ಚಿತ್ರದುರ್ಗ
ನೊವೆಲ್ ಕೊರೋನಾ ವೈರಸ್ ತಡೆಗಟ್ಟಲು ಪ್ರತಿಯೊಬ್ಬರು ತಮ್ಮ ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಸ್ವಚ್ಛ ಕೈಗಳು ಕೊರೋನಾ ವೈರಸ್ ನಿಯಂತ್ರಣದ ಮದ್ದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಿ.ಎಂ.ವಿಶಾಲಾಕ್ಷಿ ನಟರಾಜ್ ಸಲಹೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸೋಮವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಸರ್ಕಾರಿ, ಖಾಸಗಿ ವೈದ್ಯರಿಗೆ ಹಾಗೂ ಇತರೆ ಇಲಾಖಾ ಅಧಿಕಾರಿಗಳಿಗೆ ನೊವೆಲ್ ಕೊರೋನ ವೈರಸ್ ಕುರಿತು ಅರಿವು ಮೂಡಿಸುವ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೊರೋನಾ ಚೀನಾ ದೇಶದಿಂದ ಎಲ್ಲೆಡೆ ಹರಡಿದ ವೈರಸ್ ಆಗಿದ್ದು, ಜಿಲ್ಲೆಯಲ್ಲಿ ಕೊರೋನಾ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಜಾಗೃತಿ ಮೂಡಿಸಲು ಕಾರ್ಯಾಗಾರ ಏರ್ಪಡಿಸಲಾಗಿದೆ. ಸರ್ಕಾರಿ, ಖಾಸಗಿ ವೈದ್ಯರು, ಇತರೆ ಇಲಾಖೆಯ ಅಧಿಕಾರಿಗಳು ಇದರ ಸದಪಯೋಗ ಪಡೆದುಕೊಳ್ಳಬೇಕು ಎಂದರು.
ಹೆಚ್ಚು ಜನದಟ್ಟಣೆ ಇರುವ ಪ್ರದೇಶಗಳಾದ ಬಸ್ ನಿಲ್ದಾಣ, ರೈಲ್ವೆಸ್ಟೇಷನ್, ಸಂತೆ ಇತ್ಯಾದಿ ಸ್ಥಳಗಳಲ್ಲಿ ಜನರು ಹೆಚ್ಚಿನ ಪ್ರಮಾಣದಲ್ಲಿ ಸಂಚಾರ ಮಾಡುತ್ತಾರೆ. ಇಂತಹ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ತಂಡಗಳನ್ನು ರಚನೆ ಮಾಡಬೇಕು. ಗ್ರಾಮೀಣ ಪ್ರದೇಶಗಳ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ತಾಲ್ಲೂಕಿನ ತಾಲ್ಲೂಕು ಆರೋಗ್ಯ ಕೇಂದ್ರಗಳಲ್ಲಿ ಕೊರೋನಾ ವೈರಸ್ ತಡೆಗಟ್ಟಲು ಮುಂಜಾಗ್ರತಾ ಕ್ರಮಗಳ ಕುರಿತು ಅರಿವು ಮೂಡಿಸಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಡಾ.ಕೆ.ಅನಂತ್ ಮಾತನಾಡಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯಿಂದ ಸುಮಾರು ದಿನಗಳಿಂದ ಕೊರೋನಾ ವೈರಸ್ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಗ್ರಾಮೀಣ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಕೊರೋನಾ ವೈರಸ್ ಕುರಿತು ಹೆಚ್ಚಿನ ಪ್ರಮಾಣದಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದರು.
ಭಾರತೀಯರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿದ್ದು, ಕೊರೋನಾ ವೈರಸ್ ಹೆಚ್ಚಿನದಾಗಿ ಭಾದಿಸದು. ಸಾಮಾಜಿಕ ಜಾಲತಾಣಗಳಲ್ಲಿ ಜನರಿಗೆ ಭಯ ಪಡಿಸುವ ಸಂದೇಶಗಳು ಹೆಚ್ಚು ಹರಿದಾಡುತ್ತಿವೆ. ಇಂತಹ ಕಾರ್ಯಾಗಾರಗಳ ಮೂಲಕ ಜನರ ಭಯವನ್ನು ಹೋಗಲಾಡಿಸಿ ಅವರಿಗೆ ಧೈರ್ಯ ತುಂಬುವ ಕೆಲಸವಾಗಬೇಕು ಎಂದು ಹೇಳಿದರು.
ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಪ್ರಾಥಮಿಕ ಆರೋಗ್ಯದ ಕೇಂದ್ರದ ವೈದ್ಯಾಧಿಕಾರಿಗಳು ಗ್ರಾಮೀಣ ಜನರ ಭಯವನ್ನು ನಿವಾರಿಸಿ, ಈ ವೈರಸ್‍ನ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಬೇಕು. ಇದರ ಜೊತೆಗೆ ಈ ವೈರಸ್‍ನಿಂದ ಹೇಗೆ ರಕ್ಷಿಸಿಕೊಳ್ಳಬೇಕು, ಮುಂಜಾಗ್ರತಾ ಕ್ರಮಗಳೇನು ಎಂಬುದರ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಮಾತನಾಡಿ, ಜಿಲ್ಲೆಯಲ್ಲಿ ಕೊರೋನಾ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ. ಈ ರೋಗದಿಂದ ಹೊರಬರಲು ಮುಂಜಾಗ್ರತಾ ಕ್ರಮ ಅಗತ್ಯ. ಈ ಕುರಿತು ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತೆಗಳು, ನಗರಸಭೆ, ತಹಶೀಲ್ದಾರ್ ಕಚೇರಿ, ತಾಲ್ಲೂಕು ಪಂಚಾಯತ್ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಬೇಕು. ಯಾವುದೇ ಪ್ರಕರಣ ದಾಖಲಾದಲ್ಲಿ, ವಿದೇಶದಿಂದ ಯಾರಾದರೂ ಆಗಮಿಸಿದ್ದಲ್ಲಿ ಕೂಡಲೇ ಜಿಲ್ಲಾಡಳಿತದ ಗಮನಕ್ಕೆ ತರಬೇಕು ಎಂದರು
ಜಿಲ್ಲಾಸ್ಪತ್ರೆಯಲ್ಲಿ ಈಗಾಗಲೇ 05 ಹಾಸಿಗೆ ಹೊಂದಿರುವ ಐಸೋಲೆಟೆಡ್ ವಾರ್ಡ್ ಹಾಗೂ ಬಸವೇಶ್ವರ ಆಸ್ಪತ್ರೆಯಲ್ಲಿ 15 ಹಾಸಿಗೆಯ ಐಸೋಲೆಟೆಡ್ ವಾರ್ಡ್ ತೆರೆಯಲಾಗಿದೆ. ಜಿಲ್ಲೆಯ ಬಸ್‍ನಿಲ್ದಾಣ, ರೈಲ್ವೆನಿಲ್ದಾಣಗಳಲ್ಲಿ ಒಂದು ತಂಡ ರಚಿಸಿ ಆ ಮೂಲಕ ವರದಿ ತಯಾರಿಸಲಾಗುತ್ತಿದೆ. ಕೊರೋನಾ ಕುರಿತು ಯಾವುದೇ ಭಯ ಪಡುವ ಅಗತ್ಯವಿಲ್ಲ. ನಮ್ಮ ಸ್ವಚ್ಛತೆಯಿಂದ ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟಬಹುದು. ಈ ಕುರಿತು ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅಗತ್ಯವಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಫಾಲಾಕ್ಷ ಮಾತನಾಡಿ, ಜಿಲ್ಲೆಯಲ್ಲಿ ಇದುವರೆಗೆ ಕೊರೋನಾ ಸೋಂಕಿನ ಯಾವುದೇ ಪ್ರಕರಣ ವರದಿಯಾಗಿಲ್ಲ. ಆದರೆ ಜಿಲ್ಲೆಯ ಜನರು ಹೆಚ್ಚು ಭಯಭೀತರಾಗಿದ್ದಾರೆ. ಹಾಗಾಗಿ ಜಾಗೃತಿ ಮೂಡಿಸಲು ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದರು.
ಕೊರೋನಾ ವೈರಸ್ ಯಾವ ರೀತಿ ಹರಡುತ್ತದೆ. ಅದರ ಲಕ್ಷಣಗಳೇನು? ಇದನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಯಾವುವು ಎಂಬುದು ಸೇರಿದಂತೆ ಮುಂತಾದ ಸಂಪೂರ್ಣ ಮಾಹಿತಿ ಜಾಗೃತಿ ಮೂಡಿಸುವ ಕಾರ್ಯಾಗಾರಗಳಿಂದ ದೊರೆಯುತ್ತದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಪ್ಯಾರಾ ಮೆಡಿಕಲ್ ಸಿಬ್ಬಂದಿಗೆ ಈಗಾಗಲೇ ತರಬೇತಿ ನೀಡಲಾಗಿದೆ ಎಂದು ಹೇಳಿದರು. ಜಿಲ್ಲಾಡಳಿತದ ವತಿಯಿಂದ ಜಿಲ್ಲೆಯಲ್ಲಿ ಕೊರೋನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲಾಗಿದೆ ಎಂದು ಹೇಳಿದರು.
ಕಾರ್ಯಾಗಾರದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಹೆಚ್.ಜೆ.ಬಸವರಾಜಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ವಿಶ್ವನಾಥ್, ಬಸವೇಶ್ವರ ವೈದ್ಯಕೀಯ ಆಸ್ಪತ್ರೆಯ ಅಧೀಕ್ಷಕ ಡಾ.ಫಾಲಾಕ್ಷಯ್ಯ, ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ದೀಪಕ್, ಖಾಸಗಿ ವೈದ್ಯರ ಸಂಘದ ಅಧ್ಯಕ್ಷ ಡಾ.ಶ್ರೀಧರ್, ಸಂಪನ್ಮೂಲ ವ್ಯಕ್ತಿಗಳಾದ ಡಾ.ಶ್ರೀಧರ್, ಡಾ.ಪ್ರಕಾಶ್, ಡಾ.ರುದ್ರೇಶ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸರ್ಕಾರಿ, ಖಾಸಗಿ ವೈದ್ಯರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ