ತುಮಕೂರು
ಬರುವ ನವೆಂಬರ್ 1ರಂದು ಜಿಲ್ಲಾಡಳಿತದ ವತಿಯಿಂದ ನಡೆಯುವ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿ ಮತ್ತು ವೈಶಿಷ್ಟ್ಯಪೂರ್ಣವಾಗಿ ಆಚರಿಸುವ ಸಂಬಂಧ ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅಧ್ಯಕ್ಷತೆಯಲ್ಲಿಂದು ಪೂರ್ವ ಭಾವಿ ಸಭೆ ನಡೆಯಿತು.
ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವೈಶಿಷ್ಟ್ಯಪೂರ್ಣವಾಗಿ ಆಚರಿಸಬೇಕು. ರಾಜ್ಯೋತ್ಸದ ಅಂಗವಾಗಿ ನ.1 ರಂದು ಬೆಳಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಭುವನೇಶ್ವರಿಯ ಆಕರ್ಷಕ ಮೆರವಣಿಗೆಯನ್ನು ಏರ್ಪಡಿಸಲಾಗಿದ್ದು, ಮೆರವಣಿಗೆಯು ಆಶೋಕ ರಸ್ತೆ, ಟೌನ್ಹಾಲ್, ಬಿ.ಹೆಚ್.ರಸ್ತೆ ಡಾ: ಶ್ರೀ ಶಿವಕುಮಾರ ಸ್ವಾಮೀಜಿ ಸರ್ಕಲ್ ಮೂಲಕ ಮಹಾತ್ಮಗಾಂಧಿ ಕ್ರೀಡಾಂಗಣವನ್ನು ತಲುಪಲಿದೆ.
ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾ ತಂಡಗಳು, ಆರೋಗ್ಯ ಇಲಾಖೆ, ಅರಣ್ಯ ಇಲಾಖೆ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ, ಮೊದಲಾದ ಇಲಾಖೆಗಳ ವಿಶೇಷ ಯೋಜನೆಗಳ ಪರಿಕಲ್ಪನೆ ಬಿಂಬಿಸುವ ಆಕರ್ಷಕ ಸ್ತಬ್ಧ ಚಿತ್ರಗಳನ್ನು ನಿರ್ಮಿಸಿ ಮೆರವಣಿಗೆಯಲ್ಲಿ ಭಾಗವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಅಂದು ಬೆಳಗ್ಗೆ 9 ಗಂಟೆಗೆ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಉಪಮುಖ್ಯಮಂತ್ರಿಗಳು, ಗೃಹ ಸಚಿವರು ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ: ಜಿ.ಪರಮೇಶ್ವರ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಕನ್ನಡ ನಾಡು-ನುಡಿ ಪ್ರದರ್ಶನವನ್ನು ಬಿಂಬಿಸುವ ಸಾಮೂಹಿಕ ಕಲಾ ಪ್ರದರ್ಶನಗಳನ್ನು ಶಾಲಾ ಮಕ್ಕಳಿಂದ ಏರ್ಪಡಿಸುವಂತೆ ಡಿಡಿಪಿಐ ತುಮಕೂರು ಅವರಿಗೆ ಸೂಚಿಸಿದರು.
ಕಲೆ, ಸಾಹಿತ್ಯ, ಕ್ರೀಡೆ, ಪತ್ರಿಕೋದ್ಯಮ ಇನ್ನಿತರೆ ರಂಗಗಳಲ್ಲಿ ಸಮಾಜಕ್ಕೆ ಸೇವೆ ಮಾಡಿರುವ 30 ಜನ ಸಾಧಕರನ್ನು ಗುರುತಿಸಿ ಅವರಿಗೆ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುವುದು.
ಈಗಾಗಲೇ ಪ್ರಶಸ್ತಿಗಳನ್ನು ನೀಡುವ ಕುರಿತು ಸಾಧಕರನ್ನು ಆಯ್ಕೆ ಮಾಡಲು ಸಮಿತಿಯನ್ನು ರಚಿಸಿದ್ದು, ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಅವರು ಅರ್ಹ ಸಾಧಕರನ್ನು ಗುರುತಿಸುವ ಜವಾಬ್ದಾರಿ ಸಮಿತಿಯದ್ದಾಗಿರುತ್ತದೆ ಎಂದರು.
ಅಂದು ಸಂಜೆ 4 ಗಂಟೆಗೆ ಗಾಜಿನ ಮನೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ 30 ಜನ ಸಾಧಕರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು. ನಂತರ ಕನ್ನಡ ಮತ್ತು ಸಂಸ್ಕತಿ ಇಲಾಖೆ ವತಿಯಿಂದ ಸಾಂಸ್ಕತಿಕ ಕಾರ್ಯಕ್ರಮಗಳನ್ನು ಹಾಗೂ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಂದ ವಿವಿಧ ಆಕರ್ಷಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕತಿ ಇಲಾಖೆ ಹಾಗೂ ಶಿಕ್ಷಣ ಇಲಾಖೆಗೆ ಸೂಚಿಸಿದರು.
ನ.1 ರ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಿ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ವ್ಯವಸ್ಥೆ ಮಾಡಿರುವ ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಡಾಗ್ ಷೋ, ಟೆನ್ನಿಸ್ಬಾಲ್, ಕ್ರಿಕೆಟ್ ಆಯೋಜಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ. ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಡಾ.ದೇವರಾಜ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜಕುಮಾರ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜಪ್ಪ ಆಪಿನಕಟ್ಟೆ, ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷೆ ಬಾ.ಹ.ರಮಾಕುಮಾರಿ, ಪಾಲಿಕೆ ಆಯುಕ್ತ ಮಂಜುನಾಥಸ್ವಾಮಿ, ಇನ್ನೂ ಮುಂತಾದವರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
