ದಾವಣಗೆರೆ:
ಮೊಬೈಲ್ ಎಂಬುದು ಮಹಾ ಮಾಯಜಾಲವಾಗಿದ್ದು, ಇದರ ಅತಿಯಾದ ಬಳಕೆಯಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುವ ಸಾಧ್ಯತೆ ಇದ್ದು, ಇದರಿಂದ ದೂರ ಉಳಿಯಬೇಕೆಂದು ಬಾಪೂಜಿ ದಂತ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕಿ ಡಾ.ರಾಜೇಶ್ವರಿ ಅಣ್ಣೀಗೆರೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ನಗರದ ಎ.ವಿ.ಕಮಲಮ್ಮ ಮಹಿಳಾ ಪದವಿ ಪೂರ್ವ ಕಾಲೇಜಿನ ಶ್ರೀಮತಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಸಭಾಂಗಣದಲ್ಲಿ ಬುಧವಾರ ನಡೆದ ಕಾಲೇಜಿನ 2018-19ನೇ ಸಾಲಿನ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಸಮಾರೋಪ ನುಡಿಗಳನ್ನಾಡಿದರು.
ಮೊಬೈಲ್ನಿಂದ ಒಳ್ಳೆಯ ಹಾಗೂ ಕೆಟ್ಟ ಪರಿಣಾಮಗಳೆರಡೂ ಇವೆ. ಆದರೆ, ಇತ್ತೀಚಿನ ಯುವಜನತೆ ಒಳ್ಳೆಯದಕ್ಕಿಂತ ಕೆಟ್ಟದನ್ನೇ ಹೆಚ್ಚಾಗಿ ಸ್ವೀಕರಿಸುತ್ತಿದ್ದಾರೆ. ಮೊಬೈಲ್ ಬಳಕೆಗೆ ವಿರೋಧವಿಲ್ಲ. ಅದಕ್ಕಾಗಿಯೇ ಇಂತಿಷ್ಟು ಸಮಯ ಎಂದು ನಿಗದಿ ಮಾಡಿಕೊಳ್ಳಬೇಕು. ಅದನ್ನು ಬಿಟ್ಟು ಇಡೀ ದಿನ ಮೊಬೈಲ್ನೊಂದಿಗೆ ಕಳೆಯುವುದು ಸರಿಯಲ್ಲ. ಇದರ ಬದಲು ಓದಿಗೆ ಹೆಚ್ಚು ಒತ್ತು ನೀಡಬೇಕೆಂದು ಸಲಹೆ ನೀಡಿದರು.
ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಬಂದರೆ, ಯಾವ ಕ್ಷೇತ್ರದಲ್ಲೂ ಮುಂದುವರೆಯಲು ಸಾಧ್ಯವಾಗಲಿದೆ. ಆದ್ದರಿಂದ ಶಾಲಾ-ಕಾಲೇಜುಗಳು ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ತುಂಬುವ ಕೆಲಸ ಮಾಡಬೇಕಿದೆ ಎಂದ ಅವರು, ಹೆಣ್ಣು ಮಕ್ಕಳಿಗೆ ವಿದ್ಯೆಯೇ ಆಸ್ತಿಯಾಗಿದ್ದು, ಮೊದಲು ನಿಮ್ಮಲ್ಲಿರುವ ಪ್ರತಿಭೆಯನ್ನು ಅರ್ಥ ಮಾಡಿಕೊಂಡು, ನಿಮ್ಮಲ್ಲಿರುವ ಕೀಳರಿಮೆಯನ್ನು ಮನಸ್ಸಿನಿಂದ ಕಿತ್ತು ಹಾಕಿ ಸಾಧನೆಗೈಯ್ಯಲು ಮುಂದಾಗಬೇಕೆಂದು ಕಿವಿಮಾತು ಹೇಳಿದರು.
ವಿದ್ಯಾರ್ಥಿ ಜೀವನದಲ್ಲಿ ಶ್ರದ್ದೆ, ಪರಿಶ್ರಮ ಮುಖ್ಯವಾಗಿದ್ದು, ಇವರೆಡನ್ನೂ ಜೀವನದಲ್ಲಿ ಅಳವಡಿಸಿಕೊಂಡರೆ ಯಶಸ್ಸು ಕಟ್ಟಿಟ್ಟ ಬುತ್ತಿಯಾಗಲಿದೆ. ಸಮಸ್ಯೆಗಳು ಎಲ್ಲರಿಗೂ ಇರುತ್ತವೆ. ಕಷ್ಟ ಪಟ್ಟು ಓದಿ ಪೋಷಕರಿಗೆ, ಶಾಲಾ ಕಾಲೇಜಿಗೆ ಒಳ್ಳೆಯ ಹೆಸರು ತರುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ .ಪಿ.ಎಸ್.ಶಿವಪ್ರಕಾಶ್, ಎವಿಕೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಜೆ.ಶಿವಪ್ಪ, ಪ್ರಾಧ್ಯಾಪಕರಾದ ಗೀತಾ, ಶಿವನಗೌಡ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ