ಬೆಂಗಳೂರು
ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉಡುಪಿಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳೂರಿನಲ್ಲಿ ನದಿ, ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಕೆಲವೆಡೆ ಭೂ ಕುಸಿತ ಸಂಭವಿಸಿರುವ ವರದಿಯಾಗಿದೆ.
ಉಡುಪಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿದ ಪರಿಣಾಮ ಪ್ರವಾಹ ಪರಿಸ್ಥಿತಿ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರಿಗೆ ಕರೆ ಮಾಡಿ ಜನ, ಜಾನುವಾರುಗಳ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಇದಲ್ಲದೆ ವಿವಿಧ ಜಿಲ್ಲೆಗಳಲ್ಲೂ ಪ್ರವಾಹ ಪರಿಸ್ಥಿತಿ ಕಂಡು ಬಂದಿರುವ ಹಿನ್ನೆಲೆಯಲ್ಲಿ ಮಾಹಿತಿ ಪಡೆದಿರುವ ಯಡಿಯೂರಪ್ಪ ಅವರು, ಪ್ರಮುಖವಾಗಿ ಬೆಂಗಳೂರು ನಗರದಲ್ಲಿ ಮಳೆಯಿಂದ ಉಂಟಾಗುವ ಹಾನಿ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತ ಅವರಿಗೆ ಸೂಚಿಸಿದ್ದಾರೆ. ರಾಜ ಕಾಲುವೆ, ತಗ್ಗು ಪ್ರದೇಶಗಳಲ್ಲಿನ ಬಡಾವಣೆಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಮಳೆ ಅನಾಹುತ ತಪ್ಪಿಸಲು ಬಿಬಿಎಂಪಿ ಅಧಿಕಾರಿಗಳ ತಂಡ ಸರ್ವಸನ್ನದ್ದವಾಗಿರಬೇಕೆಂದು ಆದೇಶಿಸಿದ್ದಾರೆ.
ಈ ಮಧ್ಯೆ ಉಡುಪಿ ಜಿಲ್ಲೆಯಲ್ಲಿ ತೊಂದರೆಗೆ ಸಿಲುಕಿರುವ ಜನರನ್ನು ರಕ್ಷಿಸಲು ಅಗತ್ಯ ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ಜಲಾವೃತಗೊಂಡಿರುವ ಗ್ರಾಮಗಳಲ್ಲಿ ಜನರ ರಕ್ಷಣೆಗಾಗಿ ತಕ್ಷಣ ರಾಜ್ಯ ವಿಪತ್ತು ನಿರ್ವಹಣಾ ತಂಡದ ಒಂದು ಪಡೆಯ ಸುಮಾರು 250 ಸದಸ್ಯರನ್ನು ಕಳೆದ ರಾತ್ರಿ ಉಡುಪಿಗೆ ಕಳುಹಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಈಗಾಗಲೇ 200 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಜಿಲ್ಲಾಮಟ್ಟದ ಅಧಿಕಾರಿಗಳ ತಂಡ ಪರಿಹಾರ ಕಾರ್ಯದಲ್ಲಿ ನಿರತವಾಗಿದ್ದು, ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಪ್ರವಾಹ ಪರಿಸ್ಥಿತಿ ಕುರಿತು ಕಂದಾಯ ಸಚಿವ ಆರ್.ಅಶೋಕ್ ಜೊತೆ ಮಾತನಾಡಿದ್ದು, ರಕ್ಷಣಾ ಇಲಾಖೆಯ ಒಂದು ಹೆಲಿಕಾಪ್ಟರ್‍ನ್ನು ತಕ್ಷಣವೇ ಉಡುಪಿಗೆ ಕಳುಹಿಸುವಂತೆ ಕೋರಲಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಮಳೆಯಾಗುತ್ತಿದ್ದು, ನಡುಗಡ್ಡೆ ಮತ್ತು ಪ್ರವಾಹ ಸಂತ್ರಸ್ತ ಪ್ರದೇಶಗಳಿಂದ ಜನರ ರಕ್ಷಣೆಗೆ ಕಾರವಾರ ನೌಕಾನೆಲೆಯಿಂದ 2 ಹೆಲಿಕಾಪ್ಟರ್ ಸೇವೆ ಪಡೆಯುವ ಕುರಿತು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಜಲಪ್ರಳಯಕ್ಕೆ ತುತ್ತಾದ ಉಡುಪಿ ಜಿಲ್ಲೆಗೆ ದಕ್ಷಿಣ ಕನ್ನಡದಿಂದ ಎಸ್.ಡಿ.ಆರ್.ಎಫ್‍ನ ಒಂದು ತಂಡ ರವಾನೆ ಮಾಡುವಂತೆ ಸೂಚನೆ ನೀಡಲಾಗಿದೆ. ಜಲಪ್ರಳಯ ಪ್ರದೇಶಗಳ ಜನರ ಹಾಗೂ ಮೀನುಗಾರರ ರಕ್ಷಣೆಗೆ ಬೇಕಾದ ಎಲ್ಲ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.
ಚಿಕ್ಕಮಗಳೂರು ಜಿಲ್ಲೆಯಲ್ಲೂ ಭಾರಿ ಮಳೆಯಾಗುತ್ತಿದೆ. ಮೂಡಿಗೆರೆ, ಕೊಪ್ಪ, ಶೃಂಗೇರಿ, ಎನ್.ಆರ್.ಪುರ ತಾಲ್ಲೂಕುಗಳಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಇದರಿಂದಾಗಿ ರಸ್ತೆ ಸಂಪರ್ಕ ಮತ್ತು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ತುಂಗಾ ಹಾಗೂ ಭದ್ರಾ ನದಿಯಲ್ಲಿ ಕೂಡ ಒಳ ಹರಿವು ಹೆಚ್ಚಾಗಿದ್ದು, ಹೊರನಾಡು- ಕಳಸ ಸಂಪರ್ಕಿಸುವ ಭದ್ರಾ ನದಿಯ ಹೆಬ್ಬಾಲೆ ಸೇತುವೆ ಮುಳುಗಡೆಯಾಗಿದೆ. ಇದರಿಂದಾಗಿ ಧಾರ್ಮಿಕ ಕ್ಷೇತ್ರ ಹೊರನಾಡು ಭಾಗದ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಕೊಡಗು ಜಿಲ್ಲೆಯಲ್ಲೂ ಧಾರಾಕಾರ ಮಳೆ ಬೀಳುತ್ತಿದೆ. ಮಡಿಕೇರಿ ಸೇರಿದಂತೆ ಜಿಲ್ಲೆಯ ಹಲವೆಡೆÉ ರಾತ್ರಿಯಿಂದಲೇ ವ್ಯಾಪಕ ಮಳೆಯಾಗುತ್ತಿದೆ. ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ, ಸೋಮವಾರ ಬೆಳಗ್ಗೆವರೆಗೆ ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್, ಬಳಿಕ ಒಂದು ದಿನ ರೆಡ್ ಅಲರ್ಟ್ ಘೋಷಿಸಲಾಗಿದೆ.
ಹುಬ್ಬಳ್ಳಿ ನಗರವೂ ಸೇರಿದಂತೆ ಧಾರವಾಡ, ಗದಗ, ಬೆಳಗಾವಿ, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳ ವಿವಿಧೆಡೆ ಉತ್ತಮ ಮಳೆಯಾಗುತ್ತಿದೆ. ಶಿವಮೊಗ್ಗ, ದಾವಣಗೆರೆ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.
ಕೇರಳದ ವೈನಾಡು ಮತ್ತಿತರ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಜಲಾಶಯಕ್ಕೆ ಹೆಚ್ಚು ನೀರು ಹರಿದು ಬರುತ್ತಿದ್ದು, ಕಳೆದ ರಾತ್ರಿ ಏಕಾಏಕಿ ಹೊರಹರಿವು ಹೆಚ್ಚಿಸಿದ ಹಿನ್ನೆಲೆಯಲ್ಲಿ ಈ ಭಾಗದ ಜನರಲ್ಲಿ ತೀವ್ರ ಆತಂಕ ವ್ಯಕ್ತವಾಗಿತ್ತು.
ಅಧಿಕಾರಿಗಳು ಸೂಕ್ತ ಮಾಹಿತಿ ನೀಡದೆ ಏಕಾಏಕಿ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಆಣೆಕಟ್ಟು ಮುಂಭಾಗದಲ್ಲಿರುವ ಬಿದರಳ್ಳಿ ಸಂಪರ್ಕ ಸೇತುವೆ ಮುಳುಗಿತ್ತು. ವಾಹನ ಸವಾರರು ಸಹ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಮಧ್ಯೆ ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಉಂಟಾಗಿದ್ದು, ಸುರಕ್ಷಿತ ಸ್ಥಳಗಳಿಗೆ ತೆರಳಲು ಜನರಿಗೆ ಸೂಚಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








