ಹೊನ್ನಾಳಿ:
ಜನತೆಯ ಹಿತದೃಷ್ಟಿಯಿಂದ ಕುಡಿಯುವ ನೀರು ಪೂರೈಕೆಗೆ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಬೇಕು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಶಾಸಕ ಎಂ.ಪಿ. ರೇಣುಕಾಚಾರ್ಯ ಮನವಿ ಮಾಡಿದರು.
ಬರಗಾಲದಿಂದಾಗಿ ರೈತರು ಅನುಭವಿಸುತ್ತಿರುವ ತೊಂದರೆ ಮತ್ತು ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಬುಧವಾರ ವಿಷಯ ಪ್ರಸ್ತಾಪಿಸಿ ಅವರು ಮಾತನಾಡಿದರು.
ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಹೊನ್ನಾಳಿ, ನ್ಯಾಮತಿ ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೊಳಿಸಿ ಕುಡಿಯುವ ನೀರಿಗೆ ಹೆಚ್ಚು ಅನುದಾನ ಬಿಡುಗಡೆಗೊಳಿಸಬೇಕು ಎಂದು ಮುಖ್ಯಮಂತ್ರಿ, ಕಂದಾಯ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ತಿಳಿಸಿದರು.
ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳು ಡಾ.ಡಿ.ಎಂ. ನಂಜುಂಡಪ್ಪ ವರದಿಯಂತೆ ಅತಿ ಹಿಂದುಳಿದ ತಾಲೂಕುಗಳ ಪಟ್ಟಿಯಲ್ಲಿದ್ದು, ಸರಕಾರ ಈ ತಾಲೂಕುಗಳ ಬಗ್ಗೆ ವಿಶೇಷ ಗಮನಹರಿಸಿ ಸಾರ್ವಜನಿಕ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡು ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಬೇಕು. ಕ್ಷೇತ್ರದಲ್ಲಿ ಈ ಬಾರಿ ಮಳೆಯ ಪ್ರಮಾಣ ಕಡಿಮೆಯಾಗಿ ಕುಡಿಯುವ ನೀರಿಗೆ ಜನತೆ ಹಾಹಾಕಾರಪಡುವಂತಾಗಿದೆ.
ಹೊನ್ನಾಳಿ ವ್ಯಾಪ್ತಿಯಲ್ಲಿ ತುಂಗಭದ್ರಾ ನದಿ ಹರಿಯುತ್ತಿದ್ದರೂ “ಸಮುದ್ರದ ನೆಂಟಸ್ತನ, ಉಪ್ಪಿಗೆ ಬಡತನ” ಎಂಬಂತೆ ಕುಡಿಯಲು ನೀರಿಲ್ಲದೆ ಜನತೆ ಪರಿತಪಿಸುತ್ತಿದ್ದಾರೆ. ನೀರಿನ ಕೊರತೆ ನೀಗಿಸುವ ಉದ್ದೇಶದಿಂದ ತುಂಗಭದ್ರಾ ನದಿಯಿಂದ ಬಹುತೇಕ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಬಹು ಗ್ರಾಮ ಯೋಜನೆಯಡಿ ಫಲವನಹಳ್ಳಿ ಇತರೆ ಗ್ರಾಮಗಳು, ದೇವರಹೊನ್ನಾಳಿ ಇತರೆ ಹಲವು ಗ್ರಾಮಗಳ ಎರಡು ಪೈಲಟ್ ಯೋಜನೆಗಳನ್ನು ತಯಾರಿಸಿ 57 ಕೋಟಿ ರೂ.ಗಳ ವೆಚ್ಚದ ಪ್ರಸ್ತಾವನೆಯನ್ನು ಈಗಾಗಲೇ ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ವಿವರಿಸಿದರು.
ಸರಕಾರ ದಾವಣಗೆರೆ ಜಿಲ್ಲೆಯ ಹರಪನಹಳ್ಳಿ, ಜಗಳೂರು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಆದರೆ, ಹೊನ್ನಾಳಿ-ನ್ಯಾಮತಿ ತಾಲೂಕುಗಳನ್ನು ಕಡೆಗಣಿಸಿದೆ. ಈ ಹಿಂದೆ ಮುಖ್ಯಮಂತ್ರಿಗಳು, ಕಂದಾಯ ಸಚಿವರನ್ನು ಭೇಟಿ ಮಾಡಿ ಹೊನ್ನಾಳಿ, ನ್ಯಾಮತಿ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುವಂತೆ ನಾಲ್ಕಾರು ಬಾರಿ ಮನವಿ ಮಾಡಲಾಗಿತ್ತು. ಸರಕಾರಕ್ಕೆ ಈ ಕುರಿತ ನೈಜ ವರದಿಯನ್ನು ಸಲ್ಲಿಸಲು ಜಿಲ್ಲಾಡಳಿತಕ್ಕೆ ಹಲವಾರು ಬಾರಿ ಮನವಿ ಮಾಡಿದರೂ ಇದನ್ನು ಗಂಭೀರವಾಗಿ ಪರಿಗಣಿಸದೆ ಜನತೆಯ ಹಿತವನ್ನು ಜಿಲ್ಲಾಡಳಿತ ಕಡೆಗಣಿಸಿದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
