ದಾವಣಗೆರೆ:
ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ಹಾಗೂ ಬಿಜೆಪಿಯ ವೈಫಲ್ಯವನ್ನು ಜನರಿಗೆ ಮನವರಿಕೆ ಮಾಡಿಕೊಡುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಸಂಘಟಿತ ಪ್ರಯತ್ನ ಮಾಡಬೇಕೆಂದು ದಾವಣಗೆರೆ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್ ಕರೆ ನೀಡಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಪಕ್ಷದ ಅಲ್ಪಸಂಖ್ಯಾತರ ಘಟಕದ ಸಭೆಯಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ಪಕ್ಷ 70 ವರ್ಷಗಳ ಕಾಲ ಜನಪರವಾದ ಆಡಳಿತ ನೀಡಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವಿದ್ದಾಗ ಅನ್ನಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಹಲವಾರು ಜನಪರ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ತತ್ವವನ್ನು ಪಾಲಿಸಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಳೆದ 3 ಬಾರಿ ಕಾಂಗ್ರೆಸ್ ಸೋತಿದೆ. ಹಿಂದೆ ಆಗಿರುವ ಲೋಪಗಳನ್ನು ಸರಿಪಡಿಸಿಕೊಂಡು ಈ ಬಾರಿ ಪಕ್ಷದ ಅಭ್ಯರ್ಥಿಯ ಗೆಲ್ಲಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಕಿವಿಮಾತು ಹೇಳಿದರು.
ಜಿಲ್ಲಾ ವಕ್ಫ್ ಮಂಡಳಿ ಅಧ್ಯಕ್ಷ ಸಿರಾಜ್ ಅಹಮದ್ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಅಲ್ಪಸಂಖ್ಯಾತರು ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು. ಸಭೆಯಲ್ಲಿ ಪಕ್ಷದ ವೀಕ್ಷಕ ಮಹಮದ್ ಆರೀಫ್, ಮುಖಂಡರಾದ ಆರೀಫ್ ಖಾನ್, ಜಾಕೀರ್, ಮುಮ್ತಾಜ್, ಷೇಕ್ ಅಹಮದ್, ದಾದಾಪೀರ್ ಮತ್ತಿತರರು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ