ಮಕ್ಕಳಲ್ಲಿನ ಸುಪ್ತ ಪ್ರತಿಭೆ ಗುರುತಿಸಿ: ಎಸ್‍ಎಆರ್

ದಾವಣಗೆರೆ :

      ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಗುರುತಿಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಶಾಸಕ ಎಸ್.ಎ.ರವೀಂದ್ರನಾಥ್ ತಿಳಿಸಿದರು.

     ಇಲ್ಲಿನ ನಿಟುವಳ್ಳಿಯ ಸೋಮೇಶ್ವರ ವಿದ್ಯಾಲಯದಲ್ಲಿ ಬುಧವಾರ ಏರ್ಪಡಿಸಿದ್ದ 2019-20ನೇ ಸಾಲಿನ ಬ್ಲಾಕ್ ಹಂತದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಾಗೂ ವೇಷಭೂಷಣ ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ, ಅದನ್ನು ಅನಾವರಣ ಮಾಡುವಂತೆ ಮಕ್ಕಳನ್ನು ಸಜ್ಜುಗೊಳಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.

     ನಗರ ಪ್ರದೇಶಗಳ ಶಾಲೆಗಳಲ್ಲಿ ವಾರ್ಷಿಕೋತ್ಸವ ಸೇರಿದಂತೆ ಇತರೆ ಕಾರ್ಯಕ್ರಮಗಳ ಮೂಲಕ ಮಕ್ಕಳ ಪ್ರತಿಭೆಯನ್ನು ಗುರುತಿಸಲಾಗುತ್ತದೆ. ಆದರೆ, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಇಂತಹ ಅವಕಾಶಗಳು ಇರುವುದಿಲ್ಲ. ಹೀಗಾಗಿ ಗ್ರಾಮೀಣ ಪ್ರದೇಶದ ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮಗಳು ಸಹಕಾರಿಯಾಗಲಿದೆ ಎಂದು ಹೇಳಿದರು.

     ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ನಮ್ಮ ಜಿಲ್ಲೆಯ ಮಕ್ಕಳು ಭಾಗವಹಿಸಿ, ಬಹುಮಾನ ಪಡೆದು ನಮ್ಮ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಶುಭ ಹಾರೈಸಿದರು.ಪ್ರಾಸ್ತಾವಿಕ ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಆರ್ ಪರಮೇಶ್ವರಪ್ಪ, ಪ್ರತಿಯೊಂದು ಮಗುವು ತನ್ನದೇ ಆದ ಪ್ರತಿಭೆಯನ್ನು ಹೊಂದಿರುತ್ತದೆ. ಅದನ್ನು ಗುರುತಿಸುವ ಕೆಲಸವನ್ನು ಪೋಷಕರು ಮತ್ತು ಶಿಕ್ಷಕರು ಮಾಡಬೇಕು ಎಂದು ಸಲಹೆ ನೀಡಿದರು.

      ಇಂದು 1 ರಿಂದ 4ನೇ ತರಗತಿ, 5ರಿಂದ 7 ನೇ ತರಗತಿ ಮತ್ತು 8 ರಿಂದ 10 ನೇ ತರಗತಿ ಒಟ್ಟು ಮೂರು ಹಂತಗಳಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯುತ್ತಿದೆ. ಸಾಮೂಹಿಕ ಮತ್ತು ವೈಯಕ್ತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಇಲ್ಲಿ ತೀರ್ಪುಗಾರರಾಗಿ ಭಾಗವಹಿಸಿರುವವರು ತಾರತಮ್ಯ ಮಾಡದೇ, ಉತ್ತಮ ಪ್ರದರ್ಶನ ನೀಡಿದ ನಿಜವಾದ ಪ್ರತಿಭೆಗಳನ್ನು ಆಯ್ಕೆ ಮಾಡಬೇಕೆಂದು ಕಿವಿಮಾತು ಹೇಳಿದರು.

     ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಯಶೋಧಮ್ಮ ಮರುಳಪ್ಪ ಮಾತನಾಡಿ, ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಪಠ್ಯದ ಜೊತೆಗೆ ಮಕ್ಕಳು ವೈವಿಧ್ಯಮಯ ಚಟುವಟಿಕೆಗಳಲ್ಲಿ ತೊಡಗಬೇಕು. ಅದೃಷ್ಟ ಮತ್ತು ಸಾಧನೆ ನಮ್ಮನ್ನು ಉತ್ತುಂಗ ಸ್ಥಾನಕ್ಕೆ ಏರಿಸುತ್ತದೆ. ಮಕ್ಕಳು ಪರಿಶ್ರಮ ವಹಿಸಿದರೆ ಆ ಸ್ಥಾನ ಮುಂದುವರಿಯುತ್ತದೆ. ಆದ್ದರಿಂದ ಮಕ್ಕಳು ಹೆಚ್ಚಿನ ಪರಿಶ್ರಮ ವಹಿಸಬೇಕು ಎಂದು ಕರೆ ನೀಡಿದರು.

     ಕಾರ್ಯಕ್ರಮದಲ್ಲಿ ಜಿ.ಪಂ. ಸದಸ್ಯರುಗಳಾದ ಶೈಲಜಾ ಬಸವರಾಜ್, ಹದಡಿ ನಿಂಗಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಮಮತ ಮಲ್ಲೇಶಪ್ಪ, ಪಾಲಿಕೆ ಸದಸ್ಯರಾದ ಕೆ.ಎಂ ವೀರೇಶ್, ಎಸ್.ಮಂಜುನಾಥ್, ಉಮಾ ಪ್ರಕಾಶ್, ದಾವಣಗೆರೆ ದಕ್ಷಿಣ ವಲಯದ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಮರುಳಪ್ಪ, ಕಾರ್ಯದರ್ಶಿ ಬಿ.ಎಂ. ಚೌಡಪ್ಪ, ಶಿವಲಿಂಗಪ್ಪ, ಆರ್.ಜಿ. ಅಜ್ಜಯ್ಯ, ಈಶಾನಾಯ್ಕ, ಶ್ರೀನಿವಾಸ್, ಗದಿಗೆಪ್ಪ, ಗಂಗಾಧರಪ್ಪ, ಪಂಚಾಕ್ಷರಪ್ಪ, ಅಜ್ಜಯ್ಯ, ಉಮಾದೇವಿ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link