ಬೆಂಗಳೂರು
ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರನ್ನು ಸಂಸದೀಯ ಕಾರ್ಯದರ್ಶಿಗಳನ್ನಾಗಿ ನೇಮಿಸಿದ ಮುಖ್ಯಮಂತ್ರಿಗಳ ಕ್ರಮ ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿ ಸಂಬಂಧ ಎಂಟು ಸಂಸದೀಯ ಕಾರ್ಯದರ್ಶಿಗಳಿಗೆ ಹೈಕೋರ್ಟ್ ನೋಟಿಸ್ ಜಾರಿಮಾಡಿದೆ.
ಎಂ.ಬಿ.ಆದಿನಾರಾಯಣ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ಅರ್ಜಿಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿ ಸೇರಿ ನೂತನ ಸಂಸದೀಯ ಕಾರ್ಯದರ್ಶಿಗಳಿಗೆ ನೋಟಿಸ್ ನೀಡಿದೆ.
ಶಾಸಕಿ ಡಾ.ಅಂಜಲಿ ಹೇಮಂತ ನಿಂಬಾಳ್ಕರ್, ಕೌಜಲಗಿ ಮಹಾಂತೇಶ ಶಿವಾನಂದ, ರೂಪಕಲಾ ಎಂ.ಶಶಿಧರ್, ರಾಘವೇಂದ್ರ ಬಸವರಾಜ್ ಹಿಟ್ನಾಳ್, ಡಿ.ಎಸ್.ಹೊಲಗೇರಿ, ವಿಧಾನ ಪರಿಷತ್ ಸದಸ್ಯರಾದ ಕೆ.ಅಬ್ದುಲ್ ಜಬ್ಬಾರ್, ಐವಾನ್ ಡಿಸೋಜಾ ಮತ್ತು ಕೆ.ಗೋವಿಂದರಾಜ್ ಅವರನ್ನು ಸಂಸದೀಯ ಕಾರ್ಯದರ್ಶಿಗಳನ್ನಾಗಿ ನೇಮಿಸಿ ರಾಜ್ಯ ಸಂಸದೀಯ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ ಜ.7ರಂದು ಗೆಜೆಟ್ ಅಧಿಸೂಚನೆ ಹೊರಡಿಸಿದ್ದರು.
ಸಂಸದೀಯ ಕಾರ್ಯದರ್ಶಿಗಳ ನೇಮಕಾತಿಯ ಸಂವಿಧಾನದ 164 (1-ಎ)ಕ್ಕೆ ವಿಧಿಗೆ ವಿರುದ್ಧವಾಗಿದ್ದು, ಸಂಸದೀಯ ಕಾರ್ಯದರ್ಶಿಗಳನ್ನು ಆ ಹುದ್ದೆಯಿಂದ ವಜಾಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಅರ್ಜಿದಾರರು ಕೋರಿದ್ದಾರೆ.
ಅರ್ಜಿಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿ ಸೇರಿದಂತೆ ನೂತನ ಸಂಸದೀಯ ಕಾರ್ಯದರ್ಶಿಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ