ಚಿತ್ರದುರ್ಗ:
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ನಡೆದ ಜನಸಂಪರ್ಕ ಸಭೆಯಲ್ಲಿ ಸರ್ಕಾರದ ವಿವಿಧ ಸವಲತ್ತುಗಳಿಗಾಗಿ ಸಾರ್ವಜನಿಕರಿಂದ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಲ್ಲಾಭಕ್ಷ್ ಅರ್ಜಿಗಳನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎನ್.ಎಸ್.ಯು.ಐ.ರಾಜ್ಯ ಉಪಾಧ್ಯಕ್ಷ ಚೇತನ್ ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಬಡವರಿಗಾಗಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದರು. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ವತಂತ್ರವಾಗಿ ಅಧಿಕಾರ ಹಿಡಿಯುವಷ್ಟು ಬಹುಮತ ಸಿಗದ ಕಾರಣ ಜೆಡಿಎಸ್.ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದರಿಂದ ಈಗ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದೆ. ಕಾಂಗ್ರೆಸ್ ಪಕ್ಷ ಯಾವಾಗಲೂ ಬಡವರು, ಹಿಂದುಳಿದವರು, ದಲಿತರು, ಶೋಷಿತರು, ಅಲ್ಪಸಂಖ್ಯಾತರ ಪರವಾಗಿದೆ. ಮುಂದಿನ ಪಾರ್ಲಿಮೆಂಟ್ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಬಹುಮತ ನೀಡಿ ಕೇಂದ್ರದಲ್ಲಿ ಅಧಿಕಾರಕ್ಕೆ ತರುವ ಮೂಲಕ ಕೋಮುವಾದಿ ಬಿಜೆಪಿ.ಯನ್ನು ತೊಲಗಿಸಿ ಎಂದು ಮನವಿ ಮಾಡಿದರು.
ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಲ್ಲಾಭಕ್ಷ್ ಮಾತನಾಡುತ್ತ ಜನಸಂಪರ್ಕ ಸಭೆಯಲ್ಲಿ ಅರ್ಜಿ ಸಲ್ಲಿಸುವವರನ್ನು ಸಂಬಂಧಪಟ್ಟ ಕಚೇರಿಗೆ ಕರೆದುಕೊಂಡು ಹೋಗಿ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಕೊಡಿಸುವಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇವೆ. ರಾಜ್ಯ ಸಮ್ಮಿಶ್ರ ಸರ್ಕಾರ ಹಿಂದಿನ ಕಾಂಗ್ರೆಸ್ ಸರ್ಕಾರದ ಎಲ್ಲಾ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗುತ್ತಿದೆ ಯಾರೂ ಭಯಪಡುವುದು ಬೇಡ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಾಂದ್‍ಪೀರ್, ಎನ್.ಎಸ್.ಯು.ಐ. ಜಿಲ್ಲಾಧ್ಯಕ್ಷ ಡಾ.ಎಸ್.ರಾಜೇಂದ್ರಪ್ರಸಾದ್, ವಿನ್ಯಾಸ್ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
