ಕೇಂದ್ರ ಸರ್ಕಾರದ ಸಾಧನೆಗಳು ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಕಾರಣವಾಗಲಿವೆ

ಶಿರಾ

        ದೇಶದ ಅಭಿವೃದ್ಧಿಯ ನಿಟ್ಟಿನಲ್ಲಿ ಕಳೆದ ಐದು ವರ್ಷಗಳಲ್ಲಿ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಹತ್ತು ಹಲವು ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ಯುವ ಜನತೆಯ ಮನ ಗೆದ್ದಿದ್ದು, ರಾಜ್ಯದಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳಲ್ಲೂ ಬಿಜೆಪಿ ತನ್ನ ಗೆಲುವನ್ನು ಬಾಚಿಕೊಳ್ಳಲಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬಿ.ಕೆ.ಮಂಜುನಾಥ್ ಹೇಳಿದರು.

       ತಾಲ್ಲೂಕಿನ ಕಳ್ಳಂಬೆಳ್ಳ ಹೋಬಳಿಯ ದೊಡ್ಡ ಆಲದ ಮರದ ಬಳಿ ಗುರುವಾರ ನಡೆದ ಬಿ.ಜೆ.ಪಿ. ಪಕ್ಷದ ಚುನಾವಣಾ ಪ್ರಚಾರದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

         ಲೋಕಸಭಾ ಚುನಾವಣಾ ಪ್ರಕ್ರಿಯೆ ಆರಂಭಗೊಂಡಾಗಿನಿಂದಲೂ ಚಿತ್ರದುರ್ಗ ಲೋಕಸಭಾ ವ್ಯಾಪ್ತಿಗೆ ಬರುವ ಶಿರಾ ಭಾಗದ ಗ್ರಾಮಾಂತರ ಪ್ರದೇಶಗಳಿಗೆ ಭೇಟಿ ನೀಡಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರ ಸಭೆ ನಡೆಸಲಾಗಿದೆ. ಕಳೆದ ಸಂಸತ್ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಪರಾಭವಗೊಂಡಿದ್ದರೂ ಪಕ್ಷದ ಕಾರ್ಯಕರ್ತರು ತಮ್ಮ ಹುರುಪನ್ನು ಕಳೆದುಕೊಂಡಿಲ್ಲ. ಪಕ್ಷದ ಅಭ್ಯರ್ಥಿ ನಾರಾಯಣಸ್ವಾಮಿಯ ಪರವಾಗಿ ಎಲ್ಲರೂ ಕ್ರಿಯಾಶೀಲಾಗಿ ಪ್ರಚಾರದಲ್ಲಿ ತೊಡಗಿದ್ದೇವೆ ಎಂದರು.

         ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಎಸ್.ಆರ್.ಗೌಡ ಮಾತನಾಡಿ, ಕೇಂದ್ರಲ್ಲಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವ ಸಲುವಾಗಿ ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು ಒಗ್ಗೂಡಿ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸ ಮಾಡುತ್ತಿದ್ದೇವೆ. ನಮ್ಮ ಅಭ್ಯರ್ಥಿಯ ಗೆಲುವಿಗೆ ಕೇಂದ್ರದ ಯೋಜನೆಗಳು ಕಾರಣವಾಗುವುದರ ಜೊತೆಗೆ ಅಭ್ಯರ್ಥಿ ನಾರಾಯಣಸ್ವಾಮಿ ಓರ್ವ ಸರಳ, ಸಜ್ಜನರೂ ಆಗಿದ್ದು ಪಕ್ಷದ ಅಭ್ಯರ್ಥಿಯ ಗೆಲುವು ಖಚಿತ ಎಂದರು.
 

       ಚಿತ್ರದುರ್ಗ ಕ್ಷೇತ್ರದ ಬಿ.ಜೆ.ಪಿ. ಅಭ್ಯರ್ಥಿ ನಾರಾಯಣಸ್ವಾಮಿ, ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಮಾಲಿ ಮರಿಯಪ್ಪ, ಬರಗೂರು ತಿಪ್ಪೆಸ್ವಾಮಿ, ತಾ.ಪಂ. ಉಪಾಧ್ಯಕ್ಷ ರಂಗನಾಥಗೌಡ, ರಂಗಸ್ವಾಮಿ, ಪರಮೇಶಯ್ಯ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಸಮಾರಂಭದಲ್ಲಿ ಹಾಜರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link