ತುಮಕೂರು
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಇರುವುದರಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾಂಕೇತಿಕವಾಗಿ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಆಚರಣೆ ಮಾಡಲಾಯಿತು.ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಓಎ ಮೋಹನ್, ರೆಡ್ಡಿ ಜನಸಂಘದ ಅಧ್ಯಕ್ಷ ಶ್ರೀನಿವಾಸರೆಡ್ಡಿ, ಜಿಲ್ಲಾ ಕಸಾಪ ಅಧ್ಯಕ್ಷೆ ಬಾ.ಹ.ರಮಾಕುಮಾರಿ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ವೆಂಕಟರಾಮ ರೆಡ್ಡಿ ಮಾತನಾಡಿ, ಆಧ್ಯಾತ್ಮಿಕ ಸಾಧನೆ ಮಾಡಿದ ಮಹಿಳೆಯರಲ್ಲಿ ಅಕ್ಕಮಹಾದೇವಿ ನಂತರ ಕೇಳಿ ಬರುವ ಹೆಸರು ಹೇಮರೆಡ್ಡಿ ಮಲ್ಲಮ್ಮ ಅವರದದ್ದು. ಅವರು ಸಾಂಸಾರಿಕ ಜೀವನ ನಡೆಸುತ್ತಲೇ ಆಧ್ಯಾತ್ಮಿಕದಲ್ಲಿ ಅಮೋಘ ಸಾಧನೆ ಮಾಡಿದವರು. ಇಂದಿನ ಕೌಟುಂಬಿಕ ಜೀವನ ಬಿಗಡಾಯಿಸಿದರೂ ಅದರಲ್ಲೂ ಹೇಗೆ ಆಧ್ಯಾತ್ಮಿಕವಾಗಿ ಜೀವನ ನಡೆಸಬೇಕು ಎಂಬುದರ ಬಗ್ಗೆ ತಿಳಿಸಿಕೊಟ್ಟ ಹೇಮರೆಡ್ಡಿ ಮಲ್ಲಮ್ಮರ ಜೀವನ ನಮಗೆ ಆದರ್ಶವಾಗಿದೆ ಎಂದು ತಿಳಿಸಿದರು.
ರೆಡ್ಡಿ ಜನಸಂಘದ ಅಧ್ಯಕ್ಷ ಶ್ರೀನಿವಾಸರೆಡ್ಡಿ ಮಾತನಾಡಿ, ಈ ಬಾರಿ ನೀತಿ ಸಂಹಿತೆ ಇರುವುದರಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾಂಕೇತಿಕವಾಗಿ ಆಚರಣೆ ಮಾಡಲಾಗುತ್ತಿದೆ. ಮುಂದಿನ ವರ್ಷ ಎಲ್ಲಾ ಸಮಾಜದ ಬಾಂಧವರು ಸೇರಿಕೊಂಡು ದೊಡ್ಡ ಮಟ್ಟದಲ್ಲಿ ವಿಜೃಂಭಣೆಯಿಂದ ಆಚರಣೆ ಮಾಡಬೇಕು ಎಂದು ಮನವಿ ಮಾಡಿದರು.ಕಾರ್ಯಕ್ರಮದಲ್ಲಿ ಸಮಾಜದ ಬಾಂಧವರೊಂದಿಗೆ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಹಾಜರಾಗಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
