ಹಿರಿಯೂರು :
ನಗರಸಭೆ ಚುನಾವಣೆಯಲ್ಲಿ ಮತದಾರರ ಮನವೊಲಿಸುವ ಪ್ರಯತ್ನವನ್ನು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಯಶಸ್ವಿಯಾಗಿ ಮಾಡಬೇಕು. ದೇಶದಲ್ಲಿ ನರೇಂದ್ರಮೋದಿಯವರ ಆಡಳಿತ ನೀಡಿದ ಕೊಡುಗೆಯ ಬಗ್ಗೆ ತಿಳಿಸಬೇಕು. ನಗರದ ಅಭಿವೃದ್ಧಿಗಾಗಿ ಬಿಜೆಪಿ ಪರಮತ ಹಾಕುವಂತೆ ಜನರಲ್ಲಿ ಮನವಿ ಮಾಡಬೇಕು ಎಂಬುದಾಗಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹೇಳಿದರು.
ನಗರದ ಬಿಜೆಪಿ ಕಚೇರಿಯಲ್ಲಿ ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಅಭ್ಯರ್ಥಿಗಳ ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.ಪ್ರತಿ ಮತಗಟ್ಟೆ ಬಳಿ ಕಾರ್ಯಕರ್ತರಿದ್ದು, ಬಿಜೆಪಿ ಅಭ್ಯರ್ಥಿಗಳಿಗೆ ಹೆಚ್ಚು ಮತ ಹಾಕಿಸುವಂತಹ ಕೆಲಸ ಮಾಡಬೇಕು. ನಗರಸಭೆ ಚುನಾವಣೆಯಲ್ಲಿ ಅತಿಹೆಚ್ಚಿನ ಸ್ಥಾನವನ್ನು ಗೆದ್ದು, ಅಧಿಕಾರ ನಡೆಸುವಂತಾಗಬೇಕು ಎಂದು ಕರೆ ನೀಡಿದರು.
ಬಿಜೆಪಿ ರಾಜ್ಯ ಒಬಿಸಿ ಮೋರ್ಚಾ ಉಪಾಧ್ಯಕ್ಷ ಡಿ.ಟಿ.ಶ್ರೀನಿವಾಸ್ ಮಾತನಾಡಿ, ವಿರೋಧ ಪಕ್ಷಗಳ ಅಭ್ಯರ್ಥಿಗಳ ಕಾರ್ಯಕರ್ತರ ಚಲನವಲನದ ಬಗ್ಗೆ ನಿಗಾ ಇಟ್ಟಿರಬೇಕು. ಅಕ್ರಮಗಳಿಗೆ ಅವಕಾಶ ನೀಡದೇ ಅನವಶ್ಯಕ ಸಮಸ್ಯೆಗಳನ್ನು ತಂದುಕೊಳ್ಳದೇ ಪ್ರಚಾರಮಾಡಿ, ಗೆಲುವಿಗೆ ಶ್ರಮಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಬಿಜೆಪಿ ಅಧ್ಯಕ್ಷ ದ್ಯಾಮೇಗೌಡ, ತಾಲ್ಲೂಕು ಪಂಚಾಯತ್ ಸದಸ್ಯ ಬಬ್ಬೂರು ಯಶವಂತ್, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
