ಚಿತ್ರದುರ್ಗ :
ವಿದ್ಯಾರ್ಥಿ ನಿಲಯಗಳಲ್ಲಿ ಮಂಜೂರಾದ ವಿದ್ಯಾರ್ಥಿಗಳ ಸಂಖ್ಯೆಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ದಾಖಲಸಿಕೊಳ್ಳುವುದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರಿಯಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಜಿ. ಕುಮಾರ ನಾಯಕ್ ಹೇಳಿದರು.
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಸಮಾಜ ಕಲ್ಯಾಣ ಇಲಾಖೆ, ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿ ನಿಲಯಗಳಿಗೆ ಮಂಜೂರಾದ ವಿದ್ಯಾರ್ಥಿಗಳ ಸಂಖ್ಯೆಗಿಂತ ಹೆಚ್ಚುವರಿ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಂಡಲ್ಲಿ, ಬಹುತೇಕ ವಿದ್ಯಾರ್ಥಿಗಳು ಅಗತ್ಯ ಸೌಲಭ್ಯಗಳಿಂದ ವಂಚಿತರಾಗುತ್ತಾರೆ. ಅಲ್ಲದೆ, ಕುಡಿಯುವ ನೀರು, ಶೌಚಾಲಯ, ಸಮರ್ಪಕ ಕೊಠಡಿಗಳು, ವಿದ್ಯಾಭ್ಯಾಸಕ್ಕೆ ತೊಂದರೆ ಸೇರಿದಂತೆ ಇನ್ನಿತರ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದರು
ಸರ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ, ಅವರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಸಲುವಾಗಿ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಿ, ಸೌಲಭ್ಯ ಕಲ್ಪಿಸುತ್ತಿದೆ. ನಿಗದಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಹಾಸ್ಟೆಲ್‍ಗೆ ದಾಖಲಿಸಲು ವಿದ್ಯಾರ್ಥಿನಿಲಯಗಳು ಧರ್ಮಛತ್ರವಲ್ಲ.
ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಹೆಚ್ಚುವರಿಯಾಗಿ ಅಗತ್ಯವಿದ್ದಲ್ಲಿ, ಪ್ರಸ್ತಾವನೆ ಸಲ್ಲಿಸಬೇಕು. ಅವಶ್ಯಕತೆಗೆ ಅನುಗುಣವಾಗಿ ಹೊಸ ಹಾಸ್ಟೆಲ್‍ಗಳಿಗೆ ಮಂಜೂರಾತಿ ನೀಡಲಾಗುವುದು. ಅದುಬಿಟ್ಟು, ಇರುವ ಹಾಸ್ಟೆಲ್‍ಗಳಲ್ಲೇ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವುದು ಸರಿಯಾದ ಕ್ರಮವಲ್ಲ ಎಂದು ಹೇಳಿದರು
ಹಾಸ್ಟೆಲ್ ಸೌಲಭ್ಯ ಇಲ್ಲದ ವಿದ್ಯಾರ್ಥಿಗಳಿಗಾಗಿಯೇ ವಿದ್ಯಾಸಿರಿಯಂತಹ ಯೋಜನೆಗಳಿವೆ. ಹಾಸ್ಟೆಲ್‍ಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಸಂಬಂಧಿಸಿದಂತೆ ಸಾಕಷ್ಟು ದೂರುಗಳಿವೆ. ಈ ಕುರಿತು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ನಿಯಮಿತವಾಗಿ ಹಾಸ್ಟೆಲ್‍ಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ವಿದ್ಯಾರ್ಥಿಗಳಿಗೆ ಬೆಳಿಗ್ಗೆ ಮತ್ತು ಸಂಜೆ ಎರಡು ಬಾರಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿ ಪಡೆಯಬೇಕು ಎಂದು ಸೂಚನೆ ನೀಡಿದರು.
ವಿದ್ಯಾರ್ಥಿ ವೇತನ ವಿಳಂಬ ಬೇಡ :
ಸಮಾಜ ಕಲ್ಯಾಣ ಇಲಾಖೆಗಳಲ್ಲಿ ನೌಕರರು ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುವ ನೌಕರರಿಗೆ ಮೂರು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ್ ಅವರು ಸಭೆಯ ಗಮನಕ್ಕೆ ತಂದರು,
ಇದಕ್ಕೆ ಬೇಸರ ವ್ಯಕ್ತಪಡಿಸಿದ ಜಿ. ಕುಮಾರ್‍ನಾಯಕ್ ಅವರು, ಅನುದಾನಕ್ಕಾಗಿ ಸಾಕಷ್ಟು ಮುಂಚಿತವಾಗಿ ಪ್ರಸ್ತಾವನೆ ಸಲ್ಲಿಸಬೇಕು.
ಅನುದಾನ ಮುಗಿದ ಬಳಿಕ ಪ್ರಸ್ತಾವನೆ ಸಲ್ಲಿಸುವುದು ಸರಿಯಲ್ಲ. ಅದೇ ರೀತಿ ಅಡುಗೆಯವರು ಹಾಗೂ ಅಡುಗೆ ಸಹಾಯಕರಿಗೂ ಕೂಡ ನಿಗದಿತ ಸಮಯಕ್ಕೆ ಸರಿಯಾಗಿ ವೇತನವನ್ನು ನೀಡಬೇಕು. ಒಟ್ಟಾರೆ ಯಾವುದೇ ಸಿಬ್ಬಂದಿಗಳಿಗೂ ವೇತನ ಪಾವತಿಯಲ್ಲಿ ವಿಳಂಬವಾಗಬಾರದು ಎಂದು ಎಚ್ಚರಿಕೆ ನೀಡಿದರು.
ವಿದ್ಯಾರ್ಥಿ ವೇತನ ಪಾವತಿಯನ್ನು ಈಗ ಕಡ್ಡಾಯವಾಗಿ ಆಧಾರ್ ಜೊಡಣೆಗೊಂಡಿರುವ ಬ್ಯಾಂಕ್ ಖಾತೆಗೆ ಜಮ ಮಾಡಲಾಗುವುದರಿಂದ, ಮಕ್ಕಳನ್ನು ಶಾಲೆಗೆ ದಾಖಲು ಮಾಡಿಕೊಳ್ಳುವ ಸಂದರ್ಭದಲ್ಲಿಯೇ ಇತರೆ ದಾಖಲೆಗಳ ಜೊತೆಗೆ ಆಧಾರ್ ಜೋಡಣೆಗೊಂಡ ಬ್ಯಾಂಕ್ ಖಾತೆಯ ವಿವರವನ್ನೂ ಕೂಡ ಪಡೆದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಇದು ಅತ್ಯಗತ್ಯವಾಗಿ ಬೇಕಾಗುತ್ತದೆ ಎಂದು ಡಿಡಿಪಿಐ ಅವರಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಆರ್. ವಿನೋತ್ ಪ್ರಿಯಾ ಮಾತನಾಡಿ, ಪ್ರತಿವರ್ಷ ಬಿ.ಇಡಿ ತರಬೇತಿ ಪಡೆಯುವ ವಿದ್ಯಾರ್ಥಿಗಳು ಹಾಸ್ಟೆಲ್ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವರು, ಆದರೆ ಅಷ್ಟರ ವೇಳೆಗಾಗಲೇ ದಾಖಲಾತಿ ಪ್ರಕ್ರಿಯೆ ಮುಕ್ತಾಯಗೊಂಡಿರುತ್ತದೆ. ಹಾಗಾಗಿ ಅಂತಹವರಿಗೆ ಮೆರಿಟ್ ಆಧಾರದಲ್ಲಿ ಹಾಸ್ಟೆಲ್‍ಗಳಲ್ಲಿ ಅವಕಾಶ ಕಲ್ಪಿಸಿಕೊಡಬೇಕಾಗುತ್ತದೆ. ಹೀಗಾಗಿ ಬಿಇಡಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್‍ನಲ್ಲಿ ಸ್ಥಾನ ಮೀಸಲಿಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರದಿಂದ ಸೂಕ್ತ ನಿರ್ದೇಶನ ನೀಡುವುದು ಅಗತ್ಯವಾಗಿದೆ ಎಂದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾಗರಾಜು ಮಾತನಾಡಿ ಜಿಲ್ಲೆಯಲ್ಲಿ ಪರಿಶಿಷ್ಠರ ಸಾಕ್ಷರತೆಯ ಪ್ರಮಾಣ ಶೇ. 66 ರಷ್ಟಿದೆ. ಜಿಲ್ಲಾ ಪಂಚಾಯತ್ ವತಿಯಿಂದ ಪರಿಶಿಷ್ಠ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವಾಗಿ 789 ಲಕ್ಷ ನೀಡಲಾಗಿದೆ ಎಂದು ಮಾಹಿತಿ ನೀಡಿದರು
ಜಿಲ್ಲೆಯಲ್ಲಿ ಒಟ್ಟಾರೆ 40 ಸ್ಮಶಾನ ನಿರ್ಮಾಣ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ 45 ಗ್ರಾಮಗಳು ಆಯ್ಕೆಯಾಗಿವೆ. ಮುಖ್ಯಮಂತ್ರಿ ಮಾದರಿ ಗ್ರಾಮ ಯೋಜನೆ 2 ಗ್ರಾಮಗಳು ಆಯ್ಕೆಯಾಗಿ ಇವುಗಳು ಅಭಿವೃದ್ಧಿಯತ್ತ ಸಾಗುತ್ತಿವೆ. ಅಂತರ್ಜಾತಿ ವಿವಾಹ 73, ಸರಳ ವಿವಾಹ 12, ಒಳ ಅಂತರ್ ಜಾತಿ 01 ಅರ್ಜಿ ಸಲ್ಲಿಕೆಯಾಗಿವೆ ಎಂದು ಅವರು ಹೇಳಿದರು. ಸಭೆಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ. ಸತ್ಯಭಾಮ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಪರಮೇಶ್ವರ್, ಡಿಡಿಪಿಐ ರೇವಣ್ಣಸಿದ್ದಪ್ಪ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.