ಮಧುಗಿರಿ
ಪೋಷಕರು ಹಾಗೂ ವಿದ್ಯಾರ್ಥಿಗಳ ಅಭಿಪ್ರಾಯ ಪಡೆದ ನಂತರವೇ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ತೀರ್ಮಾನ ಮಾಡಲಾಯಿತು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ನಡೆಯುತ್ತಿರುವ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಗುರುವಾರ ದಿಡೀರ್ ಭೇಟಿ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಬಾರದು ಎಂದು ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ನಾವು ಕೈ ಗೊಂಡ ನಿರ್ಣಯದ ಬಗ್ಗೆ ಮಾಹಿತಿ ನೀಡಿದಾಗ ಕೋರ್ಟ್ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಸಿರು ನಿಶಾನೆ ತೋರಿದ ಬಳಿಕ, ಪೋಷಕರು ಹಾಗೂ ವಿದ್ಯಾರ್ಥಿಗಳು ಸರ್ಕಾರದ ಮೇಲೆ ನಂಬಿಕೆ ಇಟ್ಟು ಶೇ.98ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿರುವುದು ಸಂತಸ ತಂದಿದೆ ಎಂದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿರುವ ಕೇಂದ್ರಗಳು ವಿದ್ಯಾರ್ಥಿಗಳಿಗೆ ಸುರಕ್ಷತಾ ಕೇಂದ್ರಗಳಾಗಿವೆ. ಇದಕ್ಕೆ ಇಲಾಖೆಯ ಅಧಿಕಾರಿಗಳು ಸಂಪೂರ್ಣ ಸಹಕಾರ ನೀಡಿದ್ದು, ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ ಅವರು, ರಾಜ್ಯದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಯಾವುದೇ ತೀರ್ಮಾನಗಳನ್ನು ಕೈ ಗೊಂಡಿಲ್ಲ ಎಂದರು.
ಶಾಸಕ ಎಂ.ವಿ.ವೀರಭದ್ರಯ್ಯ , ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ , ಬಿಜೆಪಿ ಅಭ್ಯರ್ಥಿ ಚಿದಾನಂದ ಗೌಡ, ಡಿಡಿಪಿಐ ರೇವಣ್ಣಸಿದ್ದಪ್ಪ , ಬಿಇಒ ರಂಗಪ್ಪ, ಮುಖ್ಯ ಶಿಕ್ಷಕರಾದ ಕಮಲಾ ನಾಯಕ್, ಧನಂಜಯ ಪಾಟೀಲ್, ಸಿಪಿಐ ಸರ್ದಾರ್, ಪಿಎಸ್‍ಐ ಕಾಂತರಾಜು ಹಾಗೂ ಇನ್ನಿತರರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ