೋಜನೆ ಯಶಸ್ವಿಗೊಳಿಸಲು ಗ್ರಾಮ ಪಂಚಾಯಿತಿ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಕೈಜೋಡಿಸಿ ಸಹಕಾರ ನೀಡಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ನಗರದ ಕೆಎಸ್‍ಆರ್‍ಟಿಸಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಗಜೇಂದ್ರ ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ್ ಡಿ. ಸೇರಿದಂತೆ ಮತ್ತಿತರರು ಇದ್ದರು.








