ತುಮಕೂರು
ವಿಕಲಚೇತನರು ತಮ್ಮ ಸಾಮಥ್ರ್ಯದಲ್ಲಿ ಸಾಮಾನ್ಯರಿಗಿಂತ ಏನು ಕಡಿಮೆಯಿಲ್ಲ ಎಂದು ಜಿಲ್ಲಾಧಿಕಾರಿ ಡಾ|| ಕೆ. ರಾಕೇಶ್‍ಕುಮಾರ್ ನುಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾನಗರ ಪಾಲಿಕೆ, ಸರ್ಕಾರೇತರ ಶಾಲೆ ಹಾಗೂ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಬಾಲಭವನದಲ್ಲಿಂದು ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ದಿವ್ಯಾಂಗ ಚೈತನ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ದೇಶದ ಜನಸಂಖ್ಯೆಯಲ್ಲಿ ಶೇ.3ರಷ್ಟು ಅಂಗವಿಕಲರಿದ್ದು, ಎಲ್ಲರನ್ನೊಳಗೊಂಡಂತೆ ಅಭಿವೃದ್ಧಿಪಡಿಸುವುದು ಸರ್ಕಾರದ ಆಶಯವಾಗಿದೆ.
ಈ ನಿಟ್ಟಿನಲ್ಲಿ ಸರ್ಕಾರವು ವಿಕಲಚೇತನರ ನ್ಯೂನ್ಯತೆಗಳನ್ನು ಹಂತಹಂತವಾಗಿ ಸರಿಪಡಿಸುತ್ತಾ ಬಂದಿದೆ. ವಿಕಲಚೇತನರಿಗೆಂದು ಸರ್ಕಾರದಿಂದ ಬಿಡುಗಡೆಯಾಗುವ ಅನುದಾನವನ್ನು ಸ್ಥಳೀಯ ಸಂಸ್ಥೆಗಳಲ್ಲಿ ಪರಿಣಾಮಕಾರಿಯಾಗಿ ಅರ್ಹರಿಗೆ ತಲುಪಿಸುವ ಕೆಲಸವನ್ನು ನಾವೆಲ್ಲರೂ ಮಾಡಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶುಭ ಕಲ್ಯಾಣ್ ಮಾತನಾಡಿ ಅಂಗವಿಕಲರು ಪ್ರತಿನಿತ್ಯ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಅಂಗವಿಕಲರಿಗೆ ತಮ್ಮದೇ ಆದ ಸಾಮಥ್ರ್ಯವಿದ್ದು, ಅವರಿಗೆ ಸಾಮಥ್ರ್ಯ ಪ್ರದರ್ಶಿಸಲು ಅವಕಾಶ ನೀಡಬೇಕು ಎಂದು ತಿಳಿಸಿದರು.
ಜಿಲ್ಲಾ ಅಂಗವಿಕಲರ ಕಲ್ಯಾಣ ವೇದಿಕೆಯ ಅಧ್ಯಕ್ಷ ಗಂಗರಾಜು ಮಾತನಾಡಿ, ಜಿಲ್ಲೆಯಲ್ಲಿ 65 ಸಾವಿರ ಅಂಕವಿಕಲರಿದ್ದಾರೆ . ಅಂಗವಿಕಲರಿಗಾಗಿ ಸರ್ಕಾರ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದರೂ ಗ್ರಾಮೀಣ ಪ್ರದೇಶದ ಅಂಗವಿಕಲರು ಈ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಇವರಿಗೆ ಯೋಜನೆಯ ಸೌಲಭ್ಯ ದೊರಕುವಂತಾಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿರುವ ವಿವಿಧ ವಿಕಲಚೇತನ ಶಾಲೆಯ ಪ್ರತಿಭಾವಂತ ಮಕ್ಕಳು ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಶ್ರಮಿಸುತ್ತಿರುವವರಿಗೆ ಸನ್ಮಾನ ಮಾಡಲಾಯಿತು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉದೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಿ.ಆರ್. ಚಂದ್ರಿಕಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಎಸ್. ನಟರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಬಿ. ರುದ್ರಪ್ಪ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಎಂ. ರಮೇಶ್, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹುಚ್ಚಯ್ಯ, ಚಂದ್ರಶೇಖರ್, ಗಾಯತ್ರಿ, ಜಿಲ್ಲೆಯಲ್ಲಿರುವ ವಿವಿಧ ಅಂಗವಿಕಲ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ