ಕೊರೋನಾ : ಸೂಕ್ತ ಚಿಕಿತ್ಸೆ ಒದಗಿಸುವಲ್ಲಿ ಸರ್ಕಾರ ವಿಫಲ : ಎಚ್ ಡಿಕೆ

ಬೆಂಗಳೂರು :

      ಕೊರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಈಗಿರುವ ಮೂರ್ನಾಲ್ಕು ಸಾವಿರ ರೋಗಿಗಳಿಗೆ ಚಿಕಿತ್ಸೆ ನೀಡಲು ಬೆಡ್ ಗಳಿಲ್ಲ, ವೆಂಟಿಲೇಟರ್ ಗಳ ಕೊರತೆ ಇದೆ. ಇದಕ್ಕೆ ಸ್ವಯಂ ಪ್ರೇರಿತ ಲಾಕ್ ಡೌನ್ ಒಂದೇ ಪರಿಹಾರ ಎಂದು ಹೇಳಿದ್ದಾರೆ.

     ಬೆಂಗಳೂರು ಸೇರಿದಂತೆ ರಾಜ್ಯದ ನಿವಾಸಿಗಳೇ, ನೀವು ಕೋವಿಡ್-19 ನಿಂದ ಪಾರಾಗಲು ಈಗ ಉಳಿದಿರುವುದು ಒಂದೇ ದಾರಿ. ಮನೆಯಲ್ಲೇ ಉಳಿದು ನೀವೇ ಸ್ವಯಂ ಘೋಷಿತ ಬಂದ್ ಆಚರಿಸಿ. ಪ್ರಾಣಕ್ಕಿಂತಲೂ ಹಣ ಮುಖ್ಯವಲ್ಲ. ಜೀವ ಇದ್ದರೆ ಹೇಗಾದರೂ ಬದುಕಬಹುದು. ನಿಮ್ಮ ಜೀವ ಜೀವನ ಈಗ ನಿಮ್ಮ ಕೈಯಲ್ಲಿದೆ ಎಂದು ಸಲಹೆ ಮಾಡಿದ್ದಾರೆ. ರಾಜ್ಯ ಸರ್ಕಾರ ಕೂಡ ಇದನ್ನೇ ಪರೋಕ್ಷವಾಗಿ ಹೇಳುತ್ತಿದೆ. ಕೊರೋನಾ ವೈರಸ್ ಸಮೂಹ ಪ್ರಸರಣದ ಈಗಿನ ಸ್ಥಿತಿಯಲ್ಲಿ ಮನೆಯಲ್ಲಿರುವುದೇ ‘ಮನೆ ಮದ್ದು’. ಈ ಸೋಂಕಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸರ್ಕಾರ ನಿಗದಿಪಡಿಸಿರುವುದು ದಿನಕ್ಕೆ 10-15 ಸಾವಿರ ರೂ. ಈ ದರ ಬಡವರಿಗಿರಲಿ, ಮೇಲ್ವರ್ಗದವರಿಗೂ ಭರಿಸಲು ಸಾಧ್ಯವಾಗದು ಎಂದಿದ್ದಾರೆ.

     ಒಂದು ಕುಟುಂಬದ ನಾಲ್ಕು ಜನರಿಗೆ ಕೊರೊನಾ ಬಂದರೆ ಖಾಸಗಿ ಆಸ್ಪತ್ರೆಯಲ್ಲಿ 15 ದಿನಗಳ ಚಿಕಿತ್ಸೆಗೆ ಸರ್ಕಾರ ನಿಗದಿಪಡಿಸಿರುವ ದರದ ಪ್ರಕಾರ 5-6 ಲಕ್ಷ ರೂ ಬೇಕು. ಬಡವರು ಮಧ್ಯಮವರ್ಗದವರು ಎಲ್ಲಿಂದ ತರುತ್ತಾರೆ? ಸರ್ಕಾರ ಕೈಚೆಲ್ಲಿ ಕುಳಿತಿರುವಾಗ ನಮ್ಮ ಜೀವ ನಾವೇ ಉಳಿಸಿಕೊಳ್ಳಬೇಕು. ದಯಮಾಡಿ ಎಚ್ಚರದಿಂದಿರಿ ಇದು ರಾಜ್ಯದ ಜನತೆಗೆ ನನ್ನ ಕಳಕಳಿಯ ಮನವಿ ಎಂದು ಹೇಳಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap