ಬೆಂಗಳೂರು
ರಾಜ್ಯದಲ್ಲಿ ಸ್ವಯಂ ಸೇವಾ ಸಂಸ್ಥೆಗಳು ನಡೆಸುತ್ತಿರುವ 153 ವಿಶೇಷ ಚೇತನ ಮಕ್ಕಳ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೂ ಕ್ಷೀರಭಾಗ್ಯ ಯೋಜನೆಯಡಿ ಬಿಸಿ ಹಾಲು ವಿತರಿಸುವ ಕಾರ್ಯಕ್ರಮವನ್ನು ಇಂದಿನಿಂದ ಪ್ರಾರಂಭಿಸಲಾಗುತ್ತಿದ್ದು, ಒಟ್ಟು 10,567 ವಿಶೇಷ ಚೇತನ ಮಕ್ಕಳು ಈ ಯೋಜನೆಯ ಲಾಭ ಪಡೆಯಲಿದ್ದಾರೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು.
ಸಾರ್ವಜನಿಕ ಶಿಕ್ಷ್ಷಣ ಇಲಾಖೆ ವತಿಯಿಂದ ನಗರದ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ “63ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭ ಮತ್ತು ಮಕ್ಕಳ ಮೇಳ” ಕಾರ್ಯಕ್ರಮದಲ್ಲಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಹಾಗೂ ಧ್ವಜಾರೋಹಣ ನೆರವೇರಿಸಿದ ನಂತರ ವಿಶೇಷ ಚೇತನ ಮಕ್ಕಳಿಗೆ ಸಾಂಕೇತಿಕವಾಗಿ ಹಾಲು ಕುಡಿಸುವ ಮೂಲಕ ಕ್ಷೀರಭಾಗ್ಯ ಯೋಜನೆಯಡಿ ಬಿಸಿ ಹಾಲು ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಒಟ್ಟು 58 ಲಕ್ಷ 30 ಸಾವಿರಕ್ಕೂ ಹೆಚ್ಚು ಮಕ್ಕಳು ಈ ಸೌಲಭ್ಯ ಪಡೆಯುತ್ತಿದ್ದಾರೆ ಎಂದರು.
ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದ ಅನೇಕರು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಇಂತಹ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಸರ್ಕಾರವು ಇದುವರೆವಿಗೆ 1200 ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಿದೆ ಎಂದರಲ್ಲದೆ, ಯುವ ಉದ್ಯೋಗಾಕಾಂಕ್ಷಿಗಳಲ್ಲಿ ಕೌಶಲ್ಯದ ಕೊರತೆ ಮತ್ತು ಸಂವಹನದ ಸಮಸ್ಯೆಯಿದ್ದು, ಯುವಜನರ ಪ್ರತಿಭೆಗೆ ಸಾಣೆ ನೀಡಲು ಮೂರು ಕೌಶಲ್ಯಾಧಾರಿತ ವಿಶ್ವವಿದ್ಯಾನಿಲಯಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.
ಮಕ್ಕಳ ಭವಿಷ್ಯದ ದೃಷ್ಟಿಯಿಂದ, ವಿಶೇಷವಾಗಿ ಗ್ರಾಮೀಣ ಪ್ರದೇಶದ ಮಕ್ಕಳು ತಮ್ಮ ಕೀಳರಿಮೆಯ ಭಾವದಿಂದ ಹೊರಬಂದು ಎಲ್ಲರಂತೆ ಜೀವನವನ್ನು ಎದುರಿಸಬೇಕೆಂಬ ಉದ್ದೇಶದಿಂದ, ವ್ಯವಹಾರಿಕ ದೃಷ್ಟಿಯಿಂದ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಇಂಗ್ಲೀಷ್ ಭಾಷೆ ಕಲಿಸಲು ಚಿಂತನೆ ಮಾಡಲಾಗಿದೆ ಎಂದು ಹೇಳಿದರಲ್ಲದೆ, ಇಂಗ್ಲೀಷ್ ಕಲಿಕೆ ಕನ್ನಡ ಸಾರ್ವಭೌಮತ್ವದ ಮೇಲೆ ಸವಾಲು ಮಾಡಲು ಅವಕಾಶ ನೀಡುವುದಿಲ್ಲ. ಕನ್ನಡ ಪರವಾದ ಸರ್ಕಾರ ನಮ್ಮದು ಎಂದು ತಿಳಿಸಿದರು.
ರಾಜ್ಯದಲ್ಲಿ ತಮ್ಮ ಸರ್ಕಾರ ಶಿಕ್ಷಣ ಸಂಸ್ಥೆಗಳ ಸುಧಾರಣೆ ಹಾಗೂ ನವೀಕರಣ ಕಾರ್ಯಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಂಡಿದೆ. ಇದಕ್ಕಾಗಿ 1200 ಕೋಟಿ ರೂ ನಿಗದಿ ಮಾಡಿದ್ದು, ಶಿಕ್ಷಕರು ಸರ್ಕಾರಿ ಶಾಲೆಯ ಗುಣಮಟ್ಟ ಹೆಚ್ಚಿಸಲು ಒತ್ತು ನೀಡಬೇಕು ಎಂದು ಕರೆ ನೀಡಿದರು.
ಎರಡೂವರೆ ಸಾವಿರ ವರ್ಷಕ್ಕೂ ಹೆಚ್ಚು ಕಾಲಾವಧಿಯ ಇತಿಹಾಸ ಹಿನ್ನೆಲೆ ಹೊಂದಿರುವ ಕರ್ನಾಟಕ ಹಾಗೂ ಕನ್ನಡ ಭಾಷೆ ಇನ್ನಷ್ಟು ಪ್ರಜ್ವಲವಾಗಿ ಹೊಳೆಯಬೇಕಿದೆ. ಕರ್ನಾಟಕ ಒಡೆಯುವ ಧ್ವನಿಗಳನ್ನು ಸಂಪೂರ್ಣವಾಗಿ ಧಿಕ್ಕರಿಸಬೇಕು. 30 ಜಿಲ್ಲೆಯ ಜನ ಯಾವುದೇ ಅಪಪ್ರಚಾರಕ್ಕೆ ಕಿವಿಗೊಡಬಾರದೆಂದು ನಾಡಿನ ಜನರಿಗೆ ಸಂದೇಶ ನೀಡಿದರು.
ಯುವಜನರಿಗಾಗಿ 53 ಕಂಪೆನಿಗಳ ಸಹಯೋಗದೊಂದಿಗೆ ಉದ್ಯೋಗ ಮೇಳವನ್ನು ನಡೆಸಲಾಗಿದೆ, ಕೌಶಲಾಧಾರಿತ ವಿಶ್ವವಿದ್ಯಾಲಯಗಳ ಸ್ಥಾಪನೆಗೂ ಕ್ರಮ ಕೈಗೊಳ್ಳಲಾಗಿದೆ, ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿಯಿಂದ ಇಂಗ್ಲಿಷ್ ಭಾಷೆಯನ್ನು ಕಲಿಸುವ ನಿರ್ಧಾರವನ್ನು ಜಾರಿಗೊಳಿಸಲು ಪ್ರಯತ್ನ ನಡೆದಿದೆ ಎಂದು ಕುಮಾರಸ್ವಾಮಿ ತಿಳಿಸಿದರು
ಜನಪದ ಜಾತ್ರೆಗಳು, ನಗರ ಹಾಗೂ ಗ್ರಾಮೀಣ ಜಾನಪದ ಸಂಸ್ಕೃತಿಗಳ ನಡುವೆ ಸ್ನೇಹ ಸೇತುವೆ ಕಟ್ಟಲಿವೆ ಎಂದ ಮುಖ್ಯಮಂತ್ರಿಗಳು, ಸಾಹಿತ್ಯಿಕವಾಗಿ, ಸಾಂಸ್ಕೃತಿಕವಾಗಿ, ಭಾವನಾತ್ಮಕವಾಗಿ ಸಂಮೃದ್ಧವಾದ ಸುಂದರ ಕರ್ನಾಟಕ ಕಟ್ಟುವ ಕನಸು ತಮ್ಮದು ನುಡಿದರು.
ಶಾಸಕ ಆರ್.ರೋಷನ್‍ಬೇಗ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಸತಿ ಇಲಾಖೆ ಸಚಿವರಾದ ಜಯಮಾಲ ರಾಮಚಂದ್ರ, ಬಿಬಿಎಂಪಿ ಮಹಾಪೌರರಾದ ಗಂಗಾಂಬಿಕೆ ಮಲ್ಲಿಕಾರ್ಜುನ್, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಸಿ. ಮುನಿರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಶಾಲಾ ಮಕ್ಕಳು ಹಾಗೂ ವಿವಿಧ ಸಾಂಸ್ಕೃತಿ ತಂಡಗಳು ನಡೆಸಿಕೊಟ್ಟ ಕಾರ್ಯಕ್ರಮಗಳು ಪ್ರೇಕ್ಷಕರ ಮನಸೂರೆಗೊಂಡವು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ