ಚಿತ್ರದುರ್ಗ
ಜಿಲ್ಲಾಸ್ಪತ್ರೆಗೆ ಮೂಲಭೂತ ಸೌಲಭ್ಯ ಕಲ್ಪಿಸಿ ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು. ನಗರದ ಜಿಲ್ಲಾಸ್ಪತ್ರೆಗೆ ಶುಕ್ರವಾರ ಭೇಟಿ ನೀಡಿ, ಪರಿಶೀಲನೆ ನಡೆಸಿ, ರೋಗಿಗಳ ಆರೋಗ್ಯ ಮತ್ತು ಅವರಿಗೆ ನೀಡಲಾಗುತ್ತಿರುವ ಚಿಕಿತ್ಸೆ ಕುರಿತು ವಿಚಾರಿಸಿ ಅವರು ಮಾತನಾಡಿದರು.
ಸದ್ಯ ಜಿಲ್ಲಾಸ್ಪತ್ರೆಯು 450 ಹಾಸಿಗೆ ಸಾಮಥ್ರ್ಯ ಹೊಂದಿದ್ದು, ಇದನ್ನು ಸಾವಿರ ಹಾಸಿಗೆಯ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವಂತೆ ಜಿಲ್ಲೆಯ ಜನರ ಒತ್ತಾಯವಾಗಿದ್ದು, ಅದನ್ನು ಮುಖ್ಯಮಂತ್ರಿಗಳ ಗಮನಕ್ಕೆ ಶೀಘ್ರದಲ್ಲಿ ಆಸ್ಪತ್ರೆಗೆ ಕಾಯಕಲ್ಪ ನೀಡಲಾಗುವುದು ಎಂದರು.
ಜಿಲ್ಲಾಸ್ಪತ್ರೆಯಲ್ಲಿ ರೇಡಿಯಾಲಾಜಿಸ್ಟ್ ತಜ್ಞರ ಕೊರತೆ ಇರುವುದನ್ನು ಆಸ್ಪತ್ರೆಯ ವೈದ್ಯರು ಗಮನಕ್ಕೆ ತಂದಿದ್ದಾರೆ. ಕೂಡಲೇ ಆಸ್ಪತ್ರೆಗೆ ರೇಡಿಯಾಲಿಸ್ಟ್ ನಿಯೋಜನೆ ಮಾಡಲಾಗುವುದು ಎಂದರು. ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನಿಂಗ್ ಮತ್ತು ಅಲ್ಟ್ರಾ ಸೌಂಡ್ ಸ್ಕ್ಯಾನಿಂಗ್ ಇಲ್ಲದಿರುವುದರಿಂದ ಬಸವೇಶ್ವರ ಆಸ್ಪತ್ರೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಬಡರೋಗಿಗಳಿಗೆ ಯಾವುದೇ ರೀತಿಯ ತೊಂದರೆಯಾಗದ ರೀತಿಯಲ್ಲಿ ಉಚಿತವಾಗಿ ಅಲ್ಟ್ರಾ ಸೌಂಡ್ ಸ್ಕ್ಯಾನಿಂಗ್ ಸೌಲಭ್ಯ ನೀಡುವಂತೆ ಕ್ರಮಕೈಗೊಳ್ಳಲಾಗಿದೆ ಎಂದರು.
ವಿಕಲಚೇತನ ವ್ಯಕ್ತಿ ಪಾಪಯ್ಯ ಎಂಬುವರು ಹಾಯ್ಕಲ್ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ರೋಗಿಗಳಿಂದ ಹೆಚ್ಚಿನ ಹಣ ಪಡೆಯುತ್ತಿದ್ದಾರೆ. ಹಾಗೂ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ ಎಂಬುದರ ಕುರಿತು ಸಚಿವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಆ ವೈದ್ಯರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಅಧಿಕಾರಿಗೆ ಸೂಚನೆ ನೀಡಿದರು.ಜಿಲ್ಲಾ ಆಸ್ಪತ್ರೆ ಶಸ್ತ್ರ ಚಿಕಿತ್ಸಕ ಡಾ.ಹೆಚ್.ಜೆ.ಬಸವರಾಜಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಫಾಲಾಕ್ಷ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
