ದಾವಣಗೆರೆ:
ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರುಗಳ ಬಾಲಬುಡಕರಿಗಷ್ಟೇ ಸಚಿವ ಸ್ಥಾನ ನೀಡಲಾಗಿದೆ ಎಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸೋಮವಾರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರುಗಳ ಬಾಲಬುಡಕರಿಗಷ್ಟೇ ಸಚಿವ ಸ್ಥಾನ ನೀಡಲಾಗಿದ್ದು, ಇದೆಲ್ಲಾ ಬಹಳ ದಿನ ನಡೆಯುವುದಿಲ್ಲ ಎಂದು ಕಿಡಿಕಾರಿದ್ದಾರೆ.
ನಾನು ಸಿದ್ದರಾಮಯ್ಯ ಹಾಗೂ ವೇಣುಗೋಪಾಲ್ ಅವರುಗಳ ಬಾಲಬುಡಕನಲ್ಲ. ಹೀಗಾಗಿ ನನ್ನನ್ನು ಸಚಿವ ಸ್ಥಾನಕ್ಕೆ ಪರಿಗಣಿಸಿಲ್ಲ. ರಾಮಲಿಂಗಾರೆಡ್ಡಿ, ಬಿ.ಸಿ.ಪಾಟೀಲ್‍ಗೂ ಸಹ ಸಚಿವ ಸ್ಥಾನ ನೀಡಿಲ್ಲ. ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನ್ನೇ ಕಡೆಗಣಿಸಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನ ಆಪ್ತ ಬಳಗಕ್ಕಷ್ಟೇ ಸಚಿವ ಸ್ಥಾನ ನೀಡಲಾಗಿದೆ. ದುಡ್ಡಿದ್ದವರಿಗಷ್ಟೇ ಸಚಿವ ಸ್ಥಾನ ಸಿಕ್ಕಂತಾಗಿದೆ ಎಂದು ಆರೋಪಿಸಿದರು.
ಸದ್ಯದಲ್ಲೇ ರಾಮಲಿಂಗಾರೆಡ್ಡಿ ಸೇರಿದಂತೆ ಅನೇಕ ಪ್ರಮುಖ ನಾಯಕರು ಬೆಂಗಳೂರಿನಲ್ಲಿ ಸಭೆ ನಡೆಸಿ, ಆಗಿರುವ ಅನ್ಯಾಯವನ್ನು ಖಂಡಿಸುತ್ತೇವೆ. ಅಲ್ಲದೆ, ಹಿರಿಯ ಮುಖಂಡರೊಡನೆ ಚರ್ಚಿಸಲಿದ್ದೇವೆ. ನನಗೆ ಸಚಿವ ಸ್ಥಾನವೇ ಬೇಡ, ಅದರ ಅಪ್ಪನಂತೆಯೇ ನಾನಿದ್ದೇನೆ ಎಂದರು.
ಸಂಪುಟ ವಿಸ್ತರಣೆಯಲ್ಲಿ ಅವಕಾಶ ವಂಚಿತ ಶಾಸಕರ್ಯಾರೂ ನನ್ನನ್ನು ಸಂಪರ್ಕಿಸಿಲ್ಲ. ಸಂಪುಟ ವಿಸ್ತರಣೆಯಲ್ಲಿ ಆಗಿರುವ ಅನ್ಯಾಯದ ಬಗ್ಗೆ ಧ್ವನಿ ಎತ್ತುತ್ತೇವೆ. ಸಚಿವ ಸ್ಥಾನ ನೀಡುವಂತೆ ನಾನು ಯಾರ ಬಳಿಯೂ ಭಿಕ್ಷೆ ಕೇಳಿಲ್ಲ. ಯಾರ ಮನೆ ಬಾಗಿಲಿಗೂ ಹೋಗಿಲ್ಲ. ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ ಮುಕ್ತಾಯವಾಯಿತು ಅಂದುಕೊಂಡಿದ್ದೆ. ಆದರೆ, ಅದಕ್ಕೆ ಮರು ಜೀವ ನೀಡುವ ಕೆಲಸವೂ ನಡೆದಿದೆ. ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಆಪ್ತನೆಂದೇ ಗುರುತಿಸಿಕೊಂಡ ಎಂ.ಬಿ.ಪಾಟೀಲ್‍ಗೆ ಸಚಿವ ಸ್ಥಾನ ನೀಡುವ ಮೂಲಕ ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರವನ್ನು ಜೀವಂತವಾಗಿಡುವ ಹುನ್ನಾರ ನಡೆಸಲಾಗಿದೆ ಎಂದು ಆರೋಪಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ