ಕಾದು ನೋಡುವ ತಂತ್ರಕ್ಕೆ ಮೋರೆ ಹೋದ ಅತೃಪ್ತ ಶಾಸಕರು

ಬೆಂಗಳೂರು

         ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಲು ತುದಿಗಾಲ ಮೇಲೆ ನಿಂತಿರುವ ಸಚಿವಾಕಾಂಕ್ಷಿ ಶಾಸಕರುಗಳು ಡಿ. 5 ರಂದು ನಡೆಯಲಿರುವ ಕಾಂಗ್ರೆಸ್-ಜೆಡಿಎಸ್ ಸಮನ್ವಯ ಸಮಿತಿ ಸಭೆಯ ನಿರ್ಧಾರವನ್ನು ಅವಲೋಕಿಸಿ ಮುಂದಿನ ರಾಜಕೀಯ ದಾರಿ ಕಂಡುಕೊಳ್ಳಲು ಮುಂದಾಗಿದ್ದಾರೆ.

          ಡಿ. 10 ರಿಂದ ಬೆಳಗಾವಿಯಲ್ಲಿ ಆರಂಭವಾಗಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆಯಾಗಬೇಕು ಎಂದು ಸಚಿವಾಕಾಂಕ್ಷಿ ಶಾಸಕರುಗಳು ಪಕ್ಷದ ವರಿಷ್ಠರ ಮೇಲೆ ಒತ್ತಡ ಹೇರಿದ್ದಾರೆ.

        ಒಂದು ವೇಳೆ ಅಧಿವೇಶನದ ಒಳಗೆ ಸಂಪುಟ ವಿಸ್ತರಣೆಯಾಗದಿದ್ದರೆ ಸಚಿವಾಕಾಂಕ್ಷಿ ಶಾಸಕರುಗಳು ತಮ್ಮದೇ ಆದ ರಾಜಕೀಯ ಹಾದಿ ತುಳಿಯಲು ನಿರ್ಧರಿಸಿದ್ದಾರೆ.

       ಸಚಿವಾಕಾಂಕ್ಷಿ ಶಾಸಕರುಗಳ ನಿರ್ಧಾರವನ್ನು ಅರಿತಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ಸಂಪುಟ ವಿಸ್ತರಣೆಯಾದರೆ ಸರ್ಕಾರಕ್ಕೆ ಸಂಕಷ್ಟಕ್ಕೆ ಸಿಲುಕಲಿದೆ. ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಮಾಡದಿರುವುದೇ ಲೇಸು ಎಂಬ ಸಂದೇಶವನ್ನು ಕಾಂಗ್ರೆಸ್ ಪಕ್ಷ ಹೈಕಮಾಂಡ್‍ಗೆ ಮುಟ್ಟಿಸಿದ್ದಾರೆ ಎಂದು ವಿಶ್ವಾಸನೀಯ ಮೂಲಗಳು ತಿಳಿಸಿವೆ.

       ಸಂಪುಟ ವಿಸ್ತರಣೆಯ ಬಗ್ಗೆ ಕಾಂಗ್ರೆಸ್-ಜೆಡಿಎಸ್ ಪಕ್ಷದ ನಾಯಕರುಗಳು ತೀರ್ಮಾನ ಕೈಗೊಳ್ಳಲಿದ್ದಾರೆ. ನನ್ನದೇನಿದ್ದರೂ ಸರ್ಕಾರದ ಆಡಳಿತ ನಿರ್ವಹಣೆ ಮಾತ್ರ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಬಹಿರಂಗವಾಗಿ ಹೇಳಿದ್ದರೂ ಒಳಗೊಳಗೆ ಸಂಪುಟ ವಿಸ್ತರಣೆ ಸದ್ಯಕ್ಕೆ ಬೇಡ ಎಂದು ದೆಹಲಿಯ ಕಾಂಗ್ರೆಸ್ ನಾಯಕರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಮೂಲಗಳು ಹೇಳಿವೆ.

       ವಿಧಾನಮಂಡಲದ ಅಧಿವೇಶನದ ಒಳಗೆ ಸಂಪುಟ ವಿಸ್ತರಣೆಯಾಗದಿದ್ದರೆ ನಂತರ ಶೂನ್ಯ ಮಾಸ ಬರುತ್ತದೆ. ಅದರ ನೆಪ ಹೇಳಿ ಸಂಪುಟ ವಿಸ್ತರಣೆ ಮುಂದಕ್ಕೆ ಹೋಗುವುದನ್ನು ಮನಗಂಡಿರುವ ಸಚಿವಾಕಾಂಕ್ಷಿ ಶಾಸಕರು ಶತಾಯ-ಗತಾಯ ಅಧಿವೇಶನದೊಳಗೆ ಸಂಪುಟ ವಿಸ್ತರಣೆಯಾಗಬೇಕು. ಇಲ್ಲದಿದ್ದರೆ ನಮ್ಮ ದಾರಿಯನ್ನು ನಾವು ಕಂಡುಕೊಳ್ಳುತ್ತೇವೆ ಎಂದು ರಾಜ್ಯದ ಕಾಂಗ್ರೆಸ್ ನಾಯಕರುಗಳಿಗೆ ತಮ್ಮದೇ ಆದ ದಾಟಿಯಲ್ಲಿ ಹೇಳಿದ್ದಾರೆ.

        ಸಚಿವ ಸಂಪುಟ ವಿಸ್ತರಣೆಗೆ ಇರುವ ಒತ್ತಡವನ್ನು ಮನಗಂಡಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಎರಡು ದಿನಗಳ ಹಿಂದೆ ದೆಹಲಿಗೆ ತೆರಳಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಸೇರಿದಂತೆ ವರಿಷ್ಠ ನಾಯಕರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆಯಾಗದಿದ್ದರೆ ಕಾಂಗ್ರೆಸ್‍ನಲ್ಲಿ ಅಸಮಾಧಾನ ಸ್ಫೋಟವಾಗಲಿದೆ. ಶಾಸಕರ ಒಗ್ಗಟ್ಟನ್ನು ಕಾಯ್ದುಕೊಳ್ಳುವುದು ಕಷ್ಟ. ಹಾಗಾಗಿ ಆದಷ್ಟು ಬೇಗ ಸಂಪುಟ ವಿಸ್ತರಣೆ ಸಂಬಂಧ ತೀರ್ಮಾನ ತೆಗೆದುಕೊಳ್ಳಿ ಎಂದು ಹೇಳಿದ್ದಾರೆ. ಆದರೆ ವರಿಷ್ಠ ನಾಯಕರಿಗೆ ಸಂಪುಟ ವಿಸ್ತರಣೆ ಅತ್ತ ಧರಿ, ಇತ್ತ ಪುಲಿ ಎಂಬಂತಾಗಿದೆ.

       ಸಂಪುಟ ವಿಸ್ತರಣೆಯಾದರೆ ಸರ್ಕಾರ ಸಂಕಷ್ಟಕ್ಕೆ ಸಿಲುಕುತ್ತದೆ ಎಂಬ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಸಂದೇಶ, ಸಂಪುಟ ವಿಸ್ತರಣೆಯಾಗದಿದ್ದರೆ ಕಾಂಗ್ರೆಸ್‍ನಲ್ಲಿ ಅಸಮಾಧಾನ, ಅತೃಪ್ತಿ ಸ್ಫೋಟವಾಗಲಿದೆ ಎಂಬ ರಾಜ್ಯ ಕಾಂಗ್ರೆಸ್ ನಾಯಕರ ಪ್ರತಿಪಾದನೆ ನಡುವೆ ಯಾವ ತೀರ್ಮಾನ ಕೈಗೊಳ್ಳಬೇಕು ಎಂಬ ಅಯೋಮಯ ಸ್ಥಿತಿಯಲ್ಲಿ ಕಾಂಗ್ರೆಸ್ ವರಿಷ್ಠರು ಇದ್ದಾರೆ.

ಅವಕಾಶಕ್ಕಾಗಿ ಕಾಯುತ್ತಿರುವ ಬಿಜೆಪಿ

       ಸಂಪುಟ ವಿಸ್ತರಣೆಯಾದರೂ, ಆಗದಿದ್ದರೂ ರಾಜ್ಯ ರಾಜಕೀಯದಲ್ಲಿ ಆಗುವ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಬಿಜೆಪಿ ಸಂದರ್ಭ ನೋಡಿಕೊಂಡು ರಾಜಕೀಯ ತೀರ್ಮಾನಗಳನ್ನು ಕೈಗೊಳ್ಳಲು ನಿರ್ಧರಿಸಿದೆ.

        ಕಾಂಗ್ರೆಸ್ ಹಾಗೂ ಜೆಡಿಎಸ್‍ನ ಅತೃಪ್ತ ಶಾಸಕರನ್ನು ತನ್ನತ್ತ ಸೆಳೆಯಲು ಕೈ ಹಾಕಿ ಮುಖಭಂಗ ಅನುಭವಿಸಿರುವ ಬಿಜೆಪಿ ದೋಸ್ತಿಗಳ ನಡುವಿನ ರಾಜಕೀಯ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯತಂತ್ರ ರೂಪಿಸಲು ಅಣಿಯಾಗಿದೆ .ಬೆಳಗಾವಿ ಅಧಿವೇಶನದೊಳಗೆ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆದರೂ ಅಚ್ಚರಿಪಡಬೇಕಿಲ್ಲ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link