ರಾಜಕೀಯ ಪಕ್ಷಗಳಲ್ಲಿ ಕುಟುಂಬ ರಾಜಕಾರಣದ ಸಮಸ್ಯೆ

0
36

ಬೆಂಗಳೂರು:

     ಮೂರು ಲೋಕಸಭೆ, ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಕುಟುಂಬ ರಾಜಕಾರಣದ ಸಮಸ್ಯೆ ಎದುರಾಗಿದೆ.

      ಇದು ಎಲ್ಲಾ ರಾಜಕೀಯ ಪಕ್ಷಗಳಲ್ಲೂ ಆಂತರಿಕವಾಗಿ ಅಸಮಾಧಾನಕ್ಕೆ ಕಾರಣವಾಗಿದೆ. ಶಿವಮೊಗ್ಗದಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ, ಶಾಸಕ ಬಿ.ವೈ ರಾಘವೇಂದ್ರ ಅವರಿಗೆ ಟಿಕೆಟ್ ಘೋಷಿಸಲಾಗಿದೆ.

      ಬಳ್ಳಾರಿ ಕ್ಷೇತ್ರದಲ್ಲಿ ಶಾಸಕ ರಾಮುಲು ಅವರ ಸಹೋದರಿ, ಮಾಜಿ ಸಂಸದೆ ಜೆ.ಶಾಂತಾ ಅವರು ಕಣಕ್ಕಿಳಿಸಲು ಪ್ರಯತ್ನ ನಡೆಸಲಾಗಿದ್ದು, ಇದು ಬಳ್ಳಾರಿ ಬಿಜೆಪಿಯಲ್ಲಿ ಅಸಮಾಧಾನ ಹೊಗೆಯಾಡುವಂತಾಗಿದೆ. ಹೀಗಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎನ್.ವೈ.ಹನುಮಂತಪ್ಪ ಅವರ ಪುತ್ರ ಸಂಜಯ್ ಕುಮಾರ್ ಅವರೂ ಸಹ ಸ್ಪರ್ಧಾಕಾಂಕ್ಷಿಯಾಗಿದ್ದಾರೆ.

      ಮಂಡ್ಯದಲ್ಲಿ ಸಚಿವ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅಥವಾ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡಲು ಉದ್ದೇಶಿಸಿದ್ದು, ಇದಕ್ಕೆ ವಿರೋಧ ವ್ಯಕ್ತವಾಗಿದೆ.

      ಇನ್ನು ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಲು ಪ್ರಯತ್ನಿಸಲಾಗಿದೆ. ಒಂದು ವೇಳೆ ಕಾಂಗ್ರೆಸ್‍ನಿಂದ ಕಣಕ್ಕಿಳಿಸಿದರೆ ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಅವರ ಪುತ್ರ ಚಂದ್ರಶೇಖರ್ ಅವರ ಹೆಸರೂ ಸಹ ಕೇಳಿ ಬರುತ್ತಿದೆ.

     ಜಮಖಂಡಿ ವಿಧಾನಸಭಾ ಕ್ಷೇತ್ರಕ್ಕೆ ಶಾಸಕರಾಗಿದ್ದ ದಿ. ಸಿದ್ದು ನ್ಯಾಮಗೌಡ ಅವರ ಪುತ್ರ ಆನಂದ್ ನ್ಯಾಮಗೌಡ ಅವರಿಗೆ ಟಿಕೆಟ್ ನೀಡಲು ನಿರ್ಧರಿಸಲಾಗಿದೆ. ಆದರೆ ಇದಕ್ಕೆ ಕಾಂಗ್ರೆಸ್‍ನಲ್ಲಿ ಅಷ್ಟೇನು ಸಮಸ್ಯೆ ಎದುರಾಗಿಲ್ಲ. ಆದರೆ ಸಿದ್ದು ನ್ಯಾಮಗೌಡರ ಕುಟುಂಬದಿಂದ ಮತ್ತೊಬ್ಬರು ಕಣಕ್ಕಿಳಿಯುವುತ್ತಿರುವುದು ಸಹ ಕುಟುಂಬ ರಾಜಕಾರಣದ ಎರಡನೇ ಇನ್ನಿಂಗ್ಸ್ ಆಗಿದೆ. ಬಿಜೆಪಿಯಿಂದ ಮಾಜಿ ಸಚಿವ ಮುರುಗೇಶ್ ನಿರಾಣಿ ಅವರ ಸಹೋದರ ಸಂಗೇಮೇಶ್ ನಿರಾಣಿ ಹಾಗೂ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಹೆಸರು ಕೇಳಿ ಬರುತ್ತಿದೆ.

     ಈ ಮಧ್ಯೆ ಉಪ ಚುನಾವಣೆಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬುಧವಾರ ಅಂತಿಮಗೊಳ್ಳಲಿದೆ. ಅಂದು ನಡೆಯಲಿರುವ ಕೋರ್ ಕಮಿಟಿ ಸಭೆ ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡ್‍ಗೆ ಕಳುಹಿಸಲಿದೆ.

     ಸೋಮವಾರ ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ಜಮಖಂಡಿಯಿಂದ ಆಗಮಿಸಿದ್ದ ಪಕ್ಷದ ಮುಖಂಡರ ಜತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಮಾಲೋಚನೆ ನಡೆಸಿದರು. ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಅವರಿಗೆ ಅಲ್ಲಿಂದ ಟಿಕೆಟ್ ನೀಡಬೇಕು ಎಂದು ಕಾರ್ಯಕರ್ತರು ಒತ್ತಡ ಹೇರಿದರು.

      ಸುದ್ದಿಗಾರರ ಜತೆ ಮಾತನಾಡಿದ ಯಡಿಯೂರಪ್ಪ ನಾಳೆ ಅಥವಾ ಬುಧವಾರ ಕೋರ್ ಕಮಿಟಿ ಸಭೆ ಸೇರಿ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸುವುದಾಗಿ ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

LEAVE A REPLY

Please enter your comment!
Please enter your name here