ಪಾಲಿಕೆಯಲ್ಲೂ ಜೆಡಿಎಸ್ ಪಾತ್ರ ನಿರ್ಣಾಯಕ

ದಾವಣಗೆರೆ

     ಬರುವ ನವೆಂಬರ್ 12ರಂದು ನಿಗದಿಯಾಗಿರುವ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಯಾವುದೇ ಪಕ್ಷಗಳು ಸಹ ಸ್ಪಷ್ಟ ಬಹುಮತ ಪಡೆಯುವುದಿಲ್ಲ. ಹೀಗಾಗಿ ಪಾಲಿಕೆ ಆಡಳಿತ ರಚನೆಯಲ್ಲೂ ಜೆಡಿಎಸ್ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಹರಿಹರ ಮಾಜಿ ಶಾಸಕ, ಜೆಡಿಎಸ್ ಮುಖಂಡ ಎಚ್.ಎಸ್.ಶಿವಶಂಕರ್ ಭವಿಷ್ಯ ನುಡಿದರು.

    ನಗರದ ಪಿಜೆ ಬಡಾವಣೆಯಲ್ಲಿನ ಶ್ರೀರಾಮ ಕಲ್ಯಾಣ ಮಂದಿರದ ಬಳಿಯಲ್ಲಿರುವ ಜೆಡಿಎಸ್ ಕಚೇರಿಯಲ್ಲಿ ಗುರುವಾರ ಮಹಾನಗರ ಪಾಲಿಕೆಯ ಚುನಾವಣೆಯ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಸಕ್ತ ಮಹಾನಗರ ಪಾಲಿಕೆ ಚುನಾವಣೆಯಲ್ಲೂ ಸಹ ಯಾವುದೇ ಪಕ್ಷ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಹೀಗಾಗಿ ಜೆಡಿಎಸ್ ನಿರ್ಣಾಯಕ ಪಾತ್ರ ವಹಿಸುವುದಲ್ಲಿ ಯಾವುದೇ ಸಂದೇಹವಿಲ್ಲ ಎಂದರು.

    ರಾಷ್ಟ್ರೀಯ ಪಕ್ಷಗಳಾಗಿರುವ ಕಾಂಗ್ರೆಸ್ ಹಾಗೂ ಬಿಜೆಪಿ ಆಡಳಿತದಿಂದ ಜನತೆ ಬೇಸತ್ತು ಹೋಗಿದ್ದಾರೆ. ಈಗ ಜನತೆ ಬದಲಾವಣೆ ಬಯಸಿದದ್ದು, ಮಹಾನಗರ ಪಾಲಿಕೆಯ ಎಲ್ಲ 45 ವಾರ್ಡ್‍ಗಳಿಂದ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ, ಕನಿಷ್ಠ 15 ವಾರ್ಡ್‍ಗಳಲ್ಲಿ ಗೆಲ್ಲಿಸಿಕೊಂಡು ಬರುತ್ತೇವೆ ಎಂದರು.

   ಟಿಕೆಟ್ ಆಕಾಂಕ್ಷಿಗಳು ಆಯಾ ಕ್ಷೇತ್ರಗಳ ವ್ಯಾಪ್ತಿಯ ಅಧ್ಯಕ್ಷರ ಬಳಿ ಅರ್ಜಿ ಸಲ್ಲಿಸಬೇಕು. ಒಬ್ಬರಿಗಿಂತ ಹೆಚ್ಚು ಜನರು ಆಕಾಂಕ್ಷಿಗಳಿರುವ ಕಡೆಗಳಲ್ಲಿ ಪಕ್ಷದ ವರಿಷ್ಠರು ತೀರ್ಮಾನಕ್ಕೆ ಬದ್ಧವಾಗಿರಬೇಕು ಎಂದು ಸಲಹೆ ನೀಡಿದ ಅವರು, ಪಕ್ಷ ಯಾವುದೇ ಅಭ್ಯರ್ಥಿಗೆ ಟಿಕೆಟ್ ನೀಡಿದರೂ ಸಹ ಅವರನ್ನು ಗೆಲ್ಲಿಸಲು ಪ್ರಾಮಾಣಿಕವಾಗಿ ಶ್ರಮಪಡುವ ಮೂಲಕ ಪಕ್ಷವನ್ನು ಬಲಪಡಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

     ಸಭೆಯಲ್ಲಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ. ಚಿದಾನಂದಪ್ಪ, ಜೆಡಿಎಸ್ ಎಸ್‍ಟಿ ಘಟಕದ ರಾಜ್ಯಾಧ್ಯಕ್ಷ ಹೊದಿಗೆರೆ ರಮೇಶ್, ದಕ್ಷಿಣ ವಿಧಾನಸಭೆ ಕ್ಷೇತ್ರದ ಅಧ್ಯಕ್ಷ ಜೆ.ಅಮಾನುಲ್ಲಾ ಖಾನ್, ರಾಜ್ಯ ಉಪಾಧ್ಯಕ್ಷ ಕೆ.ಬಿ. ಕಲ್ಲೇರುದ್ರೇಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶೀಲಾ ಕುಮಾರ್, ಜಿಲ್ಲಾ ಕಾರ್ಯಾಧ್ಯಕ್ಷ ಟಿ.ಗಣೇಶ್ ದಾಸಕರಿಯಪ್ಪ, ಮುಖಂಡರಾದ ಎ.ಕೆ. ನಾಗಪ್ಪ, ಎಸ್.ಎಸ್.ದುಗ್ಗೇಶ್, ಮನ್ಸೂರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ  

Recent Articles

spot_img

Related Stories

Share via
Copy link