ಉತ್ತಮ ಗುಣಮಟ್ಟದ ಬಿತ್ತನೆ ಬೀಜ ವಿತರಣೆಗೆ ಸಚಿವ ಬಿ.ಸಿ.ಪಾಟೀಲ್ ಸೂಚನೆ

ಚಿತ್ರದುರ್ಗ

   ಮುಂಗಾರು ಹಂಗಾಮು ಪ್ರಾರಂಭವಾಗಿದ್ದು, ರೈತರಿಗೆ ಉತ್ತಮ ಗುಣಮಟ್ಟದ ಶೇಂಗಾ ಬಿತ್ತನೆ ಬೀಜವನ್ನು ವಿತರಣೆ ಮಾಡಬೇಕು. ಯಾವುದೇ ಕಾರಣಕ್ಕೂ ಕಳಪೆ ಬಿತ್ತನೆ ಬೀಜ ಮಾರಾಟ ಮಾಡಬಾರದು. ರೈತರಿಗೆ ಬಿತ್ತನೆ ಬೀಜ ವಿತರಣೆ ಮಾಡುವ ಮುನ್ನ ಬಿತ್ತನೆ ಬೀಜ ಪರೀಕ್ಷಿಸಿ ಮಾಡಬೇಕು.

    ಒಂದು ವೇಳೆ ಕಳಪೆಯಾಗಿದ್ದರೆ ಅವುಗಳನ್ನು ತಿರಸ್ಕರಿಸಬೇಕು. ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ವಿತರಿಸುವಂತೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಕೃಷಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಲಾಕ್‍ಡೌನ್ ಹಿನ್ನಲೆಯಲ್ಲಿ ಕೃಷಿ ಉತ್ಪನ್ನಗಳ ಸರಕು ಸಾಗಾಣಿಕೆ, ಬೀಜ ಗೊಬ್ಬರ ಸರಬರಾಜು ಸೇರಿದಂತೆ ಕೃಷಿ ಚಟುವಟಿಕೆಗಳ ಬಗ್ಗೆ ಕೈಗೊಂಡ ಅಗತ್ಯ ಕ್ರಮಗಳ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಕೋವಿಡ್-19 ಲಾಕ್‍ಡೌನ್ ಹಿನ್ನಲೆಯಲ್ಲಿ ಕೃಷಿ ಚಟುವಟಿಕೆ ನಡೆಸಲು ಯಾವುದೇ ನಿರ್ಬಂಧ ಇಲ್ಲ ಏಪ್ರಿಲ್ 1 ರಿಂದಲೇ ಎಲ್ಲಾ ನಿರ್ಬಂದಗಳನ್ನು ತೆರವು ಮಾಡಲಾಗಿದೆ. ಇತರೆ ಜಿಲ್ಲೆಗಳು ಸೇರಿದಂತೆ ಅಂತರಾಜ್ಯಗಳಿಗೂ ಸಾಗಾಟ ನಡೆಯುತ್ತಿದೆ. ರೈತರಿಗೆ ಮುಂದಿನ ಈಗ ಬೇಕಾಗಿರುವ ಬಿತ್ತನೆ ಬೀಜ, ಕೃಷಿ ಪರಿಕರಗಳು, ಇದಕ್ಕೆ ಪೂರಕವಾದ ರಿಪೇರಿ ಕೇಂದ್ರಗಳನ್ನು ತೆರೆಯಲು ಸೂಚಿಸಿದ್ದು ಯಾವುದೇ ಅಡೆತಡೆಗಳಿರುವುದಿಲ್ಲ. ಉಳುಮೆ, ಕೊಯ್ಲ ನಡೆಯಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ರೈತರು ಕೃಷಿ ಚಟುವಟಿಕೆ ಕೈಗೊಳ್ಳಬಹುದು ಎಂದು ಹೇಳಿದರು.

     ಆಲಿಕಲ್ಲು ಮಳೆಯಿಂದಾಗಿ ಬೆಳೆ ಹಾನಿಯಾದ ಪ್ರದೇಶದಲ್ಲಿ ಭೌತಿಕ ಸರ್ವೇ ಮಾಡಬೇಕು. ಜಿಲ್ಲೆಯಲ್ಲಿ ಎಷ್ಟು ಹೆಕ್ಟೇರ್ ಪ್ರದೇಶದಲ್ಲಿ ಯಾವ, ಯಾವ ಬೆಳೆ ಹಾನಿಯಾಗಿದೆ ಎಂಬುದರ ಕುರಿತು ಸವಿವರವಾದ ವರದಿ ನೀಡಲು ಸೂಚಿಸಿ ಇದನ್ನು ಶೀಘ್ರದಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.

  ಜಂಟಿ ಕೃಷಿ ನಿರ್ದೇಶಕ ಸದಾಶಿವ ರವರು ಸಭೆಯಲ್ಲಿ ಮಾತನಾಡಿ ಜಿಲ್ಲೆಯಲ್ಲಿ ಎಲ್ಲಾ 22 ರೈತ ಸಂಪರ್ಕ ಕೇಂದ್ರಗಳು ಹಾಗೂ ಕೃಷಿ ಯಂತ್ರಧಾರೆ ಕೇಂದ್ರಗಳು ತೆರೆದಿರುತ್ತವೆ. ಮುಂಗಾರು ಹಂಗಾಮಿಗೆ 87 ಸಾವಿರ ಮೆಟ್ರಿಕ್ ಟನ್ ಬಿತ್ತನೆ ಬೀಜ ನೀಡಲು ಗುರಿ ಹೊಂದಲಾಗಿದ್ದು ದೊಡ್ಡ ಬೆಳೆಗಳಾದ ಶೇಂಗಾ, ಮೆಕ್ಕೆಜೋಳ, ರಾಗಿ ಸೇರಿದಂತೆ ಸಿರಿಧಾನ್ಯಗಳ ಬಿತ್ತನೆ ಬೀಜವನ್ನು ವಿತರಣೆ ಮಾಡಲಾಗುತ್ತಿದೆಯಲ್ಲದೆ ಮುಂಗಾರು ಹಂಗಾಮಿಗೆ 53371 ಮೆಟ್ರಿಕ್ ಟನ್ ರಸಗೊಬ್ಬರ ಬೇಕಾಗಿದ್ದು 14557 ಮೆಟ್ರಿಕ್ ಟನ್ ಕಾಪು ದಾಸ್ತಾನು ಮಾಡಲಾಗಿದೆ ಎಂದರು.

     ಪುಷ್ಪ ಕೃಷಿ ಸಮೀಕ್ಷೆ; ಲಾಕ್‍ಡೌನ್ ಸಂದರ್ಭದಲ್ಲಿ ಹಣ್ಣು, ತರಕಾರಿ ಬೆಳೆಗಳಿಗಿಂತಲೂ ಹೆಚ್ಚು ನಷ್ಟ ಅನುಭವಿಸಿದವರು ಪುಷ್ಪ ಕೃಷಿಕರಾಗಿದ್ದು ಯಾವುದೇ ಧಾರ್ಮಿಕ ಕಾರ್ಯಕ್ರಮ, ಮದುವೆ, ಸಮಾರಂಭ, ಉತ್ಸವ, ಜಾತ್ರೆಗಳು ನಡೆಯದಿರುವುದರಿಂದ ಹೂ ಗೆ ಬೇಡಿಕೆ ಇಲ್ಲದೆ ನಷ್ಟ ಅನುಭವಿಸುವಂತಾಗಿದ್ದು ಸರ್ಕಾರವು ಹೂ ಬೆಳೆಗಾರರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಬೆಳೆ ಸಮೀಕ್ಷೆ ಮಾಡಲು ಸೂಚಿಸಲಾಗಿದೆ ಎಂದರು.

     ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಆಗ್ರಹ: ಹೊಳಲ್ಕೆರೆ ತಾಲ್ಲೂಕು ಸೇರಿದಂತೆ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಮೆಕ್ಕೆಜೋಳ ಬೆಳೆ ಬೆಳೆಯಲಾಗುತ್ತಿದೆ. ಈ ಬಾರಿ ಉತ್ತಮವಾಗಿ ಬೆಳೆ ಬಂದಿದ್ದು, ಕೂಡಲೇ ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವಂತೆ ಶಾಸಕ ಎಂ.ಚಂದ್ರಪ್ಪ ಕೃಷಿ ಸಚಿವರಿಗೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಪಡಿತರ ವ್ಯವಸ್ಥೆಯ ವ್ಯಾಪ್ತಿಗೆ ಮೆಕ್ಕೆಜೋಳ ಬಾರದ ಕಾರಣ ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ಅವಕಾಶ ಇಲ್ಲ. ಆದರೂ ಸಹ ಗುಜರಾಜ್, ರಾಜಸ್ತಾನದಲ್ಲಿ ಮೆಕ್ಕೆಜೋಳ ಆಹಾರ ಪೂರೈಕೆ ಪಟ್ಟಿಯಲ್ಲಿ ಇದೆ ಎಂದು ಮಾಹಿತಿ ಇದ್ದು ಇಲಾಖೆ ಕಾರ್ಯದರ್ಶಿಯವರ ಮೂಲಕ ಮಾಹಿತಿ ಪಡೆದು ಈ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಸಚಿವರು ತಿಳಿಸಿದರು.

       ಶೇಂಗಾ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಅನುಷ್ಠಾನಕ್ಕೆ ಮನವಿ: ಜಿಲ್ಲೆಯ ಮೊಳಕಾಲ್ಮುರು, ಚಳ್ಳಕೆರೆ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಯ ಶಿರಾ, ಪಾವಗಡ, ಮಧುಗಿರಿ ವ್ಯಾಪ್ತಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಶೇಂಗಾ ಬೆಳೆಯಲಾಗುತ್ತಿದೆ. ಸಂಕಷ್ಟದಲ್ಲಿರುವ ಶೇಂಗಾ ಬೆಳೆಗಾರರಿಗಾಗಿ 2018 ರಲ್ಲಿ ರಾಜ್ಯ ಸರ್ಕಾರ ಘೋಷಣೆ ಮಾಡಿದ್ದ ಶೇಂಗಾ ಬೆಳೆಗಾರರ ಪ್ಯಾಕೇಜ್ ಅನುಷ್ಠಾನ ಮಾಡುವಂತೆ ಶಾಸಕ ಟಿ.ರಘುಮೂರ್ತಿ ಸಚಿವರ ಗಮನಕ್ಕೆ ತಂದರು.

      ಸಮರ್ಪಕ ವಿದ್ಯುತ್ ಪೂರೈಕೆಗೆ ತಾಕೀತು: ಹೊಳಲ್ಕೆರೆ ತಾಲ್ಲೂಕಿನಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ಕೇವಲ 1.30 ಗಂಟೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಕೊಡುವ 1 ಗಂಟೆ ವಿದ್ಯುತ್ ಪೂರೈಕೆಯಲ್ಲಿ 10 ಬಾರಿ ವಿದ್ಯುತ್ ಕಟ್ ಮಾಡಲಾಗುತ್ತಿದೆ. ಇದರಿಂದ ರೈತರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಶಾಸಕ ಎಂ.ಚಂದ್ರಪ್ಪ ಬೆಸ್ಕಾಂ ಅಧಿಕಾರಿಗೆ ತೀವ್ರ ತರಾಟೆಗೆ ತೆಗೆದುಕೊಂಡರು.

     ಇದಕ್ಕೆ ಪ್ರತಿಕ್ರಿಯಿಸಿದ ಬೆಸ್ಕಾಂ ಅಧಿಕಾರಿ ಕೆಪಿಟಿಸಿಎಲ್ ಮಾರ್ಗದಲ್ಲಿ ಓವರ್ ಲೋಡ್ ಆಗುತ್ತಿರುವುದರಿಂದ ಕೇವಲ ಒಂದರಿಂದ ಒಂದುವರೆ ಗಂಟೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ಸಭೆಗೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ನೀವು ಸರಿಯಾದ ರೀತಿಯಲ್ಲಿ ವಿದ್ಯುತ್ ಪೂರೈಕೆ ಮಾಡದಿದ್ದರೆ ರೈತರು ಹೇಗೆ ಬದುಕಬೇಕು. ಓವರ್ ಲೋಡ್ ಆದಾಗ ಪರ್ಯಾಯ ವ್ಯವಸ್ಥೆ ಮಾಡಿಬೇಕು, ಇದಕ್ಕೆ ಸಂಬಂಧಿಸಿದಂತೆ ಸವಿವರವಾದ ವರದಿಯನ್ನು ಸಿದ್ದಪಡಿಸಿ ನೀಡಲು ಬೆಸ್ಕಾಂ ಅಧಿಕಾರಿಗೆ ಸಚಿವರು ಸೂಚನೆ ನೀಡಿದರು. ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ಸವಿತಾ ಮಾತನಾಡಿ, ಜಿಲ್ಲೆಯಲ್ಲಿ 1 ಲಕ್ಷ 63 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಬೆಳೆಯಲಾಗುತ್ತಿದೆ.

      ಈ ಬಾರಿ 89 ಹೆಕ್ಟೇರ್ ತೋಟಗಾರಿಕೆ ಬೆಳೆ ನಷ್ಟ ಉಂಟಾಗಿದೆ. ಹೆಚ್ಚಿನದಾಗಿ ಗಾಳಿ ಮತ್ತು ಮಳೆಯಿಂದಾಗಿ ಬಾಳೆ ಹೆಚ್ಚಿನ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಹೊಸದುರ್ಗ ತಾಲ್ಲೂಕಿನಲ್ಲಿ ಹೆಚ್ಚು ಬಾಳೆ ನಷ್ಟ ಆಗಿದೆ. ಈಗಾಗಲೇ ಜಂಟಿ ಸಮೀಕ್ಷೆಯಾಗಿದ್ದು, ಪರಿಹಾರ ತಂತ್ರಾಂಶದಲ್ಲಿ ಮಾಹಿತಿ ದಾಖಲಾಗಿಸಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು. ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಣ್ಣು, ತರಕಾರಿಗಳು ಬೆಳೆಯಲಾಗುತ್ತಿದ್ದು, ಇವುಗಳನ್ನು ಹೆಚ್ಚಿನ ದಿನ ಸಂಗ್ರಹಿಸುವ ದೃಷ್ಠಿಯಿಂದ ರಾಜ್ಯದ ಎಲ್ಲ ತಾಲ್ಲೂಕುಗಳಲ್ಲಿ ಕೋಲ್ಡ್ ಸ್ಟೋರೆಜ್‍ಗಳು ಹಾಗೂ ಆಹಾರ ಸಂಸ್ಕರಣೆ ಘಟಕಗಳ ಅವಶ್ಯಕತೆ ಇದೆ.

     ಇದರಿಂದ ರೈತರಿಗೆ ತುಂಬಾ ಸಹಾಯಕವಾಗಲಿದೆ, ಈ ನಿಟ್ಟಿನಲ್ಲಿ ಕಂಟೈನರ್‍ಗಳ ಮೂಲಕ ತಾತ್ಕಾಲಿಕವಾಗಿ ಎಲ್ಲಾ ಎಪಿಎಂಸಿಗಳಲ್ಲಿ ಕೋಲ್ಡ್ ಸ್ಟೋರೇಜ್ ಮಾಡಿದಲ್ಲಿ ಇಂತಹ ಸಂದರ್ಭದಲ್ಲಿ ರೈತರಿಗೆ, ಬೆಳೆಗಾರರಿಗೆ ಅನುಕೂಲವಾಗಲಿದೆ, ಈ ಬಗ್ಗೆ ಮಾರುಕಟ್ಟೆ ಸಚಿವರೊಂದಿಗೆ ಚರ್ಚಿಸಲಾಗಿದೆ ಎಂದು ಕೃಷಿ ಸಚಿವರು ತಿಳಿಸಿದರು.

    ರೈತರು ಬೆಳೆದ ಯಾವುದೇ ಬೆಳೆ ಮಾರಾಟ, ತೋಟಗಾರಿಕೆ ಹಣ್ಣು, ತರಕಾರಿ ಮಾರಾಟಕ್ಕೆ ಅಡೆತಡೆಗಳಿರುವುದಿಲ್ಲ. ಮತ್ತು ಚಟುವಟಿಕೆಗಳನ್ನು ಕೈಗೊಳ್ಳಲು ಸಹ ಯಾವುದೇ ಅಡೆತಡೆಗಳಿರುವುದಿಲ್ಲ. ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಜನರಲ್ಲಿ ವಿಶ್ವಾಸ ತುಂಬುವ ಕೆಲಸ ಮಾಡುವ ಮೂಲಕ ರೈತರಿಗೆ ನೆರವಾಗಲು ತಿಳಿಸಿದರು. ಸಭೆಯಲ್ಲಿ ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಎಂ.ಚಂದ್ರಪ್ಪ, ಗೂಳಿಹಟ್ಟಿ ಡಿ.ಶೇಖರ್, ಟಿ.ರಘುಮೂರ್ತಿ, ವಿಧಾನ ಪರಿಷತ್ ಸದಸ್ಯೆ ಜಯಮ್ಮ ಬಾಲರಾಜ್, ಜಿಲ್ಲಾಧಿಕಾರಿ ವಿನೋತ್ ಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೊನ್ನಾಂಬ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ರೈತ ಮುಖಂಡರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link