ಜನರಲ್ಲಿ ಮತ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಕರೆ

ಚಿತ್ರದುರ್ಗ:

       ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತದಾನ ದಾಖಲಾಗುವಂತಾಗಲು, ಜಿಲ್ಲೆಯ ಎಲ್ಲ ಆಶಾ ಕಾರ್ಯಕರ್ತೆಯರು ಮತದಾನದ ಜಾಗೃತಿ ಮೂಡಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಹೇಳಿದರು. ನಗರದ ತ.ರಾ.ಸು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಸಹಯೋಗದಲ್ಲಿ ಆಶಾ ಕಾರ್ಯಕರ್ತೆಯರಿಗೆ ಆಯೋಜಿಸಲಾದ ಮತದಾನ ಜಾಗೃತಿ ಕುರಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 

       ಜಿಲ್ಲೆಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಮತದಾನ ಜಾಗೃತಿ ಮೂಡಿಸುವ ಬ್ಯಾನರ್, ಪ್ಲೆಕ್ಸ್‍ಗಳಲ್ಲಿ ಏಪ್ರಿಲ್ 18 ರಂದು ಲೋಕಸಭೆ ಚುನಾವಣೆಯ ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಆದರೂ ಶೇ. 100 ರಷ್ಟು ಮತದಾನ ಆಗುವಂತೆ ಮಾಡುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಹಿರಿದಾಗಿದೆ. ಆಶಾ ಕಾರ್ಯಕರ್ತೆಯರು ಸ್ಥಳೀಯ ಮಟ್ಟದಲ್ಲಿ ಎಲ್ಲರೊಡನೆ ಉತ್ತಮ ಭಾಂದವ್ಯ ಹೊಂದಿರುತ್ತೀರಿ ಹಾಗಾಗಿ ಮತದಾರ ಪಟ್ಟಿಯಲ್ಲಿ ಅರ್ಹ ಮತದಾರರನ್ನು ಗುರುತಿಸಿ, ಬಿಟ್ಟಿರುವ ಮತದಾರರನ್ನು ನೋಂದಣಿ ಮಾಡಿಸಿ ಅವರಿಗೆ ಅರಿವು ಮೂಡಿಸಬೇಕು ಎಂದು ಹೇಳಿದರು.

       ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಸತ್ಯಭಾಮ ಮಾತನಾಡಿ 18 ವರ್ಷ ವಯಸ್ಸು ಪೂರ್ಣಗೊಂಡವರು, ಇದುವರೆಗೂ ಮತದಾರರ ಪಟ್ಟಿಗೆ ಹೆಸರು ಸೇರಿಸದೇ ಇದ್ದಲ್ಲಿ, ಅಂತಹವರು ಕೂಡಲೆ ಆಯಾ ಮತಗಟ್ಟೆಯ ಬಿಎಲ್‍ಒ ಅವರಲ್ಲಿ ನಮೂನೆ 6 ಭರ್ತಿ ಮಾಡಿ ಸಲ್ಲಿಸಬೇಕು. ಆಶಾ ಕಾರ್ಯಕರ್ತೆಯರು, ಇಂತಹ ಅರ್ಹರನ್ನು ಮತದಾರರ ಪಟ್ಟಿಗೆ ಸೇರಿಸಲು ನಿಗಾ ವಹಿಸಬೇಕು. ಜಿಲ್ಲೆಯಲ್ಲಿ ಮಹಿಳಾ ಮತದಾರರು ಹೆಚ್ಚಿನ ಪ್ರಮಾಣದಲ್ಲಿದ್ದರೂ, ಮಹಿಳಾ ಮತದಾನ ಮಾತ್ರ ಕಡಿಮೆ ಪ್ರಮಾಣ ದಾಖಲಾಗುತ್ತಿದೆ. ಈ ಬಾರಿ ಮಹಿಳಾ ಮತದಾನ ಪ್ರಮಾಣ ಹೆಚ್ಚಾಗುವಂತೆ ಮಹಿಳೆಯರಿಗೆ ಜಾಗೃತಿ ಮೂಡಿಸಿ. ದಿವ್ಯಾಂಗರಿಗೆ ಮತದಾನ ಮಾಡಲು ವಿಶೇಷ ಸೌಲಭ್ಯ ಒದಗಿಸಲಾಗುವುದು ಎಂದು ಹೇಳಿದರು.

         ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ವಿಜಯಕುಮಾರ್ ನೈತಿಕ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸಿ.ಎಲ್ ಪಾಲಾಕ್ಷ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಕುಮಾರಸ್ವಾಮಿ , ತಾಲ್ಲೂಕು ಕಾರ್ಯ ನಿರ್ವಹಣಾಧಿಕಾರಿ ಕೃಷ್ಣ ನಾಯ್ಕ ಹಾಗೂ ಚಿತ್ರದುರ್ಗ ತಾಲ್ಲೂಕಿನ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap