ಶಿರಾ
ಅತ್ಯಂತ ಕಡುಬಡ ಕುಟುಂಬಗಳಿಗೆ ಕೇಂದ್ರ ಸರ್ಕಾರವು ಉಚಿತ ಗ್ಯಾಸ್ ವಿತರಣೆಯೂ ಸೇರಿದಂತೆ ನಾನಾ ಯೋಜನೆಗಳನ್ನು ಜಾರಿಗೆ ತಂದು ಅನುಷ್ಠಾನಗೊಳಿಸಿದ್ದು ಬಿ.ಜೆ.ಪಿ. ಪಕ್ಷದ ಕಾರ್ಯಕರ್ತರು ಅಂತಹ ಯೋಜನೆಗಳ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸುವ ಮೂಲಕ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕಿದೆ ಎಂದು ಚಿತ್ರದುರ್ಗ ಲೋಕಸಭಾ ಬಿ.ಜೆ.ಪಿ. ಪಕ್ಷದ ಉಸ್ತುವಾರಿ ನರೇಂದ್ರನಾಥ್ ತಿಳಿಸಿದರು.
ನಗರದ ಶ್ರೀ ಗುರು ರೇವಣಸಿದ್ದೇಶ್ವರಸ್ವಾಮಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಬಿ.ಜೆ.ಪಿ. ಪಕ್ಷದ ವತಿಯಿಂದ ನಡೆದ ಪಕ್ಷದಬೂತ್ ಮಟ್ಟದ ಪ್ರಮುಖರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಳೆದ ನಾಲ್ಕು ವರ್ಷಗಳಿಂದ ಕೇಂದ್ರ ಸರ್ಕಾರ ಜಾರಿಗೆ ತಂದ ಅನೇಕ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ಪಕ್ಷದ ಕಾರ್ಯಕರ್ತರು ಸುಮ್ಮನೇ ಕೂತರೆ ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆ ತಲುಪಿದಂತಾಗುತ್ತವೆ ಎಂದರು.
ಚಿತ್ರದುರ್ಗ ಲೋಕಸಭಾ ಚುನಾವಣೆಯಲ್ಲಿ ಬಿ.ಜೆ.ಪಿ. ಪಕ್ಷದ ಅಭ್ಯರ್ಥಿಯ ಗೆಲುವಿಗೆ ಪಕ್ಷದ ಕಾರ್ಯಕರ್ತ-ಮುಖಂಡರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕಿದೆ. ಈಗಾಗಲೇ ಬೂತ್‍ಮಟ್ಟದ ಅನೇಕ ಸಭೆಗಳನ್ನೂ ಕೈಗೊಳ್ಳಲಾಗಿದೆ ಎಂದು ನರೇಂದ್ರನಾಥ್ ತಿಳಿಸಿದರು.
ಜಿಲ್ಲಾ ಬಿ.ಜೆ.ಪಿ. ಉಪಾಧ್ಯಕ್ಷ ಬಿ.ಕೆ.ಮಂಜುನಾಥ್, ವಿಭಾಗ ವಿಸ್ತಾರಕ್ ಉಮೇಶ್, ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಎಸ್.ಆರ್.ಗೌಡ, ತಾ.ಬಿ.ಜೆ.ಪಿ. ಅಧ್ಯಕ್ಷ ಮಾಲಿ ಮರಿಯಪ್ಪ, ನಗರ ಘಟಕದ ಅಧ್ಯಕ್ಷ ಬಿ.ಗೋವಿಂದಪ್ಪ, ಬರಗೂರು ತಿಪ್ಪೇಸ್ವಾಮಿ, ತರೂರು ಬಸವರಾಜು, ತಾ.ಪಂ. ಉಪಾಧ್ಯಕ್ಷ ರಂಗನಾಥಗೌಡ, ನಿಡಗಟ್ಟೆ ಚಂದ್ರಶೇಖರ್, ಲಕ್ಷ್ಮೀನಾರಾಯಣ್, ವಿಜಯರಾಜ್, ರಂಗಸ್ವಾಮಿ, ಕೃಷ್ಣಮೂರ್ತಿ ಮುಂತಾದವರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
