ಚಿತ್ರದುರ್ಗ
ಐದು ವರ್ಷದೊಳಗಿನ ಮಕ್ಕಳ ಆರೋಗ್ಯ ರಕ್ಷಣೆಗಾಗಿ ಎಲ್ಲಾ ಮಕ್ಕಳಿಗೂ ಓಆರ್‍ಎಸ್ ಹಾಗೂ ಜಿಂಕ್ ಮಾತ್ರೆಗಳನ್ನು ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿಯು ಜೂನ್ 17 ರ ವರೆಗೆ ವಿತರಣೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ತಿಳಿಸಿದರು.
ಚಿತ್ರದುರ್ಗ ತಾಲ್ಲೂಕಿನ ಪಂಡರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯಿಂದ ಏರ್ಪಡಿಸಲಾದ ತೀವ್ರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮಕ್ಕೆ ಮಕ್ಕಳಿಗೆ ಓಆರ್‍ಎಸ್ ಹಾಗೂ ಜಿಂಕ್ ಮಾತ್ರೆ ವಿತರಣೆ ಮಾಡಿ ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಅನೇಕ ಜಾಗೃತಿ ಕಾರ್ಯಕ್ರಮಗಳು ಜಿಲ್ಲಾ ಕೇಂದ್ರದಲ್ಲಿ ಚಾಲನೆ ಹಾಗೂ ಉದ್ಘಾಟನೆಯಾಗುತ್ತವೆ, ಆದರೆ ಇಂತಹ ಅರಿವು ಕಾರ್ಯಕ್ರಮಗಳನ್ನು ಗ್ರಾಮೀಣ ಭಾಗದಲ್ಲಿ ಆಯೋಜಿಸುವುದರಿಂದ ಜನರಿಗೆ ಹೆಚ್ಚಿನ ಅರಿವು ಮೂಡಲಿದ್ದು ಉದ್ದೇಶಿತ ಗುರಿ ತಲುಪಲು ಸಾಧ್ಯವಾಗಲಿದೆ. ಹುಟ್ಟಿನಿಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಮುಂಜಾಗ್ರತಾ ಕ್ರಮವಾಗಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಓಆರ್‍ಎಸ್ ಮತ್ತು ಜಿಂಕ್ ಮಾತ್ರಗಳನ್ನು ವಿತರಣೆ ಮಾಡಲಾಗುತ್ತದೆ.
ಆದ್ದರಿಂದ ಎಲ್ಲಾ ತಾಯಂದಿರುಗಳು ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಸೇರಿದಂತೆ ಜಿಲ್ಲಾ ಆಸ್ಪತ್ರೆಯಲ್ಲಿ ಲಭ್ಯವಿರುವ ವಿಶೇಷ ಕೌಂಟರ್‍ನಲ್ಲಿ ಈ ಪಾಕ್ಷಿಕದ ಅವಧಿಯಲ್ಲಿ ಓಆರ್‍ಎಸ್‍ನಿಂದ ತಯಾರಿಸಿದ ದ್ರಾವಣ ಮತ್ತು ಜಿಂಕ್ ಮಾತ್ರಗಳನ್ನು ಪಡೆದು ಮಕ್ಕಳಿಗೆ ನೀಡಲು ತಿಳಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಜಾನುಕೊಂಡ ಗ್ರಾಮ ಮತ್ತು ಪಂಚಾಯಿತಿಗೆ ಒಳಪಡುವ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರತರವಾಗಿದೆ. ತಾತ್ಕಾಲಿಕವಾಗಿ ಟ್ಯಾಂಕರ್‍ಗಳ ಮೂಲಕ ನೀರು ಪೂರೈಕೆಗೆ ಸೂಚಿಸಲಾಗಿದ್ದು ಮುಂದಿನ ದಿನಗಳಲ್ಲಿ ಶಾಶ್ವತವಾಗಿ ಕುಡಿಯುವ ನೀರನ್ನು ಶಾಂತಿಸಾಗರ ಯೋಜನೆಯ ಮೂಲಕ ಪೂರೈಕೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಮಳೆಗಾಲ ಆರಂಭವಾಗಿದ್ದು ತಮ್ಮ ಮನೆಗಳಲ್ಲಿ ಮಳೆ ನೀರನ್ನು ಸಂಗ್ರಹ ಮಾಡಿಕೊಳ್ಳಲು ಜನರು ಮುಂದಾಗಬೇಕು. ಮತ್ತು ಮಳೆ ನೀರನ್ನು ನಿಲ್ಲಿಸಿ ಮರುಪೂರಣ ಮಾಡುವ ಮೂಲಕ ಜಲಸಂರಕ್ಷಣೆಗೆ ಮುಂದಾಗಬೇಕೆಂದು ಮನವಿ ಮಾಡಿದರು.
ಜಿಲ್ಲಾ ಆರ್.ಸಿ.ಹೆಚ್.ಅಧಿಕಾರಿ ಡಾ; ಕುಮಾರಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ ಐದು ವರ್ಷದೊಳಗಿನ ಮಕ್ಕಳ ಮರಣ ಪ್ರಮಾಣ ಕಡಿಮೆ ಮಾಡಲು ಅತಿಸಾರ ಭೇದಿ ನಿಯಂತ್ರಣ ಮಾಡಬೇಕಾಗಿದೆ. ಆದ್ದರಿಂದ ಕಳೆದ ನಾಲ್ಕು ವರ್ಷಗಳಿಂದ ಈ ಬಗ್ಗೆ ಹೆಚ್ಚು ಜಾಗೃತಿ ಮೂಡಿಸುವ ಮೂಲಕ ತಾಯಂದಿರುಗಳಿಗೆ ಅತಿಸಾರ ಭೇದಿ ನಿಯಂತ್ರಣದ ಸುಲಭ ವಿಧಾನದ ಬಗ್ಗೆ ಮತ್ತು ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕೈ ಶುಚಿತ್ವದ ಕುರಿತು ಇದೇ ವೇಳೆ ಜಾಗೃತಿ ಮೂಡಿಸಲಾಗುತ್ತಿದೆ.
ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಓಆರ್‍ಎಸ್ ಮತ್ತು ಜಿಂಕ್ ಮಾತ್ರೆಗಳನ್ನು ವಿತರಣೆ ಮಾಡಲಾಗುತ್ತಿದೆ. ಇದಲ್ಲದೇ ಗ್ರಾಮೀಣ ಭಾಗದಲ್ಲಿನ ಆರೋಗ್ಯ ಸಮಿತಿಗಳಿಂದಲೂ ಜಾಗೃತಿ ಮೂಡಿಸಲಾಗುತ್ತದೆ. ಮತ್ತು 25 ಕ್ಕೂ ಹೆಚ್ಚು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಇದ್ದು ಇವುಗಳ ಬಗ್ಗೆಯೂ ಜಾಗೃತಿ ಮೂಡಿಸಲಾಗುತ್ತದೆ. ಮತ್ತು ಜನನದಿಂದ 9 ತಿಂಗಳವರೆಗೆ ಎಲ್ಲಾ ಮಕ್ಕಲಿಗೂ 9 ಲಸಿಕೆಯನ್ನು ಹಾಕಿಸಬೇಕು.
ಈ ಲಸಿಕೆಗಳಿಂದ ಯಾವುದೇ ಮಕ್ಕಳು ಬಿಟ್ಟುಹೋಗದಂತೆ ಆಶಾ, ಅಂಗನವಾಡಿ ಕಾರ್ಯಕರ್ತರ ಮೂಲಕ ಮನೆ ಮನೆ ಸಮೀಕ್ಷೆ ಮಾಡಿಸಲಾಗುತ್ತದೆ ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ; ಫಾಲಾಕ್ಷರವರು ಮಾತನಾಡಿ ಜಿಲ್ಲೆಯಲ್ಲಿ 5 ವರ್ಷದೊಳಗಿ 154954 ಮಕ್ಕಳಿಗೆ ಓಆರ್‍ಎಸ್ ಮತ್ತು ಜಿಂಕ್ ಮಾತ್ರೆಗಳನ್ನು ವಿತರಣೆ ಮಾಡಬೇಕೆಂದು ಗುರಿ ಹೊಂದಲಾಗಿದೆ ಎಂದು ತಿಳಿಸಿ ವೇದಿಕೆಯಲ್ಲಿದ್ದ ಎಲ್ಲಾ ಗಣ್ಯರನ್ನು ಸ್ವಾಗತಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ; ರೇಣುಪ್ರಸಾದ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ; ಅಕ್ಷತಾ, ವಾರ್ತಾಧಿಕಾರಿ ಧನಂಜಯ, ಗ್ರಾಮ ಪಂಚಾಯಿತಿ ಸದಸ್ಯರಾದ ನಿಜಲಿಂಗಪ್ಪ, ಆಸ್ಪತ್ರೆ ಕಟ್ಟಡ, ಜಮೀನು ದಾನಿ ಪಂಡರಹಳ್ಳಿ ಹೊನ್ನಪ್ಪ, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಸಮೀವುಲ್ಲಾ ಉಪಸ್ಥಿತರಿದ್ದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಮಂಜುನಾಥ್ ನಿರೂಪಿಸಿದರು. ಆರೋಗ್ಯ ಶಿಕ್ಷಣ ತರಬೇತುದಾರ ಮೂಗಪ್ಪ ಮತ್ತು ಆಶಾ ಕಾರ್ಯಕರ್ತೆಯರು ಕೈಶುಚಿತ್ವದ ಬಗ್ಗೆ ಪ್ರಾತ್ಯಕ್ಷಿತೆ ನಡೆಸಿಕೊಟ್ಟರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
