ಬಾಕಿಯಿರುವ ದಲಿತ ಸಮುದಾಯಗಳ ಪ್ರಕರಣಗಳ ನಿಖರ ಮಾಹಿತಿ ನೀಡಿ: ಜಿಲ್ಲಾಧಿಕಾರಿ

ತುಮಕೂರು
 
    ನ್ಯಾಯಾಲಯದಲ್ಲಿ ಬಾಕಿಯಿರುವ ದಲಿತ ಸಮುದಾಯದವರ ದೂರು ಪ್ರಕರಣಗಳ ನಿಖರ ಮಾಹಿತಿಯನ್ನು ಸಭೆಗೆ ನೀಡಬೇಕೆಂದು ಜಿಲ್ಲಾಧಿಕಾರಿ ಡಾ|| ರಾಕೇಶ್‍ಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
    ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಾರ್ವಜನಿಕ ಕುಂದು ಕೊರತೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಸಭೆಗೆ ಸಮರ್ಪಕ ಮಾಹಿತಿ ನೀಡಲು ತಡವರಿಸಿದ ಅಧಿಕಾರಿಗಳಿಗೆ ಈ ಸೂಚನೆ ನೀಡಿದರು.  ಮುಂದಿನ ಸಭೆಯೊಳಗಾಗಿ ನಿಖರ ಮಾಹಿಯೊಂದಿಗೆ ಸಭೆಗೆ ಹಾಜರಾಗಬೇಕೆಂದು ನಿರ್ದೇಶನ ನೀಡಿದರು. 
     ಸಭೆಯಲ್ಲಿ “ದಲಿತರು ಒಳಗೆ ಪ್ರವೇಶಿಸಲು ಮುಕ್ತ ಅವಕಾಶವಿದೆ” ಎಂಬ ನಾಮಫಲಕವನ್ನು ಜಿಲ್ಲಾದ್ಯಂತ ಎಲ್ಲ ಮುಜರಾಯಿ ದೇವಾಲಯಗಳ ಮುಂದೆ ಪ್ರದರ್ಶಿಸಬೇಕೆಂದು ದಲಿತ ಮುಖಂಡರೊಬ್ಬರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದಾಗ ಸ್ಪಂದಿಸಿದ ಜಿಲ್ಲಾಧಿಕಾರಿಗಳು ತಹಶೀಲ್ದಾರ್, ಕಾರ್ಯನಿರ್ವಾಹಕ ಅಧಿಕಾರಿಗಳ ವ್ಯಾಪ್ತಿಗೆ ಬರುವ ಮುಜರಾಯಿ ದೇವಾಲಯಗಳಲ್ಲಿ ಈ ನಾಮಫಲಕವನ್ನು ಕಟ್ಟು ನಿಟ್ಟಾಗಿ ಅಳವಡಿಸಲು ಸೂಚಿಸಿದರು.
     ಕೋರಾ ಹೋಬಳಿ ಬಿಟ್ಟನಕುರಿಕೆ ಗ್ರಾಮದಲ್ಲಿ ಅಲ್ಪ-ಸ್ಪಲ್ಪ ಜಮೀನು ಹೊಂದಿರುವ 30 ರಿಂದ 40 ದಲಿತರ ಕುಟುಂಬಗಳಿದ್ದು, ಇವರ  ಜಮೀನಿಗೆ ಗೊಬ್ಬರ ಗಾಡಿಗಳು ಹೋಗಲು ರಸ್ತೆ ಸಂಪರ್ಕ ಇರುವುದಿಲ್ಲ. ಅಲ್ಲದೇ ಈ ಗ್ರಾಮದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ  ದಲಿತರ ಸ್ಮಶಾನದ ಜಾಗವನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ ಎಂದು ದಲಿತ ಮುಖಂಡರೊಬ್ಬರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಜಿಲ್ಲಾಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ ರಸ್ತೆ ಸಂಪರ್ಕ ಕಲ್ಪಿಸಬೇಕು. ಸ್ಮಶಾನದ ಜಾಗವನ್ನು ಒತ್ತುವರಿಯಾಗಿರುವ ಬಗ್ಗೆ ಮಾಹಿತಿ ನೀಡಿ ಎಂದು ತಹಶೀಲ್ದಾರ್‍ಗೆ ಸೂಚಿಸಿದರು.
    ತುಮಕೂರು ತಾಲೂಕು ಮಲ್ಲಸಂದ್ರ ಗ್ರಾಮ ಪಂಚಾಯ್ತಿ ಹಬ್ಬತ್ತನಹಳ್ಳಿ ಗ್ರಾಮದಲ್ಲಿ ದಲಿತ ಕಾಲೋನಿಯಲ್ಲಿ ಸುಮಾರು 200 ಮನೆಗಳಿದ್ದು, ಈ ಕಾಲೋನಿಗಳ ಜನರ ಅನುಕೂಲಕ್ಕಾಗಿ ಚರಂಡಿ ವ್ಯವಸ್ಥೆ ಕಲ್ಪಿಸುವ ಬಗ್ಗೆ   ಜಿಲ್ಲಾಧಿಕಾರಿಗಳು ಪ್ರಶ್ನಿಸಿದಾಗ  ಮಾಹಿತಿ ನೀಡಿದ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್  ಸದರಿ ಗ್ರಾಮದಲ್ಲಿ ಚರಂಡಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವುದಕ್ಕೆ ಸುಮಾರು 15ಲಕ್ಷ ರೂ.ಗಳ ಅನುದಾನದ ಅಗತ್ಯತೆಯಿದ್ದು, ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಗಳ ಅನುದಾನದಲ್ಲಿ ಹಣ ಬಿಡುಗಡೆಯಾದಲ್ಲಿ ಕೂಡಲೇ ಕಾಮಗಾರಿಯನ್ನು ಕೈಗೊಳ್ಳಲಾಗುವುದು ಎಂದು   ತಿಳಿಸಿದರು.
     ಪರಿಶಿಷ್ಟ ಜಾತಿ/ಪಂಗಡ ಹಾಗೂ ಮಾಜಿ ಸೈನಿಕರಿಗಾಗಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ    ಬರುವ ಒಂದು ತಿಂಗಳೊಳಗಾಗಿ ಭೂ-ಲಭ್ಯತೆ ಪಟ್ಟಿ ಪ್ರಕಟಿಸಲು ಕ್ರಮ ಕೈಗೊಳ್ಳಬೇಕೆಂದು ಉಪವಿಭಾಗಾಧಿಕಾರಿ  ಹಾಗೂ ತಹಶೀಲ್ದಾರ್‍ಗಳಿಗೆ ಸೂಚಿಸಿದರು.  ಪಟ್ಟಿ ಪ್ರಕಟವಾದ ನಂತರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ನಿವೇಶನ ಹಂಚಿಕೆಗೆ ಕ್ರಮ ಕೈಗೊಳ್ಳಲಾಗುವುದೆಂದರು. 
     ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು 16 ದಲಿತ ಕಾಲೋನಿಗಳಿದ್ದು, ವಾಸವಿರುವ ದಲಿತ ನಿವಾಸಿಗಳಿಗೆ ಪಾಲಿಕೆಯಿಂದ ನಿವೇಶನ ಖಾತೆ ನೀಡುವಾಗ ಉದ್ದೇಶಪೂರ್ವಕವಾಗಿ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂದು   ಕೊಳಗೇರಿ ಮುಖಂಡರೊಬ್ಬರು ಸಭೆಗೆ ಮನವಿ ಮಾಡಿದರು.   ಮನವಿಯನ್ನು ಸ್ವೀಕರಿಸಿದ ಜಿಲ್ಲಾಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
    ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|| ಕೋನವಂಶಿಕೃಷ್ಣ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾ ಧಿಕಾರಿ ಶುಭಾ ಕಲ್ಯಾಣ್, ಉಪ ವಿಭಾಗಾಧಿಕಾರಿಗಳಾದ ಸಿ.ಎಲ್. ಶಿವಕುಮಾರ್ ಹಾಗೂ ನಂದಿನಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಮೇಶ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಹೆಚ್.ಎಸ್ ಪ್ರೇಮ್‍ನಾಥ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರೇಮಾ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸುಬ್ರಾನಾಯ್ಕ್ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap