ಗುಬ್ಬಿ
ಕೊರೋನ ವೈರಸ್ ಒಬ್ಬರಿಗೆ ದೃಢವಾದ ಹಿನ್ನೆಲೆಯಲ್ಲಿ ತಾಲ್ಲೂಕಿನ ಕಿಟ್ಟದಕುಪ್ಪೆ ಗ್ರಾಮವನ್ನು ಸೀಲ್ ಡೌನ್ ಮಾಡಲಾಗಿದೆ. ಗ್ರಾಮದ ನಿವಾಸಿಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ತಾಲ್ಲೂಕು ಆಡಳಿತ ಕ್ರಮ ಕೈಗೊಂಡಿದ್ದು, ರಾಸುಗಳಿಗೆ ಮೇವನ್ನು ವಿತರಣೆ ಮಾಡಲಾಗಿದೆ ಎಂದು ತಹಸಿಲ್ದಾರ್ ಡಾ.ಪ್ರದೀಪ್‍ಕುಮಾರ್‍ಹಿರೇಮಠ್ ತಿಳಿಸಿದರು.
ತಾಲ್ಲೂಕಿನ ಕಿಟ್ಟದಕುಪ್ಪೆ ಗ್ರಾಮದಲ್ಲಿನ ನಿವಾಸಿಗಳ ರಾಸುಗಳಿಗೆ ಮೇವನ್ನು ವಿತರಿಸಿ ಮಾತನಾಡಿದ ಅವರು, ಗ್ರಾಮದ ನಿವಾಸಿಗಳಿಗೆ ಅಗತ್ಯ ಸಾಮಗ್ರಿಗಳನ್ನು ಖರೀದಿಸಲು ಸಂಚಾರಿ ವ್ಯಾಪಾರ ವಾಹನದ ವ್ಯವಸ್ಥೆ ಮಾಡಲಾಗಿದೆ. ಹಾಲು, ದಿನಸಿ, ತರಕಾರಿ ಪದಾರ್ಥಗಳನ್ನು ಖರೀದಿಸಲು ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆಗಳನ್ನು ಮಾಡಲಾಗಿದ್ದು, ತಾಲ್ಲೂಕು ಆಡಳಿತದಿಂದ ದಿನಸಿ ಕಿಟ್‍ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಮಾಡಲಾಗಿದ್ದು, ಕ್ವಾರಂಟೈನ್‍ನಲ್ಲಿರುವವರಿಗೆ ಯಾವುದೆ ರೀತಿಯ ತೊಂದರೆಯಾಗದಂತೆ ತಿಂಡಿ, ಊಟ, ಕುಡಿಯುವ ನೀರು ಸೇರಿದಂತೆ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದ ಅವರು, ಗ್ರಾಮದ ಜನತೆ ಸಾಮಾಜಿಕ ಅಂತರ ಕಾಪಾಡುವುದು ಸೇರಿದಂತೆ ಅನಗತ್ಯವಾಗಿ ಮನೆಯಿಂದ ಹೊರ ಬಾರದಂತೆ ಎಚ್ಚರಿಕೆ ನೀಡಿದರು.ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ರಮೇಶ್ ಕುಮಾರ್, ಗ್ರಾಮ ಪಂಚಾಯ್ತಿ ಸದಸ್ಯ ಗೌಸ್‍ಖಾನ್, ದಯಾನಂದ್, ವಿನೋದ್, ಚಕ್ರಪಾಣಿ, ಮಂಜುನಾಥ್, ನಾಗಭೂಷಣ್ ಮುಂತಾದವರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ