ಬೆಂಗಳೂರು
ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರನ್ನು ಪತ್ತೆಹಚ್ಚಿ ಗಡಿಪಾರುಗೊಳಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ವಕೀಲ ಕೆ.ಬಿ.ವಿಜಯಕುಮಾರ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಹಾಗೂ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ಪೀಠ, ಪ್ರತಿವಾದಿಗಳಾದ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೂ ನೋಟಿಸ್ ಜಾರಿಗೊಳಿಸಲು ಆದೇಶಿಸಲಾಗಿದೆ.ವಿಚಾರಣೆಯನ್ನು ಅ. 25ರೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಲಾಗಿದೆ.
ಅರ್ಜಿಯಲ್ಲೇನಿದೆ?:
ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ ಹೆಚ್ಚಾಗಿದೆ. ಅವರು, ನಕಲಿ ದಾಖಲೆಗಳನ್ನು ಸೃಷ್ಟಿಸಿ ಆ ಮೂಲಕ ಆಧಾರ್, ಮತದಾನದ ಗುರುತಿನ ಚೀಟಿಗಳನ್ನು ಪಡೆಯುತ್ತಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ಪ್ರಜೆಗಳನ್ನು ಪತ್ತೆ ಹಚ್ಚಿ, ಗಡಿಪಾರು ಮಾಡುವ ನಿಟ್ಟಿನಲ್ಲಿ ತಕ್ಷಣ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ