ಬೆಂಗಳೂರು:
ಕೇಂದ್ರ ಸರ್ಕಾರವು ಇ-ಫಾರ್ಮಸಿ ವ್ಯವಸ್ಥೆಗೆ ಅನುವು ಮಾಡಿ ಕೊಡುವುದನ್ನು ಖಂಡಿಸಿ ಅಖಿಲ ಭಾರತೀಯ ಔಷಧಿ ಮಾರಾಟ ವ್ಯಾಪಾರಿಗಳ ಸಂಘ ಕರೆ ನೀಡಿರುವ ಔಷದಿ ಅಂಗಡಿಗಳ ಬಂದ್’ಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ದೇಶಾದ್ಯಂತ 85 ಲಕ್ಷಕ್ಕೂ ಅಧಿಕ ಔಷಧಿ ಅಂಗಡಿಗಳನ್ನು ಮುಚ್ಚಿ ಬಂದ್ ಬೆಂಬಲ ವ್ಯಕ್ತಪಡಿಸಿದರೆ,ಆಸ್ಪತ್ರೆಗಳು, ನರ್ಸಿಂಗ್ ಹೋಂಗಳಲ್ಲಿನ ಔಷಧಿ ಮಳಿಗೆಗಳು ಎಂದಿನಂತೆ ಕಾರ್ಯನಿರ್ವಹಿಸಿವೆ.
ಬೆಂಗಳೂರು ಸೇರಿದಂತೆ, ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ತಾಲ್ಲೂಕು ಕೇಂದ್ರಗಳಲ್ಲಿನ ಔಷಧಿ ಮಳಿಗೆಗಳು ಸಂಪೂರ್ಣ ಮುಚ್ಚಿದ್ದರಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಯಿತು. .ಗುರುವಾರ ಮಧ್ಯರಾತ್ರಿಯಿಂದಲೇ ಔಷಧಿ ಮಳಿಗೆಗಳನ್ನು ಮುಚ್ಚಿ ನಡೆಸುತ್ತಿರುವ ಬಂದ್ ಶುಕ್ರವಾರ ಮಧ್ಯರಾತ್ರಿಯವರೆಗೂ ಮುಂದುವರೆದಿದೆ.
ಔಷಧಿ ಮಳಿಗೆಗಳ ಮೂಲಕ ಔಷಧಿಗಳನ್ನು ಮಾರಾಟ ಮಾಡುವುದಕ್ಕೆ ಕಡಿವಾಣ ಹಾಕುವ ಇ-ಫಾರ್ಮಸಿ ವ್ಯವಸ್ಥೆಯ ನಿರ್ಧಾರದಿಂದ ಕೇಂದ್ರ ಸರ್ಕಾರ ಕೂಡಲೇ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಔಷಧಿ ವ್ಯಾಪಾರಿಗಳ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಒಟ್ಟು 24 ಸಾವಿರ ಮೆಡಿಕಲ್ ಹಾಗೂ ಬೆಂಗಳೂರಿನಲ್ಲಿ ಆರೂವರೆ ಸಾವಿರಕ್ಕೂ ಹೆಚ್ಚು ಮೆಡಿಕಲ್ ಶಾಪ್‍ಗಳು ಬಂದ್ ಆಗಿವೆ ಇನ್ನು ದೇಶಾದ್ಯಂತ ಸುಮಾರು 85 ಲಕ್ಷ ಮೆಡಿಕಲ್ ಶಾಪ್ ಗಳು ಸಹ ಬಂದ್ ಸಂಪೂರ್ಣ ಬೆಂಬಲ ಸೂಚಿಸಿವೆ.
ಡಿಕೆಶಿ ಎಚ್ಚರಿಕೆ
ಸರ್ಕಾರಿ ಆಸ್ಪತ್ರೆಗಳು ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ಆವರಣದಲ್ಲಿರುವ ಔಷಧ ವ್ಯಾಪಾರ ಮಳಿಗೆಗಳು ಇಂದು ಎಂದಿನಂತೆ ಕಾರ್ಯನಿರ್ಹಹಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಟ್ವಿಟರ್ ಮೂಲಕ ಸೂಚನೆ ನೀಡಿದ್ದಾರೆ.
ಒಂದೊಮ್ಮೆ ಯಾವುದಾದರೂ ಮಳಿಗೆಗಳು ಬಂದ್‍ನಲ್ಲಿ ಪಾಲ್ಗೊಂಡಿದ್ದೇ ಆದಲ್ಲಿ ಅಂತಹ ಮಳಿಗೆಗಳ ಪರವಾನಗಿ ರದ್ದುಪಡಿಸಲಾಗುವುದು . ಸರ್ಕಾರಿ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ಆವರಣದಿಂದ ತೆರವು ಮಾಡಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಅಗತ್ಯ ಸೇವಾ ಕಾಯ್ದೆ ವ್ಯಾಪ್ತಿಯಲ್ಲಿ ಬರುವ ಔಷಧ ಮಳಿಗೆಗಳು ಯಾವುದೇ ಕಾರಣಕ್ಕೂ ಬಂದ್‍ನಲ್ಲಿ ಭಾಗವಹಿಸುವಂತಿಲ್ಲ. ಭಾಗವಹಿಸಿದರೆ ಕಠಿಣ ಕ್ರಮ ಎದುರಿಸಬೇಕಾದೀತು ಎಂದು ಎಚ್ಚರಿಸಿ ಟ್ವೀಟ್‍ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ