ಏಡ್ಸ್ ಜಾಗೃತಿ ಪ್ರಾಮಾಣಿಕ ಪ್ರಯತ್ನ ಎಲ್ಲರಿಂದಾಗಬೇಕು

ತುಮಕೂರು

    ಮಾರಣಾಂತಿಕ ಏಡ್ಸ್ ನಿಯಂತ್ರಣದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಪ್ರಾಮಾಣಿಕ ಪ್ರಯತ್ನ ನಮ್ಮೆಲ್ಲರಿಂದ ಆಗಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ದಶರಥ ತಿಳಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆಗಳ ಸಹಯೋಗದಲ್ಲಿಂದು ಜಿಲ್ಲಾಸ್ಪತ್ರೆ ಆವರಣದಲ್ಲಿ ನಡೆದ ವಿಶ್ವ ಏಡ್ಸ್ ದಿನದ ಅಂಗವಾಗಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

    ಶಿಸ್ತುಬದ್ದವಿಲ್ಲದ ಜೀವನ ಶೈಲಿಯಿಂದ ನಾವು ಅನೇಕ ರೋಗಗಳನ್ನು ಆಹ್ವಾನ ಮಾಡಿಕೊಳ್ಳುತ್ತೇವೆ. ಯಾವುದೇ ರೋಗವಾದರೂ ಆರಂಭದಲ್ಲೇ ಚಿಕಿತ್ಸೆ ಪಡೆದರೆ ಸಾವಿನ ಹಂತಕ್ಕೆ ಹೋಗುವುದು ತಪ್ಪುತ್ತದೆ. ಏಡ್ಸ್ ಗುಣ ಲಕ್ಷಣಗಳು ಹಾಗೂ ಅದರ ನಿಯಂತ್ರಣಕ್ಕೆ ಕೈಗೊಳ್ಳಬೇಕಾಗದ ಕ್ರಮಗಳ ಬಗ್ಗೆ ಜನರಿಗೆ ಹೆಚ್ಚು ಜಾಗೃತಿ ಮೂಡಿಸಬೇಕು. ಅಲ್ಲದೇ ಇಂದಿನ ಯುವಕರು ವೈಯಕ್ತಿಕ, ಕೌಟುಂಬಿಕ ಹಾಗೂ ಸಾಮಾಜಿಕ ಹಂತದಲ್ಲಿ ಏಡ್ಸ್ ತಡೆಗಟ್ಟುವಿಕೆಯಲ್ಲಿ ಎಚ್ಚೆತ್ತುಕೊಂಡರೆ ಆರೋಗ್ಯಯುತ ಸಮಾಜ ನಿರ್ಮಾಣ ಸಾಧ್ಯ ಎಂದರು.

    ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ: ಸನತ್‍ಕುಮಾರ್ ಮಾತನಾಡಿ ಪ್ರತಿ ವರ್ಷದಂತೆ ಈ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ವರ್ಷ “ಸಮುದಾಯಗಳು ವ್ಯತ್ಯಾಸವನ್ನುಂಟು ಮಾಡುತ್ತವೆ”ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್.ಐ.ವಿ(ಏಡ್ಸ್) ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದ್ದು, ಅಸುರಕ್ಷತೆ ಲೈಗಿಂಕತೆಯನ್ನು ತಡೆಗಟ್ಟುವುದರಿಂದ ಸೋಂಕಿನ ಪ್ರಮಾಣವನ್ನು ಸೊನ್ನೆಗೆ ತರಬಹುದು. ಏಡ್ಸ್ ಬಗ್ಗೆ ಖಚಿತಪಡಿಸಿಕೊಳ್ಳಲು ರಕ್ತ ತಪಾಸಣೆ ಮಾಡಿಸಿಕೊಳ್ಳಬೇಕು. ಒಂದು ವೇಳೆ ಸಂದೇಹ ಇದ್ದಲ್ಲಿ ವೈದ್ಯರ ಸಲಹೆಗಳನ್ನು ಪಡೆಯಬೇಕು ಎಂದು ತಿಳಿಸಿದರು.

     ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಬಿ.ಆರ್. ಚಂದ್ರಿಕಾ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ: ವೀರಭದ್ರಯ್ಯ, ಆರ್‍ಸಿಹೆಚ್ ಅಧಿಕಾರಿ ಕೇಶವ್‍ರಾಜ್, ವೈದ್ಯಾಧಿಕಾರಿಗಳಾದ ಡಾ|| ವೀಣಾ, ಡಾ|| ಶಂಕರ್, ಡಾ|| ಮಮತಾ ಸೇರಿದಂತೆ ಎಆರ್‍ಟಿ ಕೇಂದ್ರ, ರಕ್ತನಿಧಿ ಕೇಂದ್ರಗಳ ಪದಾಧಿಕಾರಿಗಳು, ವಿವಿಧ ನರ್ಸಿಂಗ್ ಕಾಲೇಜುಗಳ ವಿದ್ಯಾಥಿಗಳು ಭಾಗವಹಿಸಿದ್ದರು.

    ಜಾಥಾ ಕಾರ್ಯಕ್ರಮವು ಜಿಲ್ಲಾ ಆಸ್ಪತ್ರೆಯ ಆವರಣದಿಂದ ಮಂಡಿಪೇಟೆ ಮುಖಾಂತರ-ಚರ್ಚ್ ಸರ್ಕಲ್ ಮಾರ್ಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯನ್ನು ತಲುಪಿತು. ಏಡ್ಸ್ ದಿನಾಚರಣೆ ಅಂಗವಾಗಿ ಕೆ.ಎಸ್.ಆರ್.ಟಿ.ಸಿ/ ಖಾಸಗಿ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಮಾರುಕಟ್ಟೆ, ಮತ್ತಿತರ ಪ್ರದೇಶಗಳಲ್ಲಿ ಹೆಚ್.ಐ.ವಿ. ಕುರಿತು ಅರಿವು ಮೂಡಿಸಲು ಮಳಿಗೆಗಳನ್ನು ತೆರೆಯಲಾಗಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link