ಉಪಚುನಾವಣೆ ಮುಗಿಯುವವರೆಗೂ ಸಂಪುಟ ವಿಸ್ತರಣೆ ಬೇಡ :ರಾಹುಲ್ ಗಾಂಧಿ

ಬೆಂಗಳೂರು

       ರಾಜ್ಯದ ಮೂರು ಲೋಕಸಭೆ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮುಗಿಯುವವರೆಗೂ ಸಂಪುಟ ವಿಸ್ತರಣೆ ಮಾಡುವುದು ಬೇಡ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ನಾಯಕರಿಗೆ ಸೂಚಿಸಿದ್ದಾರೆ.

      ಆದರೆ ಮೊದಲ ಹಂತದ ನಿಗಮ ಮತ್ತು ಮಂಡಳಿಗಳಿಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸಲಹೆ ನೀಡಿದ್ದಾರೆ. ಈ ಬೆಳವಣಿಗೆ ನಂತರ ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ತೀವ್ರ ಅಸಮಾಧಾನ ಉಂಟಾಗಿದೆ.

      ಕಗ್ಗಂಟಾಗಿರುವ ಬಳ್ಳಾರಿ ಸೇರಿ ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಜವಾಬ್ದಾರಿಯನ್ನು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ವಹಿಸಿರುವ ರಾಹುಲ್ ಗಾಂಧಿ, ಎಲ್ಲರ ಜತೆ ಚರ್ಚೆ ನಡೆಸಿ ಸೂಕ್ತರಾದವರನ್ನು ಆಯ್ಕೆ ಮಾಡುವಂತೆ ಸೂಚಿಸಿದ್ದಾರೆ.

       ರಾಜ್ಯ ಕಾಂಗ್ರೆಸ್ ನಾಯಕರ ಜತೆ ಚರ್ಚೆ ನಡೆಸಿದ ಅವರು, ನಂತರ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅವರೊಂದಿಗೂ ಸಹ ಸಮಾಲೋಚನೆ ನಡೆಸಿದ ನಂತರ ಈ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗಿದೆ.

       ನಿಗಮ ಮಂಡಳಿಗಳಲ್ಲಿ 30 ಸ್ಥಾನಗಳಿಗೆ ನೇಮಕಾತಿ ಮಾಡುವಂತೆ ರಾಹುಲ್ ಗಾಂಧಿ ನಿರ್ದೇಶನ ನೀಡಿದ್ದು, ಇದರಲ್ಲಿ ಕಾಂಗ್ರೆಸ್‍ಗೆ 20 ಮತ್ತು ಜೆಡಿಎಸ್‍ಗೆ 10 ಸ್ಥಾನಗಳು ದೊರೆಯಲಿವೆ.

       ಇದಕ್ಕೂ ಮುನ್ನ ಸಚಿವ ಸ್ಥಾನಕ್ಕಾಗಿ ಬಿಗಿಪಟ್ಟು ಹಿಡಿದು ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಕೆ.ಸಿ. ವೇಣುಗೋಪಾಲ ಅವರ ಬಳಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

      ಇದಕ್ಕೂ ಮುನ್ನ ಕೆಪಿಸಿಸಿ ಕಚೇರಿಯಲ್ಲಿ ಬಳ್ಳಾರಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಆಯ್ಕೆಯ ಬಗ್ಗೆ ಗಹನವಾದ ಚರ್ಚೆ ನಡೆಯಿತು. ನಂತರ ಗೊಂದಲ ನಿರ್ಮಾಣ ಬೇಡ ರಾಹುಲ್ ಗಾಂಧಿ ಅವರ ಗಮನಕ್ಕೆ ಈ ವಿಷಯ ತಂದು ಮುಂದಿನ ನಿರ್ಧಾರ ತೆಗೆದುಕೊಳ್ಳುವುದು ಸೂಕ್ತ ಎನ್ನುವ ನಿಲುವಿಗೆ ಬರಲಾಯಿತು ಎನ್ನಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap