ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ದಾವಣಗೆರೆ:

    ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡಕ್ಕೆ ಶಿಕ್ಷಣ, ಉದ್ಯೋಗ ಕ್ಷೇತ್ರಗಳಲ್ಲೂ ಶೇ.7.5 ರಷ್ಟು ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ, ಜಿಲ್ಲಾ ವಾಲ್ಮೀಕಿ ನಾಯಕ ಸಂಘ, ತಾಲೂಕು ಸಂಘ, ಮಹಿಳಾ ಸಂಘಗಳ ನೇತೃತ್ವದಲ್ಲಿ ಗುರುವಾರ ನಗರದಲ್ಲಿ ನಾಯಕ ಸಮಾಜ ಬಾಂಧವರು ಬೃಹತ್ ಪ್ರತಿಭಟನೆ ನಡೆಸಿದರು.

     ನಗರದ ನಾಯಕ ಹಾಸ್ಟೆಲ್ ಆವರಣದಿಂದ ಪ್ರತಿಭಟನಾ ಮೆರವಣಿಗೆ ಹೊರಟ ನಾಯಕ ಸಮಾಜ ಬಾಂಧವರು, ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಬಾಬಾ ಸಾಹೇಬ್‍ರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಎಸಿ ಕಚೇರಿಗೆ ತೆರಳಿ ಉಪ ವಿಭಾಗಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

      ಈ ಸಂದರ್ಭದಲ್ಲಿ ಮಾತನಾಡಿದ ನಾಯಕ ಹಾಸ್ಟೆಲ್ ಅಧ್ಯಕ್ಷ ಬಿ.ವೀರಣ್ಣ, 2011ರ ಜಾತಿ ಗಣತಿಯ ಪ್ರಕಾರ ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ಜನಸಂಖ್ಯೆ 42.50 ಲಕ್ಷವಿದ್ದು, ರಾಜ್ಯದಲ್ಲಿ ನಮ್ಮದು 6ನೇ ದೊಡ್ಡ ಸಮುದಾಯವಾಗಿದೆ. ಆದರೂ, ರಾಜ್ಯ ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಶೇ.7.5ರಷ್ಟು ಮೀಸಲಾತಿ ನೀಡದೇ, ಕೇವಲ ಶೇ.3ರಷ್ಟು ಮಾತ್ರ ಮೀಸಲಾತಿ ನೀಡುತ್ತಿರುವುದು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿದರು.

       ಕೇಂದ್ರ ಸರ್ಕಾರ ಈಗಾಗಲ್ಲೇ ಎಲ್ಲಾ ಕ್ಷೇತ್ರಗಳಲ್ಲೂ ಪರಿಶಿಷ್ಟ ಪಂಗಡಕ್ಕೆ ಶೇ.7.5 ರಷ್ಟು ಮೀಸಲಾತಿ ನೀಡುತ್ತಿದ್ದು, ಇದೇ ಮಾದರಿಯಲ್ಲಿ ರಾಜ್ಯ ಸರ್ಕಾರ ಪರಿಶಿಷ್ಟ ಪಂಗಡಕ್ಕೆ ನೀಡುತ್ತಿರುವ ಮೀಸಲಾತಿಯನ್ನು ಶೇ.3ರಿಂದ 7.5ಕ್ಕೆ ಹೆಚ್ಚಿಸಬೇಕೆಂದು ಒತ್ತಾಯಿಸಿ, ಹಲವು ಬಾರಿ ಮನವಿ ಸಲ್ಲಿಸಿದರೂ ಸಹ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.

      ನಾಯಕ ಸಮುದಾಯದ ಬೇಡಿಕೆಯನ್ನು ಸರ್ಕಾರಕ್ಕೆ ಅರ್ಪಿಸಲಿದ್ದೇವೆ. ಪರಿಶಿಷ್ಟ ಪಂಗಡದ ನಾಯಕ ಸಮಾಜಕ್ಕೆ ಸಿಗಬೇಕಾದ ಸೌಲಭ್ಯ, ಹಕ್ಕಿಗಾಗಿ ವಾಲ್ಮೀಕಿ ಗುರು ಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಸಾರಥ್ಯದಲ್ಲಿ ನಮ್ಮ ಸಮುದಾಯ ಹೋರಾಟಕ್ಕಿಳಿದಿದೆ. ನಮಗೆ ನ್ಯಾಯ ಸಿಗುವವರೆಗೂ ಹೋರಾಟ ನಿರಂತರವಾಗಿ ಹೋರಾಟ ನಡೆಯಲಿದೆ ಎಂದು ಎಚ್ಚರಿಸಿದರು.

     ಸಮಾಜದ ಹಿರಿಯ ಮುಖಂಡ ಎಚ್.ಕೆ.ರಾಮಚಂದ್ರಪ್ಪ ಮಾತನಾಡಿ, ಪರಿಶಿಷ್ಟ ಪಂಗಡಕ್ಕೆ ಶೇ.7.5 ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಜೂ.9ರಿಂದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿ ಸಾರಥ್ಯದಲ್ಲಿ ರಾಜಧಾನಿ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. 9ಕ್ಕೆ ರಾಜನಹಳ್ಳಿಯಿಂದ ಹೊರಡುವ ಪಾದಯಾತ್ರೆ 16 ದಿನಗಳ ಕಾಲ ಸಾಗಲಿದ್ದು, ರಾಜಧಾನಿಯಲ್ಲಿ ನಮ್ಮ ಬೇಡಿಕೆ ಈಡೇರುವ ವರೆಗೂ ಹೋರಾಟ ಮುಂದುವರೆಯಲಿದೆ ಎಂದು ಹೇಳಿದರು.

       ಪರಿಶಿಷ್ಟ ಪಂಗಡಕ್ಕೆ ಶಿಕ್ಷಣ, ಉದ್ಯೋಗದಲ್ಲಿ ಶೇ.7.5 ಮೀಸಲಾತಿ ನೀಡಲು ರಾಜ್ಯ ಸರ್ಕಾರ ಮೀನಾ-ಮೇಷ ಎಣಿಸುತ್ತಿರುವುದು ಸರಿಯಲ್ಲ. ಸಂವಿಧಾನಬದ್ದವಾಗಿ, ಕಾನೂನಾತ್ಮಕವಾಗಿ ಜನಸಂಖ್ಯೆಗನುಗುಣವಾಗಿ ಮೀಸಲಾತಿ ಹೆಚ್ಚಿಸಬೇಕಾದ್ದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಆದರೆ, ರಾಜ್ಯ ಸರ್ಕಾರ ಮೀಸಲಾತಿ ಹೆಚ್ಚಿಸಲು ಹಿಂದೇಟು ಹಾಕುತ್ತಿರುವುದರಿಂದ ಸಮಾಜಕ್ಕೆ ತೀವ್ರ ಅನ್ಯಾಯವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

     ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡಕ್ಕೆ ಶಿಕ್ಷಣ ಹಾಗೂ ಉದ್ಯೋಗದಲ್ಲೂ ಶೇ.7.5 ರಷ್ಟು ಮೀಸಲಾತಿ ಕಲ್ಪಿಸಬೇಕು. ಎಸ್ಸಿ-ಎಸ್ಟಿ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪಡೆದಿರುವವರನ್ನು ಗುರುತಿಸಿ, ಕೆಲಸದಿಂದ ವಜಾಗೊಳಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು. ರಾಜ್ಯದ ಯಾವುದಾದರೂ ಒಂದು ವಿವಿಗೆ ವಾಲ್ಮೀಕಿ ಮಹರ್ಷಿಗಳ ಹೆಸರು ನಾಮಕರಣ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

       ಪ್ರತಿಭಟನೆಯ ನೇತೃತ್ವವನ್ನು ಸಮಾಜದ ತಾಲೂಕು ಅಧ್ಯಕ್ಷ ಹದಡಿ ಎಂ.ಬಿ.ಹಾಲಪ್ಪ, ಜಿಪಂ ಸದಸ್ಯ ಕೆ.ಎಚ್.ಓಬಳಪ್ಪ, ಟಿ.ದಾಸಕರಿಯಪ್ಪ, ಮಲ್ಲಿಕಾರ್ಜುನ, ಶ್ರೀನಿವಾಸ ಟಿ.ದಾಸಕರಿಯಪ್ಪ, ಪಾಲಿಕೆ ಮಾಜಿ ಸದಸ್ಯರಾದ ಲಕ್ಷ್ಮೀದೇವಿ ವೀರಣ್ಣ, ವಿಜಯಶ್ರೀ, ಮಂಜಪ್ಪ, ಕಂದಗಲ್ಲು ಮಂಜುನಾಥ, ವಿನಾಯಕ ಪೈಲ್ವಾನ್, ಸತೀಶ, ಮಹಾಲಕ್ಷ್ಮಿ, ಮಲ್ಲಾಪುರ ದೇವರಾಜ, ಅಣಜಿ ಅಂಜಿನಪ್ಪ, ಬಿ.ಶಿವಮೂರ್ತಿ, ಅಣ್ಣಾಪುರದ ಹೇಮಣ್ಣ, ರಾಘು ದೊಡ್ಡಮನಿ, ಐಗೂರು ಹನುಮಂತಪ್ಪ, ಆವರಗೆರೆ ವಾಸು, ತರಕಾರಿ ಶಿವು ಮತ್ತಿತರರು ವಹಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap