ಚಳ್ಳಕೆರೆ
ಇತ್ತೀಚಿನ ದಿನಗಳಲ್ಲಿ ಯವಕರೂ ಸೇರಿದಂತೆ ಎಲ್ಲಾ ವರ್ಗದ ಜನರು ಯಾವುದೇ ರೀತಿಯ ನಿಯಂತ್ರಣವಿಲ್ಲದೆ ತಂಬಾಕಿನ ಅಂಶದ ಎಲ್ಲಾ ಪದಾರ್ಥಗಳ ಸೇವನೆ ಹೆಚ್ಚಾಗಿದ್ದು, ಇದು ಪ್ರಾಣಕ್ಕೆ ಅಪಾಯವನ್ನು ತಂದೊಡ್ಡುವ ಸಂಭವಿದ್ದು, ತಂಬಾಕು ಸೇವನೆ ನಿಯಂತ್ರಣಕ್ಕೆ ಎಲ್ಲಾ ಅಧಿಕಾರಿಗಳು ಆರೋಗ್ಯ ಇಲಾಖೆಯೊಂದಿಗೆ ಸಹಕರಿಸುವಂತೆ ತಹಶೀಲ್ದಾರ್ ಎಂ.ಮಲ್ಲಿಕಾರ್ಜುನ ತಿಳಿಸಿದರು.
ಅವರು, ಶುಕ್ರವಾರ ಇಲ್ಲಿನ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆರೋಗ್ಯ ಇಲಾಖೆಯ ರಾಷ್ಟ್ರೀಯ ಬಾಲಸ್ವಸ್ಥ್ಯ ಯೋಜನೆಯ ಕಾರ್ಯಗಾರ ಮತ್ತು ತಂಬಾಕು ನಿಯಂತ್ರಣ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎನ್.ಪ್ರೇಮಸುಧಾ, ಆರ್‍ಬಿಎಸ್‍ಕೆ ಯೋಜನೆಯಡಿ ತಾಲ್ಲೂಕಿನ ಎಲ್ಲಾ ಶಾಲೆಗಳಲ್ಲೂ ಮಕ್ಕಳ ಆರೋಗ್ಯ ತಪಾಸಣಾ ಕಾರ್ಯವನ್ನು ಆರೋಗ್ಯ ಇಲಾಖೆಯ ತಜ್ಞ ವೈದ್ಯರು ಪ್ರತಿ ವರ್ಷವೂ ಹಂತ ಹಂತವಾಗಿ ಪರೀಕ್ಷಿಸಿ ಅವರಿಗೆ ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ಮಕ್ಕಳ ಆರೋಗ್ಯ ಸುಧಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ಧಾರೆ. ಪ್ರಸ್ತುತ ವರ್ಷವೂ ಸಹ ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಶಿಕ್ಷಣ ಇಲಾಖೆ ಸಹಕಾರ ನೀಡುವಂತೆ ವಿನಂತಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್.ವೆಂಕಟೇಶಪ್ಪ ಮಾತನಾಡಿ, ಆರೋಗ್ಯ ಇಲಾಖೆಯ ಆರ್‍ಬಿಎಸ್‍ಕೆ ಕಾರ್ಯಕ್ರಮ ಶಿಕ್ಷಣ ಇಲಾಖೆಯ ಆರೋಗ್ಯ ಸುಧಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಈಗಾಗಲೇ ತಾಲ್ಲೂಕಿನ ಎಲ್ಲಾ ಶಾಲೆಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಸಂಪೂರ್ಣ ಮಾಹಿತಿಯನ್ನು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನೀಡಿದ್ದು, ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು, ಎಟಿಎಂಸಿ ಸಮಿತಿಯವರಿಗೆ ನಿರ್ದೇಶನ ನೀಡಿದ್ದು, ಈ ಯೋಜನೆಗೆ ಹೆಚ್ಚು ಸಹಕಾರ ನೀಡುವ ಭರವಸೆ ನೀಡಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲಾ ಅಧಿಕಾರಿಗಳ ಸಲಹೆಯಂತೆ ತಹಶೀಲ್ದಾರ್ ಎಂ.ಮಲ್ಲಿಕಾರ್ಜುನವರನ್ನು ತಾಲ್ಲೂಕು ತಂಬಾಕು ನಿಯಂತ್ರಣ ಕಾರ್ಯಗಾರ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿಗಳೂ ಸೇರಿದಂತೆ ವಿವಿಧ ಅಧಿಕಾರಿಗಳನ್ನು ಸದಸ್ಯರನ್ನಾಗಿ ನೇಮಿಸಿ ಶೀಘ್ರದಲ್ಲೇ ಕಾರ್ಯಾರಂಭ ಮಾಡುವಂತೆ ಸಭೆಯಲ್ಲಿ ನಿರ್ಧರಿಸಲಾಯಿತು. ಕ್ಷೇತ್ರ ವ್ಯಾಪ್ತಿಯ ಎಲ್ಲಾ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಪ್ರಾರಂಭದಲ್ಲಿ ಕ್ಷೇತ್ರ ಆರೋಗ್ಯ ಸಹಾಯಕ ಎಸ್.ಬಿ.ತಿಪ್ಪೇಸ್ವಾಮಿ ಸ್ವಾಗತಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
