ಚಳ್ಳಕೆರೆ
ಜಿಲ್ಲೆಯ ಜೀವನಾಡಿಯಾದ ಭದ್ರಾ ಮೇಲ್ದಂಡೆ ಯೋಜನೆ ಜಾರಿಗೆ ತರಲು ರಾಜ್ಯ ಸರ್ಕಾರ ಸಾರ್ವಜನಿಕರಿಗೆ ಸುಳ್ಳು ಮಾಹಿತಿಯನ್ನು ನೀಡದೆ ಪ್ರಾಮಾಣಿಕವಾಗಿ ಈ ಯೋಜನೆ ಅನುಷ್ಠಾನಗೊಳಿಸುವಲ್ಲಿ ಮುಂದಾಗಬೇಕು ಎಂದು ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಕೆ.ಎಂ.ನಾಗರಾಜು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಅವರು, ಗುರುವಾರ ನ್ಯಾಯಾಲಯದ ಕಾರ್ಯಕಲಾಪಗಳನ್ನು ಬಹಿಷ್ಕರಿಸಿ ಭದ್ರಾ ಮೇಲ್ದಂಡೆ ಯೋಜನೆ ಶೀಘ್ರದಲ್ಲೇ ಜಾರಿಯಾಗುವಂತೆ ಒತ್ತಾಯಿಸಿ ಪ್ರತಿಭಟನಾ ಮೆರವಣಿಗೆ ನಡೆಸಿ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಸರ್ಕಾರದ ವಿರುದ್ದ ಘೋಷಣೆ ಕೂಗಿದರು. ನಂತರ ತಾಲ್ಲೂಕು ಕಚೇರಿಗೆ ಆಗಮಿಸಿ ಶಿರಸ್ತೇದಾರ್ ಚಂದ್ರಶೇಖರ್‍ಗೆ ಮನವಿ ನೀಡಿ ಮಾತನಾಡಿದರು.
ಕಳೆದ ಹಲವಾರು ವರ್ಷಗಳಿಂದ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಅನುಷ್ಠಾನದ ಬಗ್ಗೆ ಸರ್ಕಾರ ಜನತೆಗೆ ಸುಳ್ಳು ಭರವಸೆಯನ್ನು ನೀಡುವ ಮೂಲಕ ರೈತರನ್ನು ತಪ್ಪುದಾರಿಗೆ ಎಳೆಯುತ್ತಿದೆ. ತಾಲ್ಲೂಕಿಗೆ ಸಮರ್ಥವಾಗಿ ಕುಡಿಯುವ ನೀರು, ರೈತರ ಜಮೀನುಗಳಿಗೆ ಉಪಯುಕ್ತವಾಗುವ ಭದ್ರಾ ಮೇಲ್ದಂಡೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸುವಲ್ಲಿ ವಿಳಂಬ ನೀತಿಯನ್ನು ಅನುಸರಿಸುತ್ತಿದೆ. ಆದ್ದರಿಂದ ಈ ಯೋಜನೆಗೆ ಅವಶ್ಯವಿರುವ ಹಣವನ್ನು ಬಿಡುಗಡೆಗೊಳಿಸಿ ಜನತೆಗೆ ನೀರಿನ ವ್ಯವಸ್ಥೆಯನ್ನು ಕಲ್ಪಿಸಿಕೊಡುವಂತೆ ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ಉಪಾಧ್ಯಕ್ಷ ಡಿ.ಬಿ.ಬೋರಯ್ಯ, ಪ್ರಧಾನ ಕಾರ್ಯದರ್ಶಿ ಕೆ.ಹನುಮಂತಪ್ಪ, ಡಿ.ಜಯಶೀಲರೆಡ್ಡಿ, ಗುರುಮೂರ್ತಿ, ಹಿರಿಯ ವಕೀಲ ಜಿ.ಶಣಪಯ್ಯ, ಪ್ರಭಾಕರ, ಕುರುಡಿಹಳ್ಳಿ ಶ್ರೀನಿವಾಸ್, ಎಂ.ಎಸ್.ವಿಶ್ವನಾಥ, ರಾಘವೇಂದ್ರನಾಯಕ, ಜಿ.ಒ.ಸುಮನ ಮುಂತಾದವರು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
